ಸಾರಾಂಶ
ಹನೂರು, ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು, ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಭೀಮನ ಅಮಾವಾಸ್ಯೆ - ಶ್ರಾವಣ ಮಾಸದ ಕುಂಭಾಭಿಷೇಕದ ಪೂರ್ವಭಾವಿ ಸಭೆ
ಕನ್ನಡಪ್ರಭ ವಾರ್ತೆ ಹನೂರು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಭೀಮನ ಅಮಾವಾಸ್ಯೆಗೆ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ ಇರುವುದರಿಂದ ಭಕ್ತರಿಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಬೇಕು ಎಂದು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು ತಿಳಿಸಿದರು.ಹನೂರು ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಭೀಮನ ಅಮಾವಾಸ್ಯೆ ಹಾಗೂ ಶ್ರಾವಣ ಮಾಸದ ಕುಂಭಾಭಿಷೇಕ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಶ್ರೀ ಕ್ಷೇತ್ರದಲ್ಲಿ ನಡೆಯಲಿರುವ ಎಣ್ಣೆ ಮಜ್ಜನ ಸೇವೆ, ಭೀಮನ ಅಮಾವಾಸ್ಯೆಯ ನಂತರ 108 ಕುಂಭಾಭಿಷೇಕ ಮಹೋತ್ಸವ 5 ದಿನ ನಡೆಯಲಿರುವುದರಿಂದ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಈ ನಿಟ್ಟಿನಲ್ಲಿ ಬರುವಂತಹ ಭಕ್ತಾದಿಗಳಿಗೆ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಶ್ರೀ ಕ್ಷೇತ್ರಕ್ಕೆ ಬರುವಂತಹ ಭಕ್ತಾದಿಗಳಿಗೆ ಶುದ್ಧ ಕುಡಿಯುವ ನೀರು, ನೆರಳಿನ ವ್ಯವಸ್ಥೆ, ವಿಶೇಷ ದಾಸೋಹ, ಪ್ರಸಾದದ ರೂಪದಲ್ಲಿ ನೀಡುವ ಲಾಡು ವ್ಯವಸ್ಥೆ, ಅಗತ್ಯ ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು, ಶ್ರೀ ಕ್ಷೇತ್ರದಲ್ಲಿ ಯಾವುದಾದರೂ ಸಮಸ್ಯೆಗಳಿದ್ದರೆ ನೇರವಾಗಿ ನನ್ನ ಗಮನಕ್ಕೆ ತಂದರೆ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇನೆ ಎಂದರು.ಸಿದ್ಧತೆಗಳ ಪರಿಶೀಲನೆ: ಭೀಮನ ಅಮಾವಾಸ್ಯೆ ಪ್ರಯುಕ್ತ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತಾದಿಗಳು ಆಗಮಿಸಿ ದರ್ಶನ ಪಡೆಯಲು ಸರತಿ ಸಾಲಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬರುವುದರಿಂದ ಈಗಾಗಲೇ ಭಕ್ತಾದಿಗಳಿಗೆ ತೊಂದರೆಯಾಗದಂತೆ ಸರತಿ ಸಾಲು ನಿರ್ಮಾಣ ಮಾಡಲಾಗಿದೆ. ದರ್ಶನದ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ನೂಕು ನುಗ್ಗಲಿಗೆ ಅವಕಾಶ ಕೊಡದೆ ಭಕ್ತಾದಿಗಳನ್ನು ನಿಯಂತ್ರಣ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಲಾಡು ತಯಾರಿಕಾ ಘಟಕಕ್ಕೆ ಭೇಟಿ: ಶ್ರೀ ಕ್ಷೇತ್ರದಲ್ಲಿ ನಡೆಯುವ ಭೀಮನ ಅಮಾವಾಸ್ಯೆ ಪ್ರಯುಕ್ತ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಈಗಾಗಲೇ ಪ್ರತಿದಿನ ಹೆಚ್ಚಿನ ಲಾಡು ತಯಾರಿಕೆ ಮಾಡಿಕೊಳ್ಳಲಾಗುತ್ತಿದೆ. ಜಾತ್ರಾ ಮಹೋತ್ಸವಕ್ಕೆ ಎರಡುವರೆ ಲಕ್ಷ ಸಂಗ್ರಹ ಮಾಡಿಕೊಳ್ಳಲಾಗುವುದು ಎಂದರು.ದಾಸೋಹ ಭವನಕ್ಕೆ ಭೇಟಿ: ಹೆಚ್ಚಿನ ಭಕ್ತಾದಿಗಳು ಆಗಮಿಸುವುದರಿಂದ ಪ್ರತಿ ದಿನದ ದಾಸೋಹ ಭವನದಲ್ಲಿ ನಡೆಯುವ ಪ್ರಸಾದದ ಜೊತೆಗೆ ಹೆಚ್ಚುವರಿ ವಿಶೇಷ ದಾಸೋಹ ತೆರೆದು ಬೆಳಗಿನ ತಿಂಡಿ ಮಧ್ಯಾಹ್ನದ ಉಪಹಾರ ಹಾಗೂ ರಾತ್ರಿ ನಿರಂತರವಾಗಿ ಪ್ರಸಾದ ವಿತರಣೆ ಮಾಡಲು ಕ್ರಮ ಕೈಗೊಳ್ಳಬೇಕು, ಪ್ರಸಾದದ ತಯಾರಿಕೆ ಸಂದರ್ಭದಲ್ಲಿ ಗುಣಮಟ್ಟ ಕಾಪಾಡಿಕೊಂಡು ಭಕ್ತರಿಗೆ ಪ್ರಸಾದ ವಿತರಣೆ ಮಾಡಬೇಕು. ಹಾಗೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಪೌರ ಕಾರ್ಮಿಕರಿಗೆ ನಿರ್ದೇಶನ: ಶ್ರೀ ಕ್ಷೇತ್ರದಲ್ಲಿ ನಡೆಯಲಿರುವ ಭೀಮನ ಅಮಾವಾಸ್ಯೆ ಪ್ರಯುಕ್ತ ಲಕ್ಷಾಂತರ ಭಕ್ತಾದಿಗಳು ಆಗಮಿಸುತ್ತಾರೆ. ಈಗಾಗಲೇ ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಿರುವುದರಿಂದ ದೇವಾಲಯದ ಸುತ್ತಮುತ್ತಲು ಹೆಚ್ಚಿನ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಎಲ್ಲಿಯೂ ನೀರು ನಿಲ್ಲದ ಹಾಗೆ ಗಮನಹರಿಸಿ ಭಕ್ತರಿಗೆ ಅನುಕೂಲ ಕಲ್ಪಿಸಬೇಕು ಎಂದರು.ಭೀಮನ ಅಮಾವಾಸ್ಯೆ ಹಾಗೂ ಶ್ರಾವಣ ಮಾಸದ 108 ಕುಂಭಾಭಿಷೇಕ ಮಹೋತ್ಸವವು ಐದು ದಿನ ನಿರಂತರವಾಗಿ ನಡೆಯುವ ಹಿನ್ನೆಲೆ ಶ್ರೀ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತಾದಿಗಳು ಆಗಮಿಸುವ ನಿರೀಕ್ಷೆ ಇದೆ. ಈ ನಿಟ್ಟಿನಲ್ಲಿ ಭಕ್ತರಿಗೆ ಅನುಕೂಲ ಕಲ್ಪಿಸಲು ಸಭೆ ನಡೆಸಲಾಗಿದ್ದು ಬರುವ ಭಕ್ತಾದಿಗಳಿಗೆ ಯಾವುದೇ ಲೋಪದೋಷಗಳು ಇಲ್ಲದಂತೆ ಮೂಲಭೂತ ಸೌಲಭ್ಯ ಕಲ್ಪಿಸಲಾಗುವುದು. ಎ.ಇ.ರಘು, ಪ್ರಾಧಿಕಾರದ ಕಾರ್ಯದರ್ಶಿ