ಮಂಡ್ಯ ಜಿಲ್ಲೆಯಲ್ಲಿ ನಡೆಯುವ ನೀಟ್ ಪರೀಕ್ಷೆಗೆ 1958 ವಿದ್ಯಾರ್ಥಿಗಳು ಹಾಜರಾಗಲಿದ್ದು, 4 ಪರೀಕ್ಷೆ ಕೇಂದ್ರಗಳಾದ ಪಿಇಎಸ್ ಎಂಜಿನಿಯರಿಂಗ್ ಕಾಲೇಜು, ಪಿಇಎಸ್ ವಿಜ್ಞಾನ ಕಲಾ ಮತ್ತು ವಾಣಿಜ್ಯ ಕಾಲೇಜು, ಸರ್ಕಾರಿ ಮಹಿಳಾ ಕಾಲೇಜು ಮಂಡ್ಯ ಹಾಗೂ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು (ಕಲ್ಲು ಕಟ್ಟಡ) ಈ ಪರೀಕ್ಷಾ ಕೇಂದ್ರಗಳಲ್ಲಿ ನೀಟ್ ಪರೀಕ್ಷೆ ನಡೆಯಲಿದೆ.
ಕನ್ನಡಪ್ರಭ ವಾರ್ತೆ ಮಂಡ್ಯ
ನೀಟ್ ಮರು ಪರೀಕ್ಷೆಯು ಜೂ.21ರಂದು ನಡೆಯಲಿದ್ದು ಪರೀಕ್ಷಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಪಾರದರ್ಶಕ ಮತ್ತು ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸುವಂತೆ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ನಿರ್ದೇಶನ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ನಡೆಯುವ ನೀಟ್ ಪರೀಕ್ಷೆಗೆ 1958 ವಿದ್ಯಾರ್ಥಿಗಳು ಹಾಜರಾಗಲಿದ್ದು, 4 ಪರೀಕ್ಷೆ ಕೇಂದ್ರಗಳಾದ ಪಿಇಎಸ್ ಎಂಜಿನಿಯರಿಂಗ್ ಕಾಲೇಜು, ಪಿಇಎಸ್ ವಿಜ್ಞಾನ ಕಲಾ ಮತ್ತು ವಾಣಿಜ್ಯ ಕಾಲೇಜು, ಸರ್ಕಾರಿ ಮಹಿಳಾ ಕಾಲೇಜು ಮಂಡ್ಯ ಹಾಗೂ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು (ಕಲ್ಲು ಕಟ್ಟಡ) ಈ ಪರೀಕ್ಷಾ ಕೇಂದ್ರಗಳಲ್ಲಿ ನೀಟ್ ಪರೀಕ್ಷೆ ನಡೆಯಲಿದೆ.
ಪರೀಕ್ಷೆ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯದಂತಹ ಮೂಲಸೌಕರ್ಯ ವ್ಯವಸ್ಥೆಗಳು ಇರುವುದನ್ನು ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಮುಂಚಿತವಾಗಿ ಪರಿಶೀಲಿಸಿ ಖಾತ್ರಿಪಡಿಸಿಕೊಳ್ಳಬೇಕು ಎಂದರು.ಪರೀಕ್ಷೆ ನಡೆಯುವ ದಿನದಂದು ವಿದ್ಯುತ್ ವ್ಯತ್ಯಯವಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಚೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯಲ್ಲಿ ಯಾವುದೇ ಲೋಪಗಳು ಕಂಡುಬರದಂತೆ ಪರಸ್ಪರ ಸಮನ್ವಯದಿಂದ ಕರ್ತವ್ಯ ನಿರ್ವಹಿಸುವಂತೆ ಹಾಗೂ ವಿವಿಧ ಇಲಾಖೆಗಳು ಪರೀಕ್ಷೆಯ ಅವಧಿಯಲ್ಲಿ ಅಗತ್ಯ ಸಹಕಾರ ನೀಡುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ, ಮಂಡ್ಯ ಉಪ ವಿಭಾಗಧಿಕಾರಿ ಎಂ.ಶಿವಮೂರ್ತಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.ಅಭಿಯಾನ ರೂಪದಲ್ಲಿ ನಿವೇಶನಕ್ಕೆ ಜಾಗ ಗುರುತಿಸಿ: ಡಾ.ಕುಮಾರಕನ್ನಡಪ್ರಭ ವಾರ್ತೆ ಮಂಡ್ಯವಸತಿ ಉದ್ದೇಶಕ್ಕಾಗಿ ನಿವೇಶನ ರಹಿತರಿಗೆ ಸರ್ಕಾರಿ ಜಾಗಗಳನ್ನು ಗುರುತಿಸುವ ಕಾರ್ಯವನ್ನು ಅಭಿಯಾನ ರೂಪದಲ್ಲಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ನಿವೇಶನ ರಹಿತರಿಗೆ ಸರ್ಕಾರದ ವಿವಿಧ ಯೋಜನೆಗಳಡಿ ವಸತಿ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಹಸೀಲ್ದಾರರು ತಾಲೂಕು ಹಾಗೂ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಪ್ರಸ್ತಾವನೆಗಳನ್ನು ಪಡೆದು ನಿವೇಶನಕ್ಕಾಗಿ ಸೂಕ್ತ ಸರ್ಕಾರಿ ಜಾಗಗಳನ್ನು ಗುರುತಿಸಬೇಕು ಎಂದರು.ಪ್ರತಿ ಗ್ರಾಪಂಗೆ ಕನಿಷ್ಠ 5 ಎಕರೆ ಹಾಗೂ ಗರಿಷ್ಠ 20 ಎಕರೆ ಸರ್ಕಾರಿ ಜಾಗವನ್ನು ನಿವೇಶನ ಉದ್ದೇಶಕ್ಕಾಗಿ ಗುರುತಿಸಿ, ಅಗತ್ಯ ಪ್ರಸ್ತಾವನೆಗಳನ್ನು ತಯಾರಿಸಿ ಸಲ್ಲಿಸುವಂತೆ ಎಲ್ಲಾ ತಹಸೀಲ್ದಾರರಿಗೆ ಸೂಚಿಸಿದರು.ಅಲ್ಲದೇ, ಈಗಾಗಲೇ ಪರಿಭಾವಿತ (ಡೀಮ್ಡ್) ಅರಣ್ಯ ಪಟ್ಟಿಯಿಂದ ಕೈಬಿಡಲಾಗುತ್ತಿರುವ ಸೂಕ್ತ ಜಾಗಗಳನ್ನು ನಿವೇಶನ ಉದ್ದೇಶಕ್ಕಾಗಿ ಕಾಯ್ದಿರಿಸುವ ಕುರಿತು ಅಗತ್ಯ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ನಿರ್ದೇಶನ ನೀಡಲಾಗಿದೆ. ನಿವೇಶನ ರಹಿತ ಅರ್ಹ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸುವುದು ಸರ್ಕಾರದ ಆದ್ಯತೆಯ ಕಾರ್ಯಕ್ರಮವಾಗಿದ್ದು, ಈ ಸಂಬಂಧ ಎಲ್ಲಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಶೀಘ್ರ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ತಿಳಿಸಿದರು.ಸಭೆಯಲ್ಲಿ ಜಿಲ್ಲೆಯ ಎಲ್ಲಾ ತಹಸೀಲ್ದಾರರು, ಉಪವಿಭಾಗಾಧಿಕಾರಿಗಳು ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.