ಸಾರಾಂಶ
ಕನ್ನಡಪ್ರಭ ವಾರ್ತೆ ಮಣಿಪಾಲಜಾನುವಾರುಗಳಲ್ಲಿ ಕಂಡುಬರುವ ಕಾಲುಬಾಯಿ ರೋಗ ನಿಯಂತ್ರಣಕ್ಕೆ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ 5ನೇ ಸುತ್ತಿನ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಏ. 1 ರಿಂದ 30 ರವರೆಗೆ ಹಮ್ಮಿಕೊಳ್ಳಲಾಗುತ್ತಿದ್ದು, ರೈತರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ತಿಳಿಸಿದರು.
ಅವರು ಗುರುವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಾನುವಾರು ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಈ ಲಸಿಕಾ ಕಾರ್ಯಕ್ರಮದಲ್ಲಿ ಪಶು ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಮನೆಮನೆಗಳಿಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಸಹಕಾರ ನೀಡುವಂತೆ ತಿಳಿಸಿದ ಅವರು, ಹೆಚ್ಚಿನ ಸಂಖ್ಯೆಯ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಬೇಕು ಎಂದರು.
ಕಾಲುಬಾಯಿ ರೋಗ ತಡೆಗಟ್ಟಲು ಎಲ್ಲರೂ ಕಡ್ಡಾಯವಾಗಿ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು. ನಿರ್ಲಕ್ಷ್ಯ ಮಾಡಿದ್ದಲ್ಲಿ ಇತರ ಜಾನುವಾರುಗಳಿಗೂ ಕಾಯಿಲೆ ಹರಡುತ್ತದೆ. ಆದ್ದರಿಂದ ಜಾನುವಾರುಗಳಿಗೆ ಲಸಿಕೆ ಹಾಕಿಸಿ, ಅವುಗಳ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂದರು.ಲಸಿಕಾ ಕಾರ್ಯಕ್ರಮದ ಬಗ್ಗೆ ಶಾಲೆ, ನಗರಸಭೆ, ಗ್ರಾಮ ಪಂಚಾಯಿತಿ ವತಿಯಿಂದ ಕಸ ವಿಲೇವಾರಿ ವಾಹನಗಳಲ್ಲಿ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಂದ ಹೆಚ್ಚು ಪ್ರಚಾರ ಕೈಗೊಂಡು, ರೈತರಿಗೆ ಲಸಿಕಾ ಕಾರ್ಯಕ್ರಮದ ಕುರಿತು ಅರಿವು ಮೂಡಿಸುವುದರೊಂದಿಗೆ ಪ್ರತಿಶತಃ ನೂರರಷ್ಟು ಜಾನುವಾರುಗಳಿಗೆ ಲಸಿಕೆ ಹಾಕಿಸಲು ಕ್ರಮವಹಿಸಬೇಕು ಎಂದರು.
ಸಭೆಯಲ್ಲಿ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ಎಂ. ಸಿ. ರೆಡ್ಡಪ್ಪ, ಮಂಗಳೂರು ದಕ್ಷಿಣ ಕನ್ನಡ ಹಾಲು ಒಕ್ಕೂಟ ನಿಗಮದ ವ್ಯವಸ್ಥಾಪಕ ನಿರ್ದೇಶಕ ಚಂದ್ರಶೇಖರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ. ಪಿ. ಗಡಾದ್, ಮಹಿಳಾ ಮತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ. ಕೆ., ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ತಾಲೂಕು ಮುಖ್ಯ ಪಶುವೈದ್ಯಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.