ಸಾರಾಂಶ
ಹಾವೇರಿ: ಸಂವಿಧಾನದ ಹಕ್ಕುಗಳ ಬಗ್ಗೆ ಮಾತನಾಡುತ್ತೇವೆ, ಆದರೆ ನಮ್ಮ ಕರ್ತವ್ಯಗಳನ್ನು ಮರೆಯುತ್ತಿದ್ದೇವೆ. ಹಕ್ಕುಗಳು ಮತ್ತು ಕರ್ತವ್ಯಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ನಮ್ಮ ಹಕ್ಕುಗಳ ಜತೆಗೆ ಮೂಲಭೂತ ಕರ್ತವ್ಯಗಳನ್ನು ಚಾಚೂತಪ್ಪದೇ ಪಾಲಿಸಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಟ್ಟರಾಜು ಹೇಳಿದರು.
ನಗರದ ಶ್ರೇಯಸ್ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಶುಕ್ರವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ಶ್ರೇಯಸ್ ಪ್ಯಾರಾಮೆಡಿಕಲ್ ಕಾಲೇಜು ಸಹಯೋಗದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳ ಕುರಿತು ಕಾನೂನು ಅರಿವು ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ, ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು.ಯುವ ಸಮೂಹ ದೇಶದ ಆಸ್ತಿಯಾಗಿದ್ದು, ಯುವಜನತೆಗೆ ಕಾನೂನು ಅರಿವು ಮೂಡಿಸಲು ಶಾಲಾ-ಕಾಲೇಜುಗಳಲ್ಲಿ ಕಾನೂನು ಅರಿವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ತಿಳಿದುಕೊಳ್ಳಬೇಕು ಹಾಗೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಚ್. ಜತ್ತಿ ಮಾತನಾಡಿ, ಪ್ರತಿಯೊಬ್ಬರೂ ದೇಶಕ್ಕೆ ದೊಡ್ಡ ಕೊಡುಗೆ ನೀಡುವ ನಿಟ್ಟಿನಲ್ಲಿ ಚಿಂತನೆ ಮಾಡಬೇಕು ಹಾಗೂ ಅಭಿವೃದ್ಧಿ ಪಥದತ್ತ ಕೊಂಡೊಯ್ಯಬೇಕು. ದೇಶಕ್ಕಾಗಿ ನಾವೇನು ಮಾಡಿದ್ದೇವೆ ಎಂದು ಚಿಂತನೆ ಮಾಡಬೇಕು. ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ತಿಳಿದುಕೊಳ್ಳಬೇಕು. ಯುವ ಸಮೂಹ ಸದಾ ಲವಲವಿಕೆಯಿಂದ ಕಾರ್ಯನಿರ್ವಹಿಸಬೇಕು. ಜೀವನದಲ್ಲಿ ವಿದ್ಯಾರ್ಥಿಗಳು ದೊಡ್ಡ ಗುರಿ ಇಟ್ಟುಕೊಳ್ಳಬೇಕು ಎಂದು ಹೇಳಿದರು.ಶ್ರೇಯಸ್ ಪ್ಯಾರಾಮೆಡಿಕಲ್ ಕಾಲೇಜ ಉಪನ್ಯಾಸಕಿ ಡಾ. ವಿನುತಾ ತುರಕಾಣಿ ಮಾತನಾಡಿ, ಸ್ವಾಮಿ ವಿವೇಕಾನಂದರು ಇತರ ದೇಶಗಳಿಗಿಂತ ಭಾರತ ದೇಶದ ಶ್ರೇಷ್ಠ ಎಂದು ತೋರಿಸಿಕೊಟ್ಟಿದ್ದಾರೆ. ಅವರ ದೇಶಭಕ್ತಿ ಹಾಗೂ ರಾಷ್ಟ್ರಾಭಿಮಾನ ಯುವ ಜನತೆಗೆ ಸ್ಫೂರ್ತಿದಾಯಕವಾಗಿದೆ. ಸತತ ಪರಿಶ್ರಮದ ಅಧ್ಯಯನದಿಂದ ಏನನ್ನಾದರೂ ಸಾಧಿಸಬಹುದು. ಹಿರಿಯರನ್ನು ಗೌರವದಿಂದ ಹಾಗೂ ಕಿರಿಯರನ್ನು ಪ್ರೀತಿಯಿಂದ ಕಾಣುವುದರಿಂದ ಸ್ವಸ್ಥ ಸಮಾಜ ನಿರ್ಮಾಣ ಎಂದು ಹೇಳಿದರು.
ಶ್ರೇಯಸ್ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ. ತಿಪ್ಪೇಸ್ವಾಮಿ ಹೊಸಮನಿ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾಗಿ ಭಾಗವಹಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಾಯಕ ಕಾನೂನು ನೆರವು ಅಭಿರಕ್ಷಣಾ ವಕೀಲ ಎನ್.ಎನ್. ಡಿಳ್ಳೆಪ್ಪನವರ ಮಾತನಾಡಿ, ರಾಷ್ಟ್ರೀಯ ಯುವ ದಿನಾಚರಣೆ ಹಾಗೂ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತು ವಿವರವಾದ ಮಾಹಿತಿ ನೀಡಿದರು.ನೇತ್ರ ತಜ್ಞ ಡಾ. ಶ್ರವಣ ಪಂಡಿತ, ಜಿಲ್ಲಾ ನ್ಯಾಯವಾದಿಗಳ ಸಂಘದ ಕಾರ್ಯದರ್ಶಿ ಪಿ.ಎಸ್. ಹೆಬ್ಬಾಳ ಇತರರು ಭಾಗವಹಿಸಲಿದ್ದಾರೆ. ಶ್ರೇಯಸ್ ಶಿಕ್ಷಣ ಸಮಿತಿ ಆಡಳಿತಾಧಿಕಾರಿ ರೇಣುಕಾಪ್ರಸಾದ ಪ್ರಾಸ್ತಾವಿಕವಾಗಿ ಮಾತನಾಡಿದರು. ಚೇತನಾ ಎಂ. ಸ್ವಾಗತಿಸಿದರು. ಚೇತನಾ ರೂಗಿ ಕಾರ್ಯಕ್ರಮ ನಿರೂಪಿಸಿದರು.