ಚಿಕ್ಕಮಗಳೂರುನಗರದ ಬೀದಿ ಬದಿ ತಿಂಡಿ ವ್ಯಾಪಾರಿಗಳಿಗೆ ಸುಸಜ್ಜಿತ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಬಸವನಹಳ್ಳಿಯಲ್ಲಿ ₹1 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ನೂತನ ಫುಡ್‌ಕೋರ್ಟ್ ಕಾಮಗಾರಿಯನ್ನು ಗುಣಮಟ್ಟದಿಂದ ಪೂರ್ಣ ಗೊಳಿಸುವಂತೆ ಶಾಸಕ ಎಚ್.ಡಿ. ತಮ್ಮಯ್ಯ ಗುತ್ತಿಗೆದಾರರಿಗೆ ಸೂಚಿಸಿದರು.

ನಿರ್ಮಾಣಕ್ಕೆ ಶಾಸಕ ತಮ್ಮಯ್ಯ ಚಾಲನೆ । ತಾಲೂಕು ಕಚೇರಿ ಸಮೀಪ ಫುಡ್‌ಕೋರ್ಟ್ ನಿರ್ಮಾಣಕ್ಕೆ ಗುದ್ದಲಿಪೂಜೆ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರುನಗರದ ಬೀದಿ ಬದಿ ತಿಂಡಿ ವ್ಯಾಪಾರಿಗಳಿಗೆ ಸುಸಜ್ಜಿತ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಬಸವನಹಳ್ಳಿಯಲ್ಲಿ ₹1 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ನೂತನ ಫುಡ್‌ಕೋರ್ಟ್ ಕಾಮಗಾರಿಯನ್ನು ಗುಣಮಟ್ಟದಿಂದ ಪೂರ್ಣ ಗೊಳಿಸುವಂತೆ ಶಾಸಕ ಎಚ್.ಡಿ. ತಮ್ಮಯ್ಯ ಗುತ್ತಿಗೆದಾರರಿಗೆ ಸೂಚಿಸಿದರು.ನಗರದ ತಾಲೂಕು ಕಚೇರಿ ಸಮೀಪ ಶುಕ್ರವಾರ ಫುಡ್‌ಕೋರ್ಟ್ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು ಇಲ್ಲಿ ವ್ಯಾಪಾರ ನಡೆಸುವವರು ಬಹುತೇಕ ಬಡ ವ್ಯಾಪಾರಿಗಳಾಗಿದ್ದು, ಅವರಿಗೆ ಅನುಕೂಲವಾಗುವಂತೆ ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಅಗತ್ಯ ಮೂಲ ಕಲ್ಪಿಸಬೇಕು. ನಗರಸಭೆ ಅಧಿಕಾರಿಗಳು ಹಾಗೂ ಎಂಜಿನಿಯರ್‌ಗಳು ಸಿದ್ಧಪಡಿಸಿರುವ ಅಂದಾಜಿನಂತೆ ಕಾಮಗಾರಿ ಗುಣಮಟ್ಟದಿಂದ ನಡೆಯಬೇಕು ಎಂದರು.ನಗರಸಭೆ ಹಿಂಭಾಗದ ಬೇಲೂರು ರಸ್ತೆಯಲ್ಲಿ ನಿರ್ಮಿಸಿರುವ ಫುಡ್‌ಕೋರ್ಟ್ ಸಾರ್ವಜನಿಕರು ಹಾಗೂ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದು, ಅದೇ ಮಾದರಿಯಲ್ಲಿ ಬಸವನಹಳ್ಳಿ ಫುಡ್‌ಕೋರ್ಟ್‌ ಅಭಿವೃದ್ಧಿಪಡಿಸಲಾಗುವುದು. ತಿಂಡಿ ಗಾಡಿಗಳ ಮಾಲೀಕರ ಬಹುದಿನಗಳ ಬೇಡಿಕೆ ಪರಿಗಣಿಸಿ ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.ಸಂಚಾರಕ್ಕೂ ಆದ್ಯತೆ:ಫುಡ್‌ಕೋರ್ಟ್ ಆರಂಭವಾದ ಬಳಿಕ ಸಂಚಾರ ಹಾಗೂ ಪಾರ್ಕಿಂಗ್ ಸಮಸ್ಯೆ ಉಂಟಾಗದಂತೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು. ಸಂಜೆ 5ರಿಂದ ರಾತ್ರಿ 9ರವರೆಗೆ ಪೊಲೀಸರ ನಿಯೋಜಿಸಿ ಸಂಚಾರ ವ್ಯವಸ್ಥೆ ನಿಯಂತ್ರಿಸುವಂತೆ ಸೂಚಿಸಿದರು.ನಗರದ ಅಭಿವೃದ್ಧಿ ಕಾರ್ಯಗಳಲ್ಲಿ ಪಕ್ಷಭೇದ ಮರೆತು ಚುನಾಯಿತ ಪ್ರತಿನಿಧಿಗಳು ಒಗ್ಗೂಡಿ ಕಾರ್ಯನಿರ್ವಹಿಸುತ್ತಿದ್ದಾರೆ. ನಗರದ ಜನರಿಗೆ ಮೂಲಸೌಕರ್ಯ ಕಲ್ಪಿಸುವುದು ಎಲ್ಲ ಜನಪ್ರತಿನಿಧಿಗಳ ಜವಾಬ್ದಾರಿ ಎಂದರು.ನಗರದ ಹಲವು ರಸ್ತೆ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡಿದ್ದು, ಬಾಕಿ ರಸ್ತೆಗಳ ಡಾಂಬರೀಕರಣವನ್ನು ಡಿಸೆಂಬರ್‌ನಲ್ಲಿ ಕೈಗೆತ್ತಿಕೊಳ್ಳಲಾಗುವುದು. ಟಾರ್ ದರ ಏರಿಕೆಯಿಂದ ಕಾಮಗಾರಿಗೆ ತೊಂದರೆಯಾಗಿದ್ದು, ದರ ಸಾಮಾನ್ಯ ಸ್ಥಿತಿಗೆ ಬಂದ ಬಳಿಕ ಬಾಕಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದರು.ಪಿಂಚಣಿ ಹೆಸರಿನಲ್ಲಿ ಹಣ ಕೇಳಿದರೆ ಎಚ್ಚರವೃದ್ಧಾಪ್ಯ, ವಿಧವಾ ಹಾಗೂ ಸಂಧ್ಯಾ ಸುರಕ್ಷಾ ಯೋಜನೆಯಡಿ ಪಿಂಚಣಿ ಪಡೆಯುವ ಫಲಾನುಭವಿಗಳಿಗೆ ಕೆಲವು ತಿಂಗಳಿಂದ ಹಣ ಪಾವತಿಯಾಗದಿರುವ ವಿಚಾರ ಸರ್ಕಾರದ ಗಮನಕ್ಕೆ ತರಲಾಗಿದೆ. ಪಿಂಚಣಿ ಕೊಡಿಸುವುದಾಗಿ ಹೇಳಿ ಮನೆ ಮನೆಗೆ ತೆರಳಿ ಅರ್ಜಿ ಅಥವಾ ಹಣ ಕೇಳುವ ಮಧ್ಯವರ್ತಿಗಳನ್ನು ನಂಬಬಾರದು. ಪಿಂಚಣಿ ಹಣ ಫಲಾನುಭವಿಗಳ ಖಾತೆಗೆ ಜಮೆ ಯಾಗಲಿದೆ ಎಂದು ತಿಳಿಸಿದರು.ನಗರ ಸ್ವಚ್ಛತೆ ಕಾಪಾಡುವುದು ನಗರಸಭೆಯಷ್ಟೇ ಅಲ್ಲ, ಸಾರ್ವಜನಿಕರ ಜವಾಬ್ದಾರಿಯೂ ಆಗಿದೆ. ಮನೆಗಳಲ್ಲಿ ಹಸಿ ಹಾಗೂ ಒಣ ಕಸ ಪ್ರತ್ಯೇಕಿಸಿ ನಗರಸಭೆ ಕಸ ಸಂಗ್ರಹ ವಾಹನಗಳಿಗೆ ನೀಡಬೇಕು. ಇದರಿಂದ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಂಗಡಿಸಿ ಗೊಬ್ಬರ ತಯಾರಿಸಲು ಅನುಕೂಲ ಎಂದರು.ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿ ಫುಡ್‌ಕೋರ್ಟ್ ವ್ಯಾಪಾರಿಗಳು ಗ್ರಾಹಕರಿಗೆ ಸ್ವಚ್ಛ, ರುಚಿ ಕರ ಹಾಗೂ ಗುಣಮಟ್ಟದ ಆಹಾರ ಒದಗಿಸಬೇಕು. ಆಹಾರದ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದರು.ನಗರಸಭೆ ಆಯುಕ್ತ ಬಸವರಾಜ್ ಮಾತನಾಡಿ, ನಗರಸಭೆ ಅನುದಾನದಲ್ಲಿ ₹1 ಕೋಟಿಗೂ ಅಧಿಕ ವೆಚ್ಚದಲ್ಲಿ ಫುಡ್‌ಕೋರ್ಟ್ ನಿರ್ಮಿಸಲಾಗುತ್ತಿದೆ. ವಿಜಯಪುರ ಮುಖ್ಯ ರಸ್ತೆಯಲ್ಲಿ ತಿಂಡಿ ಗಾಡಿಗಳ ಮೂಲಕ ವ್ಯಾಪಾರ ನಡೆಸುತ್ತಿದ್ದವರ ಬಹುದಿನಗಳ ಬೇಡಿಕೆ ಹಿನ್ನೆಲೆಯಲ್ಲಿ ಯೋಜನೆ ರೂಪಿಸಲಾಗಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಕಾರ್ಯಾದೇಶ ನೀಡಲಾಗಿದೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಭವ್ಯ ಮಂಜುನಾಥ್, ಉಪಾಧ್ಯಕ್ಷೆ ಲಲಿತಾ ರವಿನಾಯಕ್, ಮಾಜಿ ಅಧ್ಯಕ್ಷರಾದ ಶೀಲಾ ದಿನೇಶ್, ವರಸಿದ್ಧಿ ವೇಣುಗೋಪಾಲ್, ನಗರಸಭೆ ಸದಸ್ಯರು, ನಾಮನಿರ್ದೇಶಿತ ಸದಸ್ಯರು ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರು ಉಪಸ್ಥಿತರಿದ್ದರು.

--ಪೋಟೋ:

ಚಿಕ್ಕಮಗಳೂರಿನ ಬಸವನಹಳ್ಳಿಯಲ್ಲಿ ನೂತನ ಫುಡ್‌ಕೋರ್ಟ್ ನಿರ್ಮಾಣಕ್ಕೆ ಶಾಸಕ ಎಚ್.ಡಿ. ತಮ್ಮಯ್ಯ ಶುಕ್ರವಾರ ಗುದ್ದಲಿಪೂಜೆ ನೆರವೇರಿಸಿದರು. ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಇದ್ದರು.