(ಮಿಡಲ್‌) ಹುಡಾ ಶಾಲೆಗೆ ಅಗತ್ಯ ಶಿಕ್ಷಕರ ನೇಮಕಕ್ಕೆ ಒತ್ತಾಯ

| Published : Oct 22 2024, 12:20 AM IST

ಸಾರಾಂಶ

ಸಿಂಧನೂರು ತಾಲೂಕಿನ ಹುಡಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಗತ್ಯ ಶಿಕ್ಷಕರ ಕೊರತೆ ಬಗ್ಗೆ ಮುಖಂಡರು ಮುಖ್ಯಶಿಕ್ಷಕರೊಂದಿಗೆ ಚರ್ಚಿಸಿದರು.

ಕನ್ನಡಪ್ರಭ ವಾರ್ತೆ ಸಿಂಧನೂರು

ತಾಲೂಕಿನ ಹುಡಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅಗತ್ಯ ಶಿಕ್ಷಕರ ನೇಮಕ ಮಾಡುವಂತೆ ಬಿಜೆಪಿ ಮುಖಂಡ ಕೆ.ಕರಿಯಪ್ಪ ಒತ್ತಾಯಿಸಿದರು.

ಸೋಮವಾರ ಬಿಜೆಪಿ ಸದಸ್ಯತ್ವ ಅಭಿಯಾನದ ಅಂಗವಾಗಿ ಹುಡಾ ಗ್ರಾಮಕ್ಕೆ ತೆರಳಿದ್ದ ಸಂದರ್ಭದಲ್ಲಿ ಸರ್ಕಾರಿ ಶಾಲೆಗೆ ಭೇಟಿ ನೀಡಿ ಮೂಲಸೌಕರ್ಯ ಪರಿಶೀಲಿಸಿ ಚರ್ಚಿಸಿದಾಗ, ಶಾಲೆಯಲ್ಲಿ 9 ಜನ ಶಿಕ್ಷಕರು ಇರಬೇಕು. ಆದರೆ ಕೇವಲ ಇಬ್ಬರು ಶಿಕ್ಷಕರು ಮಾತ್ರ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದರಿಂದ ಮಕ್ಕಳಿಗೆ ಪಾಠಗಳ ಬೋಧನೆ ಹಾಗೂ ಗುಣಮಟ್ಟದ ಶಿಕ್ಷಣ ಸಿಗದೆ ತೊಂದರೆಯಾಗುತ್ತಿದೆ. ಈ ಕೂಡಲೇ ಕ್ಷೇತ್ರ ಶಿಕ್ಷಣಾಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ವಿಷಯವಾರು ಅಗತ್ಯ ಶಿಕ್ಷಕರನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.ಒಂದು ವೇಳೆ ನಿರ್ಲಕ್ಷ್ಯ ವಹಿಸಿದರೆ ತಮ್ಮ ಕಚೇರಿಯ ಮುಂದೆ ಧರಣಿ ನಡೆಸಲಾಗುವುದು ಎಂದು ಬಿಜೆಪಿ ಮುಖಂಡ ಕೆ.ಕರಿಯಪ್ಪ ಎಚ್ಚರಿಕೆ ನೀಡಿದರು.

ಈ ವೇಳೆ ಬಿಜೆಪಿ ಮುಖಂಡರಾದ ಪರಮೇಶ್ವರಪ್ಪ ಆದಿಮನಿ, ಲಿಂಗರಾಜ ಹೂಗಾರ, ನಾಗರಾಜ್ ದೇವರಗುಡಿ, ಬೀರಪ್ಪ ಅನ್ವರಿ, ರಾಜು ಅಡವಿಬಾವಿ, ತಿಮ್ಮಣ್ಣ ನಾಯಕ ಸೇರಿದಂತೆ ಶಾಲೆಯ ಮುಖ್ಯಶಿಕ್ಷಕ, ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು, ಗ್ರಾಮದ ಮುಖಂಡರು, ಯುವಕರು ಭಾಗವಹಿಸಿದ್ದರು.