ಕನ್ನಡಪ್ರಭ ವಾರ್ತೆ ಬೆಂಗಳೂರು
ಹೃದಯಾಘಾತದಿಂದ ಭಾನುವಾರ ರಾತ್ರಿ ನಿಧನ ಹೊಂದಿದ ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸೂರಜ್ ಹೆಗ್ಡೆ (55) ಅವರ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು.ಸೂರಜ್ ಹೆಗ್ಡೆ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಹೆಬ್ಬಾಳ ರುದ್ರಭೂಮಿಯಲ್ಲಿ ನಡೆಯಲಿದೆ. ಈ ವೇಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.
ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ಮೊಮ್ಮಗನೂ ಆದ ಸೂರಜ್ ಅವರು ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾದರು.ಈ ಹಿನ್ನೆಲೆಯಲ್ಲಿ ಸೋಮವಾರ ಎಂ.ಎಸ್.ರಾಮಯ್ಯ ಆಸ್ಪತ್ರೆ ಬಳಿ ಇರುವ ಅವರ ನಿವಾಸಕ್ಕೆ ತೆರಳಿದ್ದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಅಂತಿಮ ನಮನ ಸಲ್ಲಿಸಿದರು. ಸಚಿವರಾದ ಈಶ್ವರ್ ಖಂಡ್ರೆ, ಪ್ರಿಯಾಂಕ್ ಖರ್ಗೆ, ಯತೀಂದ್ರ ಸಿದ್ದರಾಮಯ್ಯ, ಮಾಜಿ ಸಚಿವ ಆರ್.ವಿ.ದೇಶಪಾಂಡೆ ಸೇರಿ ಹಲವು ಸಚಿವರು, ಶಾಸಕರೂ ಅಂತಿಮ ದರ್ಶನ ಪಡೆದರು.