ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕಿನ ಚಿನಕುರಳಿ ಗ್ರಾಮದ ಎಸ್ ಟಿಜಿ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಮಾನ್ಸೂನ್ ಮ್ಯಾರಥಾನ್ ಓಟಕ್ಕೆ ಸಂಸ್ಥೆ ಅಧ್ಯಕ್ಷ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಚಾಲನೆ ನೀಡಿದರು.ಬಳಿಕ ಮಾತನಾಡಿದ ಮಾಜಿ ಸಚಿವರು, ಸಂಸ್ಥೆಯಲ್ಲಿ ಪ್ರತಿ ವರ್ಷವೂ ನಮ್ಮ ಪೋಷಕರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಮಾನ್ಸೂನ್ ಮ್ಯಾರಥಾನ್ ಓಟದ ಸ್ಪರ್ಧೆ ಆಯೋಜನೆ ಮಾಡುತ್ತಿದ್ದೇವೆ. ಆ ಮೂಲಕ ನಮ್ಮ ಪೋಷಕರನ್ನು ಸ್ಮರಿಸುವ, ನೆನಪಿಸಿಕೊಳ್ಳುವ ಕಾರ್ಯವನ್ನು ಮಾಡಲಾಗುತ್ತಿದೆ. ಅದೇ ರೀತಿ ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ತಂದೆ- ತಾಯಿಯನ್ನು ನೆನೆಯುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಸ್ಪರ್ಧೆಯಲ್ಲಿ ಎಸ್ ಟಿಜಿ ಶಾಲೆಯ 5 ರಿಂದ 10ನೇ ತರಗತಿ ಸುಮಾರು 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಬಾಲಕ- ಬಾಲಕಿಯರಿಗೆ ಪ್ರತ್ಯೇಕ ಓಟದ ಸ್ಪರ್ಧೆ ನಡೆದು ಶಾಲೆಯಿಂದ ಹೊರಟ ಮ್ಯಾರಥಾನ್ ಚಿನಕುರಳಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮತ್ತೆ ಶಾಲೆಗೆ ಆಗಮಿಸಿತು.ಮ್ಯಾರಥಾನ್ ನ ದಾರಿಯುದ್ದಕ್ಕೂ ಅಲ್ಲಲ್ಲಿ ವಿದ್ಯಾರ್ಥಿಗಳಿಗೆ ತಂಪು ಪಾನೀಯಗಳನ್ನು ವಿತರಿಸಲಾಯಿತು. ಮಕ್ಕಳ ಭದ್ರತೆಯ ದೃಷ್ಟಿಯಿಂದ ಅಲ್ಲಲ್ಲಿ ಪೊಲೀಸರು, ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿತ್ತು. ನಂತರ ವಿಜೇತರಾದ ಬಾಲಕಿ ಹಾಗೂ ಬಾಲಕರಿಗೆ ಪ್ರತ್ಯೇಕವಾಗಿ ಬಹುಮಾನ ಹಾಗೂ ಪ್ರಶಸ್ತಿ ವಿತರಿಸಲಾಯಿತು.
ಮ್ಯಾರಥಾನ್ ನಲ್ಲಿ ಭಾಗವಹಿಸಿದ್ದ ಎಲ್ಲಾ ವಿದ್ಯಾರ್ಥಿಗಳಿಗೂ ಸಮಾಧಾನಕರ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆ ಪ್ರಾಂಶುಪಾಲರಾದ ಮಾಚಮ್ಮ, ಆಡಳಿತಾಧಿಕಾರಿ ನಿವೇದಿತಾ ನಾಗೇಶ್, ಉಪ ಪ್ರಾಂಶುಪಾಲ ಲಿಂಗರಾಜು ಸೇರಿದಂತೆ ಶಿಕ್ಷಕರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.