ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಸಮಗ್ರ ಟರ್ಮಿನಲ್ ವಿಸ್ತರಣಾ ಕಾಮಗಾರಿಗೆ ಬುಧವಾರ ಶಿಲಾನ್ಯಾಸ ನೆರವೇರಿಸಲಾಯಿತು.
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಸಮಗ್ರ ಟರ್ಮಿನಲ್ ವಿಸ್ತರಣಾ ಕಾಮಗಾರಿಗೆ ಬುಧವಾರ ಶಿಲಾನ್ಯಾಸ ನೆರವೇರಿಸಲಾಯಿತು.
ಪ್ರಸಕ್ತ ವಾರ್ಷಿಕ 25 ಲಕ್ಷ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯವನ್ನು 52 ಲಕ್ಷಕ್ಕೆ ಹೆಚ್ಚಿಸುವ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು, 2029ರ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.ವಿಮಾನ ನಿಲ್ದಾಣದ ಈಗಿನ 48,574 ಚದರ ಮೀಟರ್ ವಿಸ್ತೀರ್ಣದ ಟರ್ಮಿನಲ್ ಅನ್ನು ವಾರ್ಷಿಕ 20 ಲಕ್ಷ ಪ್ರಯಾಣಿಕರನ್ನು ನಿರ್ವಹಿಸುವ ಉದ್ದೇಶದಿಂದ ವಿನ್ಯಾಸಗೊಳಿಸಲಾಗಿತ್ತು. ಆದರೆ 2025-26ನೇ ಆರ್ಥಿಕ ವರ್ಷದಲ್ಲಿ 25.5 ಲಕ್ಷ ಪ್ರಯಾಣಿಕರು ವಿಮಾನ ನಿಲ್ದಾಣವನ್ನು ಬಳಸಿದ್ದು, ನಿಗದಿತ ಸಾಮರ್ಥ್ಯವನ್ನು ಮೀರಿ ಪ್ರಯಾಣಿಕರ ಸಂಚಾರ ದಾಖಲಾಗಿದೆ.ಕಳೆದ ಮೂರು ವರ್ಷಗಳಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.42ರಷ್ಟು ಏರಿಕೆಯಾಗಿದೆ. ವಾರ್ಷಿಕ ಪ್ರಯಾಣಿಕರ ಸಂಚಾರದಲ್ಲಿ ಸರಾಸರಿ ಶೇ.9ರಷ್ಟು ಬೆಳವಣಿಗೆಯಾಗುವ ನಿರೀಕ್ಷೆಯಿದ್ದು, 2030-31ರ ವೇಳೆಗೆ 40 ಲಕ್ಷದ ಗಡಿ ದಾಟುವ ಅಂದಾಜಿಸಲಾಗಿದೆ.ಈ ಹಿನ್ನೆಲೆಯಲ್ಲಿ ಈಗಿನ ಟರ್ಮಿನಲ್ನ ಪೂರ್ವ ಭಾಗದಲ್ಲಿ ಹೆಚ್ಚುವರಿಯಾಗಿ 27,100 ಚದರ ಮೀಟರ್ ವಿಸ್ತೀರ್ಣದ ಕಟ್ಟಡ ನಿರ್ಮಿಸಲಾಗುವುದು. ಚೆಕ್ಇನ್, ಭದ್ರತಾ ತಪಾಸಣೆ, ವಲಸೆ ವಿಭಾಗ, ಲಗೇಜ್ ನಿರ್ವಹಣೆ, ಆಗಮನ ಮತ್ತು ನಿರ್ಗಮನ ವಿಭಾಗಗಳಲ್ಲಿ ಹೆಚ್ಚುವರಿ ಸೌಲಭ್ಯಗಳನ್ನು ಕಲ್ಪಿಸಲಾಗುವುದು.ವಿಸ್ತರಣಾ ಯೋಜನೆಯಡಿ ಪ್ರಯಾಣಿಕರಿಗೆ ಆಧುನಿಕ ತಂತ್ರಜ್ಞಾನ ಆಧಾರಿತ ಸೇವೆಗಳು, ಸುಧಾರಿತ ಮೂಲಸೌಕರ್ಯ ಮತ್ತು ಹೆಚ್ಚಿನ ಅನುಕೂಲಗಳನ್ನು ಕಲ್ಪಿಸಲಾಗುತ್ತದೆ. ಇದರಿಂದ ವಿಮಾನ ನಿಲ್ದಾಣವು ಕೇವಲ ಪ್ರಯಾಣಿಕರ ಸಂಚಾರ ಕೇಂದ್ರವಾಗಿರದೆ ಸ್ಥಳೀಯರಿಗೂ ಮನರಂಜನೆ ಮತ್ತು ಸಾರ್ವಜನಿಕ ಚಟುವಟಿಕೆಗಳ ತಾಣವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.