ಏ.1ರಿಂದ ಜಾನುವಾರುಗಳಿಗೆ ಕಾಲುಬಾಯಿ ಜ್ವರ ಲಸಿಕೆ ಕಾರ್ಯಕ್ರಮ: ಜಿಲ್ಲಾಧಿಕಾರಿ

| Published : Mar 24 2024, 01:33 AM IST

ಸಾರಾಂಶ

ಜಾನುವಾರುಗಳಲ್ಲಿ ಕಂಡುಬರುವ ಕಾಲುಬಾಯಿ ರೋಗ ನಿಯಂತ್ರಣಕ್ಕೆ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಕಾಲುಬಾಯಿ ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ಜಿಲ್ಲಾದ್ಯಂತ ಏ.1ರಿಂದ 30ರವರೆಗೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ದಾವಣಗೆರೆ: ಜಾನುವಾರುಗಳಲ್ಲಿ ಕಂಡುಬರುವ ಕಾಲುಬಾಯಿ ರೋಗ ನಿಯಂತ್ರಣಕ್ಕೆ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಕಾಲುಬಾಯಿ ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ಜಿಲ್ಲಾದ್ಯಂತ ಏ.1ರಿಂದ 30ರವರೆಗೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಹೇಳಿದರು.

ನಗರದ ಆಫೀಸರ್ಸ್‌ ಕ್ಲಬ್‌ ಸಭಾಂಗಣದಲ್ಲಿ ಶುಕ್ರವಾರ ಕಾಲುಬಾಯಿ ರೋಗ ಲಸಿಕಾ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಲಸಿಕೆ ಕಾರ್ಯಕ್ಕೆ ಪಶು ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭ ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು ಎಂದರು.

ಲಸಿಕೆ ಹಾಕಿಸದೇ ನಿರ್ಲಕ್ಷ್ಯ ಮಾಡಿದ್ದಲ್ಲಿ ಜಾನುವಾರುಗಳಿಂದ ಜಾನುವಾರಿಗೆ ಕಾಯಿಲೆ ಹರಡುವ ಸಾಧ್ಯತೆಗಳಿವೆ. ಸಮಸ್ಯೆ ಗಂಭೀರವಾಗಲಿದೆ. ಜಾನುವಾರುಗಳಿಗೆ ಲಸಿಕೆ ಹಾಕಿಸಿ, ರೋಗದಿಂದ ರಕ್ಷಣೆ ಮಾಡಿಕೊಳ್ಳಬೇಕು ಎಂದರು.

ರೈತರಿಗೆ ಲಸಿಕಾ ಕಾರ್ಯಕ್ರಮದ ಕುರಿತು ಅರಿವು ಮೂಡಿಸುವುದರೊಂದಿಗೆ ಶೇಖಡಾವಾರು ಗುರಿ ಸಾಧನೆಗೆ ಕ್ರಮ ಕೈಗೊಳ್ಳಬೇಕು. ಕಾಲುಬಾಯಿ ರೋಗವು ಎತ್ತು, ಹೋರಿ, ಹಸು ಎಮ್ಮೆ ಮತ್ತು ಹಂದಿಗಳಲ್ಲಿ ಬಂದು ಮಾಲೀಕರಿಗೆ ಆರ್ಥಿಕತೆ ನಷ್ಟ ಉಂಟುಮಾಡುವ ಮಾರಕ ರೋಗವಾಗಿದೆ. ಆದ್ದರಿಂದ ಮೂರು ತಿಂಗಳು ಮೇಲ್ಪಟ್ಟ ಎಲ್ಲ ಜಾನುವಾರುಗಳಿಗೆ ಲಸಿಕೆ ಹಾಕುವುದು ಅಗತ್ಯವಾಗಿದೆ ಎಂದರು.

ಈ ಸಂದರ್ಭ ಪಶುಪಾಲನಾ ಇಲಾಖೆ ಉಪನಿರ್ದೇಶಕ ಚಂದ್ರಶೇಖರ ಸುಂಕದ್ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

- - - -23ಕೆಡಿವಿಜಿ36ಃ

ದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಕಾಲುಬಾಯಿ ರೋಗ ಲಸಿಕಾ ಅಭಿಯಾನದ ಪೋಸ್ಟರ್ ಬಿಡುಗಡೆ ಮಾಡಿದರು.