ಪದವಿ ತರಗತಿಗಳ ಆರಂಭಕ್ಕೆ ಒತ್ತಾಯ

| Published : Dec 19 2023, 01:45 AM IST

ಸಾರಾಂಶ

ಅತಿಥಿ ಉಪನ್ಯಾಸಕರ ತರಗತಿ ಬಹಿಷ್ಕಾರದಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಕೂಡಲೇ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಬೇಕೆಂದು ಹೊಸಪೇಟೆಯಲ್ಲಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಅತಿಥಿ ಉಪನ್ಯಾಸಕರ ತರಗತಿ ಬಹಿಷ್ಕಾರದಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಕೂಡಲೇ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಬೇಕೆಂದು ಹೊಸಪೇಟೆಯಲ್ಲಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.ಹೊಸಪೇಟೆ: ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಹರಿಸಿ ಪದವಿ ವಿದ್ಯಾರ್ಥಿಗಳ ತರಗತಿಗಳನ್ನು ಸುಗಮವಾಗಿ ನಡೆಸಬೇಕು ಎಂದು ಒತ್ತಾಯಿಸಿ ನಗರದಲ್ಲಿ ಸೋಮವಾರ ಅಖಿಲ ಭಾರತ ವಿದ್ಯಾರ್ಥಿ ಪರಿಷತ್(ಎಬಿವಿಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ನಗರದ ಶಂಕರ ಆನಂದ ಸಿಂಗ್ ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳು ಮೆರವಣಿಗೆ ಮೂಲಕ ಕಾಲೇಜು ರಸ್ತೆಯ ಮೂಲಕ ತಹಸೀಲ್ದಾರರ ಕಚೇರಿಗೆ ಆಗಮಿಸಿ ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನೆ ಮಾಡಿ ಈ ಕೂಡಲೇ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಇದರಿಂದಾಗಿ ಪದವಿ ಕಾಲೇಜುಗಳಲ್ಲಿ ಸರಿಯಾಗಿ ತರಗತಿಗಳು ನಡೆಯದೆ ವಿದ್ಯಾರ್ಥಿಗಳ ಪಠ್ಯ ಚಟುವಟಿಕೆಗಳಲ್ಲಿ ಹಿನ್ನಡೆ ಆಗುತ್ತಿದೆ. ಕೆಲವೊಂದು ವಿಶ್ವ ವಿದ್ಯಾಲಯಗಳು ಸೆಮಿಸ್ಟರ್ ಪರೀಕ್ಷೆಯನ್ನು ನಡೆಸುವ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿವೆ. ಆದರೆ ತರಗತಿಗಳು ಸರಿಯಾಗಿ ನಡೆಯದೆ ವಿದ್ಯಾರ್ಥಿಗಳು ಹೇಗೆ ಪರೀಕ್ಷೆ ಬರೆಯಬೇಕು ಎಂಬ ಪ್ರಶ್ನೆ ವಿದ್ಯಾರ್ಥಿ ಸಮುದಾಯದ ಮಧ್ಯೆ ಮೂಡುತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಿ ಗೌರವಯುತ ಜೀವನವನ್ನು ಸಾಧ್ಯವಾಗಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಜಿಲ್ಲಾ ಸಂಚಾಲಕ ಭರತ್, ಮುಖಂಡರಾದ ಪ್ರದೀಪ್, ಧನುಷ್, ಅನುಶ್ರೀ, ವಿಜಯಕುಮಾರ್, ವಿನಿತ್ ಕುಮಾರ್, ಹೇಮಂತ್, ಕಾಶಿನಾಥನ್, ಸುಮಾ, ಗಂಗಮ್ಮ, ಶ್ರೀನಿವಾಸ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ತಹಸೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.