ಸಾರಾಂಶ
ಕನ್ನಡಪ್ರಭ ವಾರ್ತೆ ರಾಯಚೂರು
ಲೋಕಸಭೆ ಚುನಾವಣೆ ಘೋಷಣೆಯಾಗಿದ್ದು, ನಿಯಮಾನುಸಾರ ಹಾಗೂ ಪಾರದರ್ಶಕವಾಗಿ ಚುನಾವಣೆ ನಡೆಸಲು ರಾಜಕೀಯ ಪಕ್ಷಗಳ ಸಹಕಾರ ಅಗತ್ಯವಾಗಿದ್ದು, ನೀತಿ ಸಂಹಿತೆ ಉಲ್ಲಂಘನೆಗೆ ಅವಕಾಶ ನೀಡದಂತೆ ಚುನಾವಣಾ ನಿಯಮಗಳನ್ನು ಪಾಲಿಸುವಂತೆ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಹೇಳಿದರು.ಸ್ಥಳೀಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಜಕೀಯ ಪಕ್ಷದ ಮುಖಂಡರೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿ, ಈಗಾಗಲೇ ಭಾರತ ಚುನಾವಣಾ ಆಯೋಗದಿಂದ ಲೋಕಸಭೆ ಚುನಾವಣೆಯ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಅದೇ ರೀತಿ ಮಾದರಿ ನೀತಿ ಸಂಹಿತೆಯೂ ಜಾರಿಗೊಂಡಿದೆ. ಚುನಾವಣೆಯನ್ನು ಅಚ್ಚುಕಟ್ಟಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಆಯೋಗವು ನಿಯಮಗಳನ್ನು ರೂಪಿಸಿ, ಅವುಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಿದೆ ಅವುಗಳನ್ನು ರಾಜಕೀಯ ಪಕ್ಷಗಳು ಅರಿತುಕೊಂಡು ಯಶಸ್ವಿ ಚುನಾವಣೆಗೆ ಸಹಕರಿಸಬೇಕು ಎಂದರು.
ರಾಯಚೂರು ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ನಾಮ ಪತ್ರ ಸಲ್ಲಿಸಲು ಏ.4ರಂದು ಅಧಿಸೂಚನೆ ಹೊರಡಿಸಲಾಗುವುದು. ನಂತರ ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರಗಳನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯದ ನಾಮಪತ್ರ ಸ್ವೀಕೃತಿ ಕೊಠಡಿಯಲ್ಲಿ ಸ್ವೀಕರಿಸಲಾಗುವುದು. ನಾಮಪತ್ರಗಳನ್ನು ಸಲ್ಲಿಸಲು ಅಭ್ಯರ್ತಿಯನ್ನು ಒಳಗೊಂಡು ಐದು ಜನರಿಗೆ ಮಾತ್ರ ಅವಕಾಶವಿದ್ದು, ಒಬ್ಬ ಅಭ್ಯರ್ಥಿ ನಾಲ್ಕು ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿದೆ. ನಾಮಪತ್ರ ಸಲ್ಲಿಕೆ ವೇಳೆ ಚುನಾವಣಾಧಿಕಾರಿಗಳ ಕಾರ್ಯಾಲಯದಿಂದ 100 ಮೀಟರ್ ಅಂತರದಲ್ಲಿ 3 ವಾಹನಗಳನ್ನು ಮಾತ್ರ ಒಳಗಡೆ ಪ್ರವೇಶಿಸಲು ಅನುಮತಿ ನೀಡಲಾಗುವುದು ಎಂದು ತಿಳಿಸಿದರು.ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ನಿಯಮಗಳ ಮೇಲೆ ಹೆಚ್ಚಿನ ಗಮನ ಹರಿಸಬೇಕು, ನಾಮಪತ್ರ ಸಲ್ಲಿಕೆ, ನಾಮಪತ್ರ ಪರಿಶೀಲನೆ ಸಮಯದಲ್ಲಿ ರೂಪಿಸಿರುವ ನಿಯಮಗಳನ್ನು ಪಾಲಿಸಬೇಕು. ಪ್ರಚಾರದ ವೇಳೆ ವಾಹನ, ಮೈಕ್, ಪ್ರದೇಶದ ಮುಂಚಿನ ಪರವಾನಿಗಿ ಪಡೆಯಬೇಕು, ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ನೀತಿ ಸಂಹಿತೆಯ ಉಲ್ಲಂಘನೆಗಾಗಿ ಮತ್ತು ವಿವಿಧ ವಿಷಯಗಳಿಗಾಗಿ ದೂರುಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. 1950ಗೆ ಕರೆ ಮಾಡುವ ಮೂಲಕ, ಸಿವಿಜಿಲ್ ಆ್ಯಪ್ ಅಥವಾ ಇತರೆ ಮಾಧ್ಯಮದ ಮೂಲಕ ಅವಕಾಶ ಕಲ್ಪಿಸಲಾಗಿದೆ ಎಂದರು.
ಒಟ್ಟಾರೆಯಾಗಿ ಲೋಕಸಭೆ ಚುನಾಚಣೆಯನ್ನು ನ್ಯಾಸಮ್ಮತ ಹಾಗೂ ಮುಕ್ತವಾಗಿ ನಡೆಸಲು ಎಲ್ಲಾ ರಾಜಕೀಯ ಪಕ್ಷಗಳ ಸಹಕಾರ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಚುನಾವಣಾ ಆಯೋಗ ಮತ್ತು ಜಿಲ್ಲಾ ಚುನಾವಣಾ ಅಧಿಕಾರಿಗಳ ಕಾರ್ಯಾಲಯದಿಂದ ನೀಡಲಾಗುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದರು.ಸಭೆಯಲ್ಲಿ ಚುನಾವಣಾ ಶಾಖೆಯ ಶಿರಸ್ತೇದಾರ ರಿಷಿಕೇಶ, ವಿಷಯ ನಿರ್ವಾಹಕ ರಮೇಶ, ತಾಂತ್ರಿಕ ಆಧಿಕಾರಿ ಶಿವಕುಮಾರ, ರಾಜಕೀಯ ಪಕ್ಷಗಳ ಮುಖಂಡರಾದ ಕೆ.ತಿರುಮಲರೆಡ್ಡಿ, ಶಂಕರ ಕಲ್ಲೂರು, ರವಿಕುಮಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.