ಕೂಡ್ಲಿಗಿ: ಸ್ವಾತಂತ್ರ್ಯ ಇಂದು ಸ್ವೇಚ್ಛಾಕಾರವಾಗುತ್ತಿದ್ದು, ದೇಶದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಕಲಿಸುವ ಅಗತ್ಯವಿದ್ದು, ಉತ್ತಮ ಶಿಕ್ಷಣ ನೀಡುವುದರ ಮೂಲಕ ಸಮಾಜದ ಏಳ್ಗಿಗೆಗೆ ಶ್ರಮಿಸಬೇಕಾಗಿದೆ ಎಂದು ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಹೇಳಿದರು.

ಪಟ್ಟಣದ ಮಹಾದೇವ ಮೈಲಾರ ಕ್ರೀಡಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಆರೋಗ್ಯ, ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡುತ್ತ ಮೂಲಭೂತ ಸೌಲಭ್ಯಗಳಿಗೆ ಸಂಬಂಧಿಸಿದಂತೆ ಈಗಾಗಲೇ ನಾನಾ ಜನಪರ ಕೆಲಸಗಳನ್ನು ಮಾಡಲಾಗಿದ್ದು, ಮುಂಬರುವ ದಿನಗಳಲ್ಲಿ ಮಾದರಿ ಕ್ಷೇತ್ರವನ್ನಾಗಿಸಲು ನಾನಾ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಕೇವಲ 3 ವರ್ಷದಲ್ಲಿ ಕೂಡ್ಲಿಗಿಯ ಭಾಗದಲ್ಲಿ ರೈತಾಪಿ ವರ್ಗಾದವರಿಗೆ ಅನೂಕೂಲವಾಗಲಿ ಎನ್ನುವ ದೃಷ್ಟಿಯನ್ನಿಟ್ಟುಕೊಂಡು 80 ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡುತ್ತಿದ್ದೇನೆ. ತಾಲೂಕಿನಾದ್ಯಂತ ಶಿಕ್ಷಣಕ್ಕೆ ಒತ್ತು ನೀಡಿ ಹಲವು ಶಾಲೆಗಳನ್ನು ಮಂಜೂರು ಮಾಡಲಾಗಿದೆ. ಚೆಕ್ ಡ್ಯಾಂಗಳ ನಿರ್ಮಾಣ, ತಾಲೂಕಿನಾಧ್ಯಂತ ರಸ್ತೆಗಳ ಅಭಿವೃದ್ಧಿ, ವಸತಿ ಶಾಲೆಗಳ ನಿರ್ಮಾಣ ಸೇರಿದಂತೆ ಹಲವು ಯೋಜನೆಗಳನ್ನು ರೂಪಿಸಿದ್ದು, ಬಹುತೇಕ ಯೋಜನೆಗಳು ಅನುಷ್ಠಾನಗೊಂಡಿವೆ ಎಂದರು.

ತಹಸೀಲ್ದಾರ್ ನೇತ್ರಾವತಿ ಧ್ವಜಾರೋಹಣ ನೆರವೇರಿಸಿದರು. ದ್ವಜ ವಂದನೆ ಸಂದರ್ಭದಲ್ಲಿ ಪೊಲೀಸ್, ಗೃಹರಕ್ಷಕದಳ ತಂಡಗಳಿಂದ ಪಥ ಸಂಚಲನ ಹಾಗೂ ಕವಾಯತು ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ನಾನಾ ರಂಗಗಳಲ್ಲಿ ಸೇವೆ ಸಲ್ಲಿಸಿದವರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ನರಸಪ್ಪ, ಡಿವೈಎಸ್‌ಪಿ ಮಲ್ಲೇಶ್ ದೊಡ್ಡಮನಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶ್ರೀಕಂಠಾಪುರ ವೆಂಕಟೇಶ್, ಕೂಡ್ಲಿಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ಗುರುಸಿದ್ದನಗೌಡ, ಬಿಇಒ ಮೇಲೇಶ್ ಬೇವೂರ್, ಜಿಪಂ ಮಾಜಿ ಸದಸ್ಯ ಕೆ.ಎಂ. ಶಶಿಧರ, ಬ್ಯಾಳಿ ವಿಜಯಕುಮಾರಗೌಡ, ಪಪಂ ಮಾಜಿ ಅಧ್ಯಕ್ಷ ಕಾವಲ್ಲಿ ಶಿವಪ್ಪ ನಾಯಕ, ಟಿ.ಜಿ. ಮಲ್ಲಿಕಾರ್ಜುನಗೌಡ, ಜನಪ್ರತಿನಿಧಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.