ಗ್ರಾಮೀಣ ಭಾಗದ ಯುವ ಶಕ್ತಿಯನ್ನು ಸಂಘಟಿಸಿ, ಅವರ ಪ್ರತಿಭೆ ಹಾಗೂ ಸಾಮರ್ಥ್ಯಕ್ಕೆ ಸೂಕ್ತ ವೇದಿಕೆ ಕಲ್ಪಿಸುವ ಉದ್ದೇಶದಿಂದ ಭಾರತ ಜೋಡೋ ಸಂಘಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರಚಿಸಲಾಗುತ್ತಿದೆ ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪೂರ ಹೇಳಿದರು.

ಕನ್ನಡಪ್ರಭ ವಾರ್ತೆ ಕೆಂಭಾವಿ

ಗ್ರಾಮೀಣ ಭಾಗದ ಯುವ ಶಕ್ತಿಯನ್ನು ಸಂಘಟಿಸಿ, ಅವರ ಪ್ರತಿಭೆ ಹಾಗೂ ಸಾಮರ್ಥ್ಯಕ್ಕೆ ಸೂಕ್ತ ವೇದಿಕೆ ಕಲ್ಪಿಸುವ ಉದ್ದೇಶದಿಂದ ಭಾರತ ಜೋಡೋ ಸಂಘಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರಚಿಸಲಾಗುತ್ತಿದೆ ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪೂರ ಹೇಳಿದರು.

ವಲಯದ ಮಾಲಗತ್ತಿ, ಹೆಗಣ್ಣದೊಡ್ಡಿ, ಗೋಡ್ರಿಹಾಳ, ಕಿರದಳ್ಳಿ ಹಾಗೂ ಕರಡಕಲ್ ಗ್ರಾಮಗಳಿಗೆ ಗುರುವಾರ ಭೇಟಿ ನೀಡಿ ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿ ಮಾತನಾಡಿದ ಅವರು, 16ರಿಂದ 35 ವರ್ಷದೊಳಗಿನ 100 ಯುವಕರು ಸದಸ್ಯರಾಗಿ ನೋಂದಣಿ ಮಾಡಿಕೊಂಡು ಸಂಘ ರಚಿಸಿದರೆ, ಪ್ರತಿ ಸಂಘಕ್ಕೆ ಪ್ರತಿ ವರ್ಷ ₹10 ಲಕ್ಷ ಅನುದಾನ ದೊರೆಯಲಿದೆ. ಯುವಕರು ಈ ಅವಕಾಶವ ಸದುಪಯೋಗಪಡಿಸಿಕೊಂಡು ಗ್ರಾಮಗಳ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ದರ್ಶನಾಪುರ ಕರೆ ನೀಡಿದರು.

ಪ್ರತಿಯೊಂದು ಸಂಘಕ್ಕೂ ಪ್ರತಿ ವರ್ಷ ನೀಡುವ ಅನುದಾನವನ್ನು ಕ್ರೀಡಾ ಸ್ಪರ್ಧೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಯುವಜನ ಚಟುವಟಿಕೆಗಳಿಗೆ ಬಳಸಿಕೊಳ್ಳಬಹುದಾಗಿದೆ ಎಂದು ಅವರು ಮಾಹಿತಿ ನೀಡಿದರು.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಆರು ಮಂದಿ ಸದಸ್ಯರ ತಂಡವನ್ನು ನೇಮಕ ಮಾಡಿಕೊಳ್ಳಲಾಗುವುದು. ಭಾರತ ಜೋಡೋ ಸಂಘಗಳ ರಚನೆ ಹಾಗೂ ಗ್ಯಾರಂಟಿ ಯೋಜನೆಗಳ ಸದಸ್ಯರ ನೇಮಕಾತಿಗೆ ಗ್ರಾಮಸ್ಥರು ಮತ್ತು ಯುವಕರು ಅಗತ್ಯ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಹೆಗಣ್ಣದೊಡ್ಡಿ ಗ್ರಾಮಸ್ಥರು ಸೇತುವೆಗಳ ನಿರ್ಮಾಣಕ್ಕೆ ಮನವಿ ಸಲ್ಲಿಸಿದ್ದು, ಈ ಕುರಿತು ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಅವಳಿ ಗ್ರಾಮಗಳು ಸೇರಿದಂತೆ ಮತಕ್ಷೇತ್ರದ ಪ್ರತಿಯೊಂದು ಗ್ರಾಮದ ಅಭಿವೃದ್ಧಿಗೆ ತಾವು ಸದಾ ಬದ್ಧರಾಗಿದ್ದು, ಕ್ಷೇತ್ರವನ್ನು ಮಾದರಿ ಮತಕ್ಷೇತ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸಲಾಗುವುದು ಎಂದರು.

ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ, ಶಹಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಮಹಾಂತ ಚಂದಾಪುರ, ಕೆಂಭಾವಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸನಗೌಡ ಯಾಳಗಿ, ಗ್ಯಾರಂಟಿ ಸಮಿತಿ ಜಿಲ್ಲಾ ಉಪಾಧ್ಯಕ್ಷ ಗೌಡಪ್ಪಗೌಡ ಆಲ್ದಾಳ, ಮಹದೇವಪ್ಪ ಸಾಲಿಮನಿ, ಬಾಪುಗೌಡ ಪಾಟೀಲ ಸೇರಿದಂತೆ ಹಲವರಿದ್ದರು.