ಕನ್ನಡಪ್ರಭ ವಾರ್ತೆ ಬೆಂಗಳೂರು

ಹಿರಿಯ ಪತ್ರಕರ್ತ, ವಿಧಾನ ಪರಿಷತ್‌ನ ಮಾಜಿ ಸದಸ್ಯರೂ ಆಗಿದ್ದ ಪಿ.ರಾಮಯ್ಯ (93) ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಬುಧವಾರ ಹರಿಶ್ಚಂದ್ರಘಾಟ್‌ನಲ್ಲಿ ನೆರವೇರಿತು.

ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾಗಿದ್ದ ಪಿ.ರಾಮಯ್ಯ ಅವರ ಪಾರ್ಥೀವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ಬುಧವಾರ ಬೆಳಗ್ಗೆ 9ರಿಂದ ಮಧ್ಯಾಹ್ನ 2 ಗಂಟೆವರೆಗೆ ಸದಾಶಿವ ನಗರದ ಅವರ ಮನೆಯಲ್ಲಿ ಇಡಲಾಗಿತ್ತು. ಮಧ್ಯಾಹ್ನ 3.30ರ ಸುಮಾರಿಗೆ ಹರಿಶ್ಚಂದ್ರಘಾಟ್‌ನಲ್ಲಿ ಪೊಲೀಸ್‌ ಗೌರವದೊಂದಿಗೆ ಹಿಂದು ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ಅಂತಿಮ ದರ್ಶನ ಪಡೆದ ಸಿಎಂ:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬುಧವಾರ ಪಿ. ರಾಮಯ್ಯ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಕುಟುಂಬದವರಿಗೆ ಸಾಂತ್ವನ ಹೇಳಿದರು.‌ ಈ ಸಂದರ್ಭದಲ್ಲಿ ಶಾಸಕ ರಿಜ್ವಾನ್ ಅರ್ಷದ್, ಮಾಜಿ ಸಚಿವ, ಶಾಸಕ ಅಶ್ವತ್ಥ ನಾರಾಯಣ, ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಇದ್ದರು.


ಗೃಹ ಸಚಿವ ಡಾ। ಜಿ.ಪರಮೇಶ್ವರ್‌, ಶಾಸಕ ಜಿ.ಟಿ.ದೇವೇಗೌಡ ಸೇರಿ ಇತರರು ರಾಮಯ್ಯ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.ರಾಮಯ್ಯರ ಸಹೋದರಿ ಹೃದಯಾಘಾತದಿಂದ ನಿಧನ:

ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಪಿ.ರಾಮಯ್ಯ ಅವರ ಸಹೋದರಿ ಪಿ.ಸೀತಾಲಕ್ಷ್ಮಿ (80) ಬುಧವಾರ ಬೆಳಗ್ಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಹೃದಯಾಘಾತಕ್ಕೊಳಗಾಗಿ ನಿಧನ ಹೊಂದಿದ್ದಾರೆ.ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಿ.ರಾಮಯ್ಯ ಅವರು ಅಂಗಾಂಗ ವೈಫ್ಯಲ್ಯದಿಂದ ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರೆ, ಬುಧವಾರ ಬೆಳಗ್ಗೆ ಅವರ ಸಹೋದರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹರಿಶ್ಚಂದ್ರ ಘಾಟ್‌ನಲ್ಲಿ ಮೊದಲು ಪಿ.ರಾಮಯ್ಯ ಅವರ ಅಂತ್ಯಸಂಸ್ಕಾರ ನೆರವೇರಿಸಿದ ಕುಟುಂಬಸ್ಥರು, ಬಳಿಕ ಅವರ ಸಹೋದರಿ ಪಿ.ಸೀತಾಲಕ್ಷ್ಮಿ ಅವರ ಅಂತ್ಯಕ್ರಿಯೆ ನೆರವೇರಿಸಿದರು.