ಸಂಚಾರ ಸುರಕ್ಷತಾ ನಿಯಮ ಪಾಲಿಸಿ ಜೀವ ರಕ್ಷಿಸಿ: ನ್ಯಾ.ಕೆ.ಗೋಪಾಲಕೃಷ್ಣ

| Published : Nov 19 2025, 01:00 AM IST

ಸಂಚಾರ ಸುರಕ್ಷತಾ ನಿಯಮ ಪಾಲಿಸಿ ಜೀವ ರಕ್ಷಿಸಿ: ನ್ಯಾ.ಕೆ.ಗೋಪಾಲಕೃಷ್ಣ
Share this Article
  • FB
  • TW
  • Linkdin
  • Email

ಸಾರಾಂಶ

ರಸ್ತೆ ಸುರಕ್ಷತೆ ನಮ್ಮ ಜೀವನದ ಅವಿಭಾಜ್ಯ ಭಾಗ. ಇಂದಿನ ವೇಗದ ಯುಗದಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿರುವ ಕಾರಣ ರಸ್ತೆಗಳಲ್ಲಿ ಅಪಘಾತಗಳ ಪ್ರಮಾಣ ಹೆಚ್ಚಾಗುತ್ತಿದೆ. ದೇಶದಲ್ಲಿ ಪ್ರತಿ ವರ್ಷ 1.24 ಮಿಲಿಯನ್ ಜನರು ರಸ್ತೆ ಅಪಘಾತದಲ್ಲಿ ಪ್ರತಿ ವರ್ಷ 5 ಲಕ್ಷ ಅಪಘಾತಗಳಲ್ಲಿ ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.

ಕನ್ನಡಪ್ರಭ ವಾರ್ತೆ ಮದ್ದೂರು

ಜನರು ರಸ್ತೆ ಸಂಚಾರ ಸುರಕ್ಷತಾ ನಿಯಮ ಪಾಲಿಸುವ ಮೂಲಕ ತಮ್ಮ ಅಮೂಲ್ಯ ಜೀವ ರಕ್ಷಣೆ ಮಾಡಿಕೊಳ್ಳಬೇಕು ಎಂದು ಜೆಎಂಎಫ್‌ಸಿ ನ್ಯಾಯಾಲಯದ 2ನೇ ಅಪರ ಸಿವಿಲ್ ನ್ಯಾಯಾಧೀಶ ಕೆ.ಗೋಪಾಲಕೃಷ್ಣ ಹೇಳಿದರು.

ಪಟ್ಟಣದ ಜವಾಹರ್ ಪ್ರೌಢಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದ ಸಹಯೋಗದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ನಡೆದ ರಸ್ತೆ ಸುರಕ್ಷತೆ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕುರಿತ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರಸ್ತೆ ಸುರಕ್ಷತೆ ನಮ್ಮ ಜೀವನದ ಅವಿಭಾಜ್ಯ ಭಾಗ. ಇಂದಿನ ವೇಗದ ಯುಗದಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿರುವ ಕಾರಣ ರಸ್ತೆಗಳಲ್ಲಿ ಅಪಘಾತಗಳ ಪ್ರಮಾಣ ಹೆಚ್ಚಾಗುತ್ತಿದೆ. ದೇಶದಲ್ಲಿ ಪ್ರತಿ ವರ್ಷ 1.24 ಮಿಲಿಯನ್ ಜನರು ರಸ್ತೆ ಅಪಘಾತದಲ್ಲಿ ಪ್ರತಿ ವರ್ಷ 5 ಲಕ್ಷ ಅಪಘಾತಗಳಲ್ಲಿ ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅಲ್ಲದೇ, ಶಾಶ್ವತವಾಗಿ ಅಂಗವಿಕಲರಾಗುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಅಪಘಾತಗಳ ಸಂಖ್ಯೆ ಕಡಿಮೆಯಾಗಬೇಕಾದರೆ ಕಡ್ಡಾಯವಾಗಿ ರಸ್ತೆ ಸುರಕ್ಷತಾ ಕ್ರಮ ಪಾಲಿಸಬೇಕು. ಸಾರ್ವಜನಿಕ ಸೇವಾ ಸಂಸ್ಥೆಗಳು ಪೊಲೀಸರೊಂದಿಗೆ ಕೈಜೋಡಿಸುವ ಮೂಲಕ ಜನರಲ್ಲಿ ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವುದು ಇಂದಿನ ದಿನಗಳಲ್ಲಿ ಅತ್ಯಗತ್ಯವಾಗಿದೆ ಎಂದರು.

ಸಹಾಯಕ ಸರ್ಕಾರಿ ಅಭಿಯೋಜಕ ಪ್ರೀತಂ ಡೇವಿಡ್, ರಸ್ತೆ ಸುರಕ್ಷತೆ ಹಾಗೂ ವಕೀಲೆ ಚೆನ್ನಮ್ಮ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕುರಿತು ಸಂಪನ್ಮೂಲ ಭಾಷಣ ಮಾಡಿದರು. ಜವಹರ್ ಪ್ರೌಢಶಾಲೆ ಮುಖ್ಯ ಶಿಕ್ಷಕ ಮಹೇಶ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ಎಂ. ಎನ.ಶಿವಣ್ಣ, ಕಾರ್ಯದರ್ಶಿ ಎಂ.ಜೆ.ಸುಮಂತ್ ಹಾಗೂ ಶಿಕ್ಷಕ ವೃಂದದವರು ಭಾಗವಹಿಸಿದ್ದರು.