ಆರೋಗ್ಯದ ಬಗ್ಗೆ ಪ್ರತಿಯೊಬ್ಬರೂ ಜಾಗೃತಿ ಹೊಂದಬೇಕು. ಮಧುಮೇಹ ಸೇರಿದಂತೆ ವಿವಿಧ ಕಾಯಿಲೆಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯುವ ಮೂಲಕ ಆರೋಗ್ಯಕರ ಜೀವನ ನಡೆಸಬೇಕು ಎಂಬ ಉದ್ದೇಶದಿಂದ ಇಂತಹ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ ಎಂದು ಆಯೋಜಕರು ತಿಳಿಸಿದರು.

ತಿಪಟೂರು: ವಿಶ್ವ ಮಧುಮೇಹ ದಿನದ ಅಂಗವಾಗಿ ವಿಶೇಷವಾಗಿ ತಿಪಟೂರಿನ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ರೋಟರಿ ಕ್ಲಬ್ ತಿಪಟೂರು, ಆರ್ಥಿಕ ಸಾಕ್ಷರತಾ ಕೇಂದ್ರ ತಿಪಟೂರು, ಮಹಾವೀರ್ ಜೈನ್ ಆಸ್ಪತ್ರೆ ಬೆಂಗಳೂರು, ತಿಪಟೂರು ಸುನಂದ ಕಣ್ಣಿನ ಆಸ್ಪತ್ರೆ ಹಾಗೂ ತಿಪಟೂರು ಲಯನ್ಸ್ ಕ್ಲಬ್ ಸಹಯೋಗದಲ್ಲಿ ಶಿಬಿರ ಹಮ್ಮಿಕೊಳ್ಳಲಾಗಿತ್ತು.

ಶಿಬಿರದಲ್ಲಿ ೫೦ಕ್ಕೂ ಹೆಚ್ಚು ಸಾರ್ವಜನಿಕರಿಗೆ ಉಚಿತವಾಗಿ ವಿವಿಧ ಆರೋಗ್ಯ ತಪಾಸಣೆ ನಡೆಸಲಾಯಿತು. ರಕ್ತದೊತ್ತಡ (ಬಿ.ಪಿ.), ಮಧುಮೇಹ (ಶುಗರ್), ಪಾದಗಳ ಆರೋಗ್ಯ ತಪಾಸಣೆ, ಅಗತ್ಯವಿರುವವರಿಗೆ ಇಸಿಜಿ ಪರೀಕ್ಷೆ ಹಾಗೂ ಉಚಿತ ಕಣ್ಣಿನ ತಪಾಸಣೆ ಮಾಡಲಾಯಿತು.

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆಯೋಜಿಸಲಾಗಿದ್ದ ಈ ಶಿಬಿರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆರೋಗ್ಯ ತಪಾಸಣೆ ಸೌಲಭ್ಯವನ್ನು ಪಡೆದುಕೊಂಡರು.

ಆರೋಗ್ಯದ ಬಗ್ಗೆ ಪ್ರತಿಯೊಬ್ಬರೂ ಜಾಗೃತಿ ಹೊಂದಬೇಕು. ಮಧುಮೇಹ ಸೇರಿದಂತೆ ವಿವಿಧ ಕಾಯಿಲೆಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯುವ ಮೂಲಕ ಆರೋಗ್ಯಕರ ಜೀವನ ನಡೆಸಬೇಕು ಎಂಬ ಉದ್ದೇಶದಿಂದ ಇಂತಹ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ ಎಂದು ಆಯೋಜಕರು ತಿಳಿಸಿದರು.ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಕೆ, ಆರ್ಥಿಕ ಸಾಕ್ಷರತಾ ಕೇಂದ್ರದ ರೇಖಾ ಮತ್ತು ಕುಸುಮ, ಮಹಾವೀರ್ ಜೈನ್ ಆಸ್ಪತ್ರೆ ಬೆಂಗಳೂರಿನ ಸಿಬ್ಬಂದಿ, ಸುನಂದ ಕಣ್ಣಿನ ಆಸ್ಪತ್ರೆ ತಿಪಟೂರಿನ ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈಜೋಡಿಸೋಣ ಎಂಬ ಆಶಯದೊಂದಿಗೆ ಶಿಬಿರ ಯಶಸ್ವಿಯಾಗಿ ನಡೆಯಿತು.