ಶಿಗ್ಗಾಂವಿ: ವಿಶೇಷ ಮಕ್ಕಳ ಶಿಕ್ಷಣವು ಅವರ ಬದುಕಿನ ದಿಕ್ಕನ್ನೇ ಬದಲಾಯಿಸುವ ಶಕ್ತಿಯನ್ನು ಹೊಂದಿದ್ದು, ಇಂತಹ ಮಕ್ಕಳಲ್ಲಿ ಆತ್ಮವಿಶ್ವಾಸ ಮತ್ತು ಸ್ವಾವಲಂಬನೆಯ ಮನೋಭಾವ ಬೆಳೆಸುವುದು ಅತ್ಯಂತ ಅಗತ್ಯ ಎಂದು ಮಾಜಿ ಸಂಸದ ಮಂಜುನಾಥ ಕುನ್ನೂರ ಹೇಳಿದರು.

ಶಿಗ್ಗಾಂವಿ ಪಟ್ಟಣದ ಶ್ರೀ ಗಾನಯೋಗಿ ಪಂ. ಪಂಚಾಕ್ಷರಿ ಗವಾಯಿಗಳವರ ಕಿವುಡ, ಮೂಕ ಮಕ್ಕಳ ವಸತಿಯುತ ಶಾಲೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಕಿವುಡ–ಮೂಕ ಮಕ್ಕಳ ಹಾಗೂ ಪಾಲಕರ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಾಲಕರು ಮಕ್ಕಳ ಸಾಮರ್ಥ್ಯ ಗುರುತಿಸಿ, ಪ್ರೋತ್ಸಾಹ ನೀಡಿದಾಗ ಮಾತ್ರ ಅವರು ಸಮಾಜದಲ್ಲಿ ವಿಶಿಷ್ಟ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮ ಉದ್ಘಾಟಿಸಿದ ಸಂಸ್ಥೆಯ ಕಾರ್ಯದರ್ಶಿ ರಾಜು ಎಂ. ಕುನ್ನೂರ ಅವರು, ಕಿವುಡ–ಮೂಕ ಮಕ್ಕಳ ಸಮಗ್ರ ಬೆಳವಣಿಗೆಗಾಗಿ ಸಂಸ್ಥೆ ನಿರಂತರ ಸೇವಾ ಕಾರ್ಯಗಳನ್ನು ಕೈಗೊಳ್ಳುತ್ತಿದ್ದು, ಶಿಕ್ಷಣದ ಜತೆಗೆ ಸಾಂಸ್ಕೃತಿಕ, ವೃತ್ತಿಪರ ಹಾಗೂ ವ್ಯಕ್ತಿತ್ವ ವಿಕಸನ ಚಟುವಟಿಕೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.

ಸಂಸ್ಥೆಯ ಅಧ್ಯಕ್ಷೆ ಸ್ನೇಹಲತಾ ಕುನ್ನೂರ ಅವರು, ವಿಶೇಷ ಮಕ್ಕಳಿಗೆ ಪ್ರೀತಿ, ಸಹಾನುಭೂತಿ ಮತ್ತು ಸಮರ್ಪಕ ಶಿಕ್ಷಣ ದೊರೆತಾಗ ಅವರ ಭವಿಷ್ಯ ಉಜ್ವಲವಾಗುತ್ತದೆ ಎಂದರು.

ಪ್ರಾಚಾರ್ಯ ಡಾ. ನಾಗರಾಜ ಜಿ. ದ್ಯಾಮನಕೊಪ್ಪ ಮಾತನಾಡಿ, ಕಿವುಡ–ಮೂಕ ಮಕ್ಕಳಿಗೆ ಸಮಾಜದಲ್ಲಿ ಸಮಾನ ಅವಕಾಶಗಳು ದೊರಕಬೇಕಾದರೆ ಪಾಲಕರು, ಶಿಕ್ಷಕರು ಹಾಗೂ ಸಮಾಜ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.


ಕನ್ನಡ ಸಾಹಿತ್ಯ ಪರಿಷತ್‌ ತಾಲೂಕು ಅಧ್ಯಕ್ಷ ನಾಗಪ್ಪ ಬೆಂತೂರ, “ಕಿವುಡ–ಮೂಕ ಮಕ್ಕಳ ವ್ಯಕ್ತಿತ್ವ ವಿಕಸನ” ವಿಷಯವಾಗಿ ಉಪನ್ಯಾಸ ನೀಡಿ, ಮಕ್ಕಳಲ್ಲಿ ಆತ್ಮಸ್ಥೈರ್ಯ, ಶಿಸ್ತು ಹಾಗೂ ಸೃಜನಶೀಲತೆ ಬೆಳೆಸುವಲ್ಲಿ ಪಾಲಕರು ಮತ್ತು ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.

ಸಿದ್ದಪ್ಪ ಮಸಳಿ, ಮಂಜುಳಾ ಗೋಡಿ, ರೇಣುಕಾ ಮಾಗಿ, ಅರ್ಪಿತಾ ಅರೋರಾ, ವೈಷ್ಣವಿ ಕುನ್ನೂರ, ಮುಖ್ಯೋಪಾಧ್ಯಾಯ ಎಂ.ಬಿ. ನೀರಲಗಿ ಉಪಸ್ಥಿತರಿದ್ದರು. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಮಕ್ಕಳು ಹಾಗೂ ಪಾಲಕರು ಭಾಗವಹಿಸಿ, ತಮ್ಮ ಅನುಭವಗಳನ್ನು ಹಂಚಿಕೊಂಡರು. ಶಿವಕುಮಾರ ಹಿರೇಮಠ ಸ್ವಾಗತಿಸಿದರು. ಶಿಕ್ಷಕಿ ಶ್ವೇತಾ ಅತ್ತಿಗೇರಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಜ್ಯೋತಿ ನೀರಲಗಿ ವಂದಿಸಿದರು.