ಕುಶಾಲನಗರ ಪಟ್ಟಣದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ

| Published : Aug 18 2024, 01:57 AM IST

ಸಾರಾಂಶ

ಕುಶಾಲನಗರ ಪಟ್ಟಣದಲ್ಲಿರುವ ಖಾಸಗಿ ಆಸ್ಪತ್ರೆಗಳು ಬಂದ್‌ ಮಾಡಿ ಪ್ರತಿಭಟನೆ ನಡೆಸಿದರು. ನೂರಕ್ಕೂ ಅಧಿಕ ಮಂದಿ ಸೇರಿ ಮುಖ್ಯ ರಸ್ತೆಯಲ್ಲಿ ಮಾನವ ಸರಪಳಿ ರಚಿಸಿದರು.

ಕನ್ನಡಪ್ರಭ ವಾರ್ತೆ ಕುಶಾಲನಗರ

ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿ ಬರ್ಬರವಾಗಿ ಹತ್ಯೆ ಪ್ರಕರಣವನ್ನು ಖಂಡಿಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು, ವೈದ್ಯರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿ ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ಸರ್ಕಾರಿ ಆಸ್ಪತ್ರೆ ಸೇರಿದಂತೆ ಖಾಸಗಿ ಆಸ್ಪತ್ರೆಗಳು ವೈದ್ಯಕೀಯ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದೆ.

ಕುಶಾಲನಗರ ಪಟ್ಟಣದಲ್ಲಿರುವ ಖಾಸಗಿ ಆಸ್ಪತ್ರೆಗಳು ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಒಳರೋಗಿಗಳನ್ನು ಹೊರತುಪಡಿಸಿ ಉಳಿದ ಎಲ್ಲ ಸೇವೆಗಳು ಸ್ಥಗಿತಗೊಂಡಿದ್ದವು. ತುರ್ತು ಸೇವೆಗಳಲ್ಲಿ ಮಾತ್ರ ವೈದ್ಯರು, ಸಿಬ್ಬಂದಿ ತಮ್ಮನ್ನು ತೊಡಗಿಸಿಕೊಂಡರು.

ಕುಶಾಲನಗರ ಪಟ್ಟಣದಲ್ಲಿ ಇನ್ನರ್ ವೀಲ್ ಸಂಸ್ಥೆಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಪ್ರತಿಭಟನೆ ನಡೆಯಿತು.

ನೂರಕ್ಕೂ ಅಧಿಕ ಮಂದಿ ಸೇರಿ ಮುಖ್ಯ ರಸ್ತೆಯಲ್ಲಿ ಮಾನವ ಸರಪಳಿ ರಚಿಸಿ ಅತ್ಯಾಚಾರಿಗಳಿಗೆ ಉಗ್ರ ಶಿಕ್ಷೆ ವಿಧಿಸುವಂತೆ ಘೋಷಣೆ ಕೂಗಿದರು.

ಇನ್ನರ್ ವೀಲ್ ಸಂಸ್ಥೆ ಅಧ್ಯಕ್ಷೆ ಚಿತ್ರ ರಮೇಶ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕುಶಾಲನಗರ ವಿವಿಧ ಮಹಿಳಾ ಸಂಘಟನೆಗಳು ಐಎಂಎ ಸದಸ್ಯರು, ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಘಟಕ ಸೇರಿದಂತೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.