ಮಕ್ಕಳಲ್ಲಿನ ಪ್ರತಿಭೆ ಹೊರತರಲು ಕಾರಂಜಿ ಉತ್ತಮ ವೇದಿಕೆ: ಬಿಇಒ ಕೃಷ್ಣಪ್ಪ ಅಭಿಪ್ರಾಯ

| Published : Nov 08 2024, 12:36 AM IST

ಮಕ್ಕಳಲ್ಲಿನ ಪ್ರತಿಭೆ ಹೊರತರಲು ಕಾರಂಜಿ ಉತ್ತಮ ವೇದಿಕೆ: ಬಿಇಒ ಕೃಷ್ಣಪ್ಪ ಅಭಿಪ್ರಾಯ
Share this Article
  • FB
  • TW
  • Linkdin
  • Email

ಸಾರಾಂಶ

ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಒಂದು ಉತ್ತಮ ವೇದಿಕೆಯಾಗಿದೆ. ಇಂತಹ ಕಾರ್ಯಕ್ರಮಗಳಿಂದ ಮಕ್ಕಳ ಮನಸ್ಸು ಉಲ್ಲಾಸಭರಿತವಾಗಿ ಕಲಿಕೆಯಲ್ಲಿ ಮುಂದುವರೆಯಲು ಸಾಧ್ಯ.

ಕನ್ನಡಪ್ರಭ ವಾರ್ತೆ ಗುಡಿಬಂಡೆ

ವಿದ್ಯಾರ್ಥಿಗಳು ಓದಿನ ಜತೆಗೆ ಕ್ರೀಡೆ, ಕಲೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಾಗ ಮಾತ್ರ ಪ್ರತಿಭಾವಂತರಾಗಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಅಭಿಪ್ರಾಯಪಟ್ಟರು.

ಪಟ್ಟಣದ ಸರ್ಕಾರಿ ಬಾಲಕರ ಪ್ರೌಢಶಾಲೆಯ ಆವರಣದಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತೆಗೆಯುವಲ್ಲಿ ಸರ್ಕಾರ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಪೋಷಕರು ಹಾಗೂ ಶಿಕ್ಷಕರು ಇಂತಹ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳನ್ನು ಭಾಗವಹಿಸುವಂತೆ ಪ್ರೋತ್ಸಾಹಿಸಬೇಕು. ಅವರ ಅಭಿರುಚಿಗೆ ತಕ್ಕಂತೆ ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶ ಹಾಗೂ ಪ್ರೋತ್ಸಾಹ ನೀಡಬೇಕು ಜೊತೆಗೆ ಈ ಕಾರ್ಯಕ್ರಮದಲ್ಲಿ ಭಾಗಿಯಾಗುವಂತಹ ಜಡ್ಜ್ ಗಳು ನ್ಯಾಯ ಸಮ್ಮತ ತೀರ್ಪು ನೀಡಬೇಕು. ವಿಜೇತ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಸಹ ನೀಡಲಿದ್ದು, ಇದು ನೇರವಾಗಿ ಮಕ್ಕಳ ಖಾತೆಗೆ ಜಮೆಯಾಗಲಿದೆ ಎಂದರು.

ಬಳಿಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಾಜಿ ಮಾತನಾಡಿ, ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಒಂದು ಉತ್ತಮ ವೇದಿಕೆಯಾಗಿದೆ. ಇಂತಹ ಕಾರ್ಯಕ್ರಮಗಳಿಂದ ಮಕ್ಕಳ ಮನಸ್ಸು ಉಲ್ಲಾಸಭರಿತವಾಗಿ ಕಲಿಕೆಯಲ್ಲಿ ಮುಂದುವರೆಯಲು ಸಾಧ್ಯ. ಈ ಕಾರ್ಯಕ್ರಮದಲ್ಲಿ ಆಯೋಜಿಸಿರುವ ವಿವಿಧ ಸ್ಪರ್ಧೆಗಳಲ್ಲಿ ಮಕ್ಕಳು ತಮ್ಮ ಪ್ರತಿಭೆಯನ್ನು ಪ್ರದರ್ಶನ ಮಾಡಲಿದ್ದಾರೆ. ಅವರ ಪ್ರತಿಭೆಯನ್ನು ಜಡ್ಜ್ ಗಳು ಗುರುತಿಸಿ ನ್ಯಾಯ ಸಮ್ಮತವಾದ ತೀರ್ಪು ನೀಡಬೇಕು ಎಂದರು.

ನಂತರ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಕೆ.ವಿ.ನಾರಾಯಣಸ್ವಾಮಿ, ಜಿಪಿಟಿ ಶಿಕ್ಷಕರ ಸಂಘದ ಅಧ್ಯಕ್ಷ ರಾಜಶೇಖರ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಲಕ್ಷ್ಮೀನರಸಿಂಹಗೌಡ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ವಿದ್ಯಾರ್ಥಿಗಳು ಕೋಲಾಟ, ಏಕಪಾತ್ರಾಭಿನಯ, ಪ್ರಬಂಧ ಸ್ಪರ್ಧೆ, ಜಾನಪದ ಗೀತೆಗಳು, ಕ್ಲೇ ಮಾಡಲಿಂಗ್, ವಿವಿಧ ವೇಷಭೂಷಣ ಸ್ಪರ್ಧೆ, ಆಶುಭಾಷಣ, ರಂಗೋಲಿ, ಪ್ರಬಂಧ, ನೃತ್ಯ ಸೇರಿದಂತೆ ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಟಿಪಿಒ ಮುರಳಿ, ಇಸಿಒ ರಘು, ಕಸಾಪ ಅಧ್ಯಕ್ಷ ಮಂಜುನಾಥ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಶ್ರೀರಾಮಪ್ಪ, ಸರ್ಕಾರಿ ನೌಕರರ ಸಂಘದ ಮುನಿಕೃಷ್ಣಪ್ಪ, ಬಿ.ಆರ್.ಪಿಗಳು, ಸಿ.ಆರ್.ಪಿಗಳು ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.