ಜಲ್‌ಜೀವನ್ ಮಿಷನ್ ಕಾಮಗಾರಿಗಳ ಪರಿವೀಕ್ಷಣೆಗೆ ತನಿಖಾ ತಂಡ ರಚಿಸಿ : ಕೇಂದ್ರ ಸಚಿವ ವಿ. ಸೋಮಣ್ಣ

| Published : Aug 24 2024, 01:28 AM IST / Updated: Aug 24 2024, 12:22 PM IST

ಜಲ್‌ಜೀವನ್ ಮಿಷನ್ ಕಾಮಗಾರಿಗಳ ಪರಿವೀಕ್ಷಣೆಗೆ ತನಿಖಾ ತಂಡ ರಚಿಸಿ : ಕೇಂದ್ರ ಸಚಿವ ವಿ. ಸೋಮಣ್ಣ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಜಲ್‌ಜೀವನ್ ಮಿಷನ್ ಕಾಮಗಾರಿಗಳ ಮೌಲ್ಯ ಪರಿವೀಕ್ಷಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸ್ಥಳೀಯ ಶಾಸಕರು ಮತ್ತು ಜಿಪಂ ಸಿಇಒ ಒಳನ್ನೊಳಗೊಂಡ ತನಿಖಾ ತಂಡ ರಚಿಸುವಂತೆ   ಸಚಿವ ವಿ.ಸೋಮಣ್ಣ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.  

 ತುಮಕೂರು :  ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಜಲ್‌ಜೀವನ್ ಮಿಷನ್ ಕಾಮಗಾರಿಗಳ ಮೌಲ್ಯ ಪರಿವೀಕ್ಷಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸ್ಥಳೀಯ ಶಾಸಕರು ಮತ್ತು ಜಿಪಂ ಸಿಇಒ ಒಳನ್ನೊಳಗೊಂಡ ತನಿಖಾ ತಂಡ ರಚಿಸುವಂತೆ ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಪಂ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ದಿಶಾ ಸಮಿತಿ ಸಭೆಯಲ್ಲಿ ಮಾತನಾಡಿದವರು. ಪ್ರಧಾನಿ ನರೇಂದ್ರ ಮೋದಿ ಕನಸಿನ ಯೋಜನೆಯಾದ ಜಲ್ ಜೀವನ್ ಮಿಷನ್ ಯೋಜನೆ ಅನುಷ್ಠಾನಕ್ಕಾಗಿ ರಾಜ್ಯಕ್ಕೆ 7 ಸಾವಿರ ಕೋಟಿ ರು.. ವಿನಿಯೋಗ ಮಾಡಲಾಗಿದ್ದು, ಜಿಲ್ಲೆಗೆ 2229 ಕೋಟಿ ರು. ಅನುದಾನ ಬಿಡುಗಡೆ ಮಾಡಿದ್ದು, ಜಲ್ ಜೀವನ್ ಮಿಷನ್ ಯೋಜನೆಯಲ್ಲಿ ಗುಣಮಟ್ಟದ ಕಾಮಗಾರಿ ಮಾಡಬೇಕು ಎಂದು ಸೂಚನೆ ನೀಡಿದರು.ಜಿಲ್ಲೆಯಲ್ಲಿ 2019ರಿಂದ ಈವರೆಗೆ 3699 ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದ್ದು, 3 ಸಾವಿರ ಕಾಮಗಾರಿಗಳಿಗೆ ಕಾರ್ಯಾದೇಶ ನೀಡುವ ಮೂಲಕ 884 ಕಾಮಗಾರಿಗಳು ಪೂರ್ಣಗೊಂಡಿದ್ದು, 15 ಕಾಮಗಾರಿಗಳು ಪ್ರಗತಿಯಲ್ಲಿವೆ.

 ಶೀಘ್ರದಲ್ಲೇ 600 ಕಾಮಗಾರಿಗಳನ್ನು ಪ್ರಾರಂಭಿಸಲಾಗುತ್ತದೆ ಎಂದು ತಿಳಿಸಿದರು.ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಸಣ್ಣ ನೀರಾವರಿ ಇಲಾಖೆಯಿಂದ ಚಿಕ್ಕನಾಯಕನಹಳ್ಳಿ, ಹುಳಿಯಾರು, ಬುಕ್ಕಾಪಟ್ಟಣ, ತುರುವೇಕೆರೆ ಸೇರಿದಂತೆ ಅಗತ್ಯಾನುಸಾರ ಜಿಲ್ಲೆಯ ವಿವಿಧ ಭಾಗಗಳಲ್ಲಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಸಂಬಂಧಿಸಿದಂತೆ ಶಾಸಕರನ್ನೊಳಗೊಂಡಂತೆ ಕ್ರಿಯಾ ಯೋಜನೆ ತಯಾರಿಸಿ ಪ್ರಸ್ತಾವನೆ ಸಲ್ಲಿಸುವಂತೆ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಮಂಜುನಾಥ್ ಅವರಿಂದ ಮಾಹಿತಿ ಪಡೆದ ಸಚಿವರು, ನಕಲಿ ವೈದ್ಯರನ್ನು ಪತ್ತೆ ಹಚ್ಚಿ ದೂರು ದಾಖಲಿಸಬೇಕು. ರೋಗಿಗಳನ್ನು ಆಸ್ಪತ್ರೆಗಳಿಗೆ ಸಾಗಿಸುವಾಗ ಯಾವುದೇ ಕಾರಣಕ್ಕೂ ಒಂದು ಆಂಬ್ಯುಲೆನ್ಸ್‌ನಿಂದ ಮತ್ತೊಂದು ಆಂಬ್ಯುಲೆನ್ಸ್‌ಗೆ ವರ್ಗಾಯಿಸದೆ ನೇರವಾಗಿ ಆಸ್ಪತ್ರೆಗೆ ದಾಖಲಿಸಬೇಕು. ಗ್ರಾಮೀಣ ಭಾಗದಲ್ಲಿ ಆರೋಗ್ಯ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸರಿಯಾದ ವೇತನ ನೀಡುವಂತೆ ಸೂಚನೆ ನೀಡಿದರು.

ಕೃಷಿ ಇಲಾಖೆ ವತಿಯಿಂದ ರೈತರಿಗೆ ನೀಡುವ ಯಂತ್ರೋಪಕರಣಗಳ ಬದಲಿಗೆ ರೈತರೇ ಕೃಷಿ ಉಪಕರಣ ಖರೀದಿ ಮಾಡಲು ಅವರ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ಹಣ ಜಮೆ ಮಾಡುಬೇಕು. ಜಿಲ್ಲೆಯಲ್ಲಿರುವ ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಿ, ಶಾಲೆಗಳ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ, ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಹೆಚ್ಚುವಂತೆ ಮಾಡಬೇಕು ಎಂದು ತಿಳಿಸಿದರು. 

ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ. ಎನ್. ಮಂಜುನಾಥ್, ಶಾಸಕರಾದ ಟಿ.ಬಿ ಜಯಚಂದ್ರ, ಜಿ. ಬಿ. ಜ್ಯೋತಿಗಣೇಶ್, ಬಿ. ಸುರೇಶ್ ಗೌಡ, ಕೃಷ್ಣಪ್ಪ, ವಿಧಾನ ಪರಿಷತ್ ಶಾಸಕ ಚಿದಾನಂದ ಎಂ. ಗೌಡ, ಸರ್ಕಾರದ ಕಾರ್ಯದರ್ಶಿ ಮಂಜುಳ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶಿವಶಂಕರ್, ಚಿತ್ರದುರ್ಗ ಜಿಲ್ಲಾಧಿಕಾರಿ ವೆಂಕಟೇಶ್, ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಪೊಲೀಸ್ ವರಿಷ್ಟಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಜಿಲ್ಲಾ ಮಟ್ಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.