ಸಾರಾಂಶ
ಕಾರ್ಕಳ ತಾಲೂಕು ಆಡಳಿತದ ವತಿಯಿಂದ ಕಾರ್ಕಳ ಮಂಜುನಾಥ ಪೈ ಸಭಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಯಿತು. ಶಾಸಕ ಸುನಿಲ್ ಕುಮಾರ್ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಕಾರ್ಕಳ
ದೀರ್ಘಕಾಲದ ಕ್ರಾಂತಿಕಾರಿ ಹೋರಾಟ ಮತ್ತು ಸಾವಿರಾರು ಸ್ವಾತಂತ್ರ್ಯಸೇನಾನಿಗಳ ಬಲಿದಾನದ ಫಲವಾಗಿ ಭಾರತಕ್ಕೆ ಸ್ವಾತಂತ್ರ್ಯ ದೊರಕಿದೆ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು.ಅವರು ತಾಲೂಕು ಆಡಳಿತದ ವತಿಯಿಂದ ಕಾರ್ಕಳ ಮಂಜುನಾಥ ಪೈ ಸಭಾಂಗಣದಲ್ಲಿ ಆಯೋಜಿಸಲಾದ ಸ್ವಾತಂತ್ರ್ಯೋತ್ಸವ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇಂದು ಭಾರತ ವಿಶ್ವದ ಶಕ್ತಿಶಾಲಿ ರಾಷ್ಟ್ರಗಳಲ್ಲಿ ಒಂದಾಗಿ ಬೆಳೆದಿದೆ. ಪಾಕಿಸ್ತಾನದ ವಿರುದ್ಧ ನಡೆದ ಆಪರೇಷನ್ ಸಿಂಧೂರ ಮೂಲಕ ನಮ್ಮ ಮಿಲಿಟರಿ ಶಕ್ತಿ ಜಗತ್ತಿಗೆ ತೋರಿಸಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಮುಂಚೂಣಿಯಲ್ಲಿದ್ದು, ಚಂದ್ರನತ್ತ ಹೆಜ್ಜೆ ಇಟ್ಟ ರಾಷ್ಟ್ರಗಳಲ್ಲಿ ಭಾರತವೂ ಒಂದು. ಜಾಗತಿಕ ಆರ್ಥಿಕತೆಯಲ್ಲಿ 5ನೇ ಸ್ಥಾನದಲ್ಲಿರುವ ಭಾರತ ಮುಂದಿನ ವರ್ಷಗಳಲ್ಲಿ 3ನೇ ಸ್ಥಾನಕ್ಕೇರುವುದು ಪ್ರಧಾನಿ ನರೇಂದ್ರ ಮೋದಿಯವರ ಆಶಯ ಎಂದರು.ಕಾರ್ಕಳ ತಹಸೀಲ್ದಾರ್ ಪ್ರದೀಪ್ ಕುಮಾರ್ ಮಾತನಾಡಿ, ನಾವು ಭಾರತೀಯರು ಸಮಾನತೆ ಮತ್ತು ಸಹಬಾಳ್ವೆಯ ಮನೋಭಾವದಿಂದ ಬದುಕಬೇಕು. ಸ್ವಾತಂತ್ರ್ಯ ದಿನಾಚರಣೆ ನಮ್ಮನ್ನು ಕೇವಲ ವೃತ್ತಿ ಮತ್ತು ಕುಟುಂಬದ ಸದಸ್ಯರಷ್ಟೇ ಅಲ್ಲ, ದೇಶದ ಜವಾಬ್ದಾರಿಯುತ ನಾಗರಿಕರೆಂದು ನೆನಪಿಸುತ್ತದೆ ಎಂದು ಹೇಳಿದರು.
ಈ ಸಂದರ್ಭ ಶಿಕ್ಷಣದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ, ಪುರಸಭೆ ಅಧ್ಯಕ್ಷ ಯೋಗೀಶ್ ದೇವಾಡಿಗ, ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ, ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜಮ್ಮ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ರಾವ್ ಹಾಗೂ ಇತರರು ಉಪಸ್ಥಿತರಿದ್ದರು. ದೇವದಾಸ್ ಕೆರೆಮನೆ ಕಾರ್ಯಕ್ರಮ ನಿರೂಪಿಸಿದರು.