ಮಹಿಳೆಯರು ಸಾಮಾಜಿಕವಾಗಿ ಆರ್ಥಿಕವಾಗಿ ಶೈಕ್ಷಣಿಕವಾಗಿ ಔದ್ಯೋಗಿಕವಾಗಿ ಅಭಿವೃದ್ಧಿ ಹೊಂದಿದಾಗ ಮಾತ್ರ ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ನ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ತಿಳಿಸಿದರು. ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಬೆನ್ನೆಲುಬಾಗಿ ನಿಂತಿದೆ. ಕಳೆದ ೪೦ ವರ್ಷಗಳಿಂದ ಕರ್ನಾಟಕದ ಹಳ್ಳಿ ಹಳ್ಳಿಗಳಲ್ಲಿ ಗ್ರಾಮ ಅಭಿವೃದ್ಧಿ ಯೋಜನೆ ವಿಸ್ತರಣೆಯಾಗಿ ೬.೫ ಲಕ್ಷ ಸ್ವಸಹಾಯ ಸಂಘಗಳ ಮೂಲಕ ೬೦ ಲಕ್ಷಕ್ಕೂ ಹೆಚ್ಚಿನ ಮಹಿಳೆಯರು ಸ್ವಾವಲಂಬಿ ಬದುಕು ಕಂಡುಕೊಂಡು, ಕುಟುಂಬದ ಆರ್ಥಿಕತೆಗೆ ಹೆಗಲೊಡ್ಡಿದ್ದಾರೆ.
ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ಮಹಿಳೆಯರು ಸಾಮಾಜಿಕವಾಗಿ ಆರ್ಥಿಕವಾಗಿ ಶೈಕ್ಷಣಿಕವಾಗಿ ಔದ್ಯೋಗಿಕವಾಗಿ ಅಭಿವೃದ್ಧಿ ಹೊಂದಿದಾಗ ಮಾತ್ರ ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ನ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ತಿಳಿಸಿದರು.ಪಟ್ಟಣದ ಗಣಪತಿ ಪೆಂಡಾಲನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಶ್ರವಣಬೆಳಗೊಳ ಇವರ ವತಿಯಿಂದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಚನ್ನರಾಯಪಟ್ಟಣ ಇವರ ಸಂಯುಕ್ತಾಶ್ರಯದಲ್ಲಿ ಬಾಲ್ಯವಿವಾಹ ತಡೆ ಹಾಗೂ ಪೋಕ್ಸೋ ಕಾಯ್ದೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಗ್ಗೆ ಜನರಿಗೆ ಅಪಾರ ಗೌರವವಿದೆ. ಗ್ರಾಮೀಣ ಭಾಗದ ಜನರಿಗೆ ಬೆಳಕಾದ ಈ ಸಂಸ್ಥೆಯ ಜನಪರ ಯೋಜನೆಗಳಿಂದಾಗಿ ಯೋಜನೆ ಸದಸ್ಯರು ಸ್ವಾವಲಂಬಿಗಳಾಗಿ ಬದುಕುವಂತಾಗಿದೆ. ಯೋಜನೆಯು ಸಾರ್ವಜನಿಕರ ಅಭಿವೃದ್ಧಿ ಜೊತೆಗೆ ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚಿನ ಒತ್ತು ನೀಡುತ್ತಿದೆ. ಸಮಾಜ ಮತ್ತು ಕುಟುಂಬ ಸುಧಾರಣೆಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಮಹಿಳೆಯರಲ್ಲಿ ಆತ್ಮವಿಶ್ವಾಸ ಮೂಡಿಸಿದಾಗ ಮಾತ್ರ ಸಮಗ್ರ ಅಭಿವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶ್ರಮ ಮಹತ್ತರವಾದ್ದು. ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಬೆನ್ನೆಲುಬಾಗಿ ನಿಂತಿದೆ. ಕಳೆದ ೪೦ ವರ್ಷಗಳಿಂದ ಕರ್ನಾಟಕದ ಹಳ್ಳಿ ಹಳ್ಳಿಗಳಲ್ಲಿ ಗ್ರಾಮ ಅಭಿವೃದ್ಧಿ ಯೋಜನೆ ವಿಸ್ತರಣೆಯಾಗಿ ೬.೫ ಲಕ್ಷ ಸ್ವಸಹಾಯ ಸಂಘಗಳ ಮೂಲಕ ೬೦ ಲಕ್ಷಕ್ಕೂ ಹೆಚ್ಚಿನ ಮಹಿಳೆಯರು ಸ್ವಾವಲಂಬಿ ಬದುಕು ಕಂಡುಕೊಂಡು, ಕುಟುಂಬದ ಆರ್ಥಿಕತೆಗೆ ಹೆಗಲೊಡ್ಡಿದ್ದಾರೆ.
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ನೇತೃತ್ವದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ತಾಲೂಕಿನಲ್ಲಿ ಕಾರ್ಯಾರಂಭಿಸಿ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ. ಪೂಜ್ಯರ ಮಾರ್ಗದರ್ಶನದಲ್ಲಿ ಸ್ವ ಸಹಾಯ ಸಂಘಗಳ ಮೂಲಕ ಹಲವಾರು ಮಂದಿ ಉತ್ತಮ ಬದುಕನ್ನು ಕಟ್ಟಿಕೊಂಡು ಆರ್ಥಿಕವಾಗಿ ಸಧೃಢರಾಗಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಸದಸ್ಯರಿಗೆ ಆರ್ಥಿಕ ಸಹಕಾರ ನೀಡುವುದರ ಜೊತೆಗೆ ವ್ಯವಹಾರದ ಶಿಸ್ತು, ಸಂಸಾರ ನಿರ್ವಹಣೆ ಹಾಗೂ ಸಂಸ್ಕಾರಯುತ ಜೀವನ ಮೌಲ್ಯಗಳನ್ನು ಕಲಿಸಿಕೊಡುತ್ತಿರುವ ಸಂಸ್ಥೆಯಲ್ಲಿ ಹತ್ತು ಹಲವಾರು ಕಾರ್ಯಕ್ರಮಗಳು ಸಮಾಜದ ದುರ್ಬಲ ವರ್ಗದವರಿಗೆ ಆಶಾಕಿರಣವಾಗಿದೆ ಎಂದ ತಿಳಿಸಿದರು.ವಿಚಾರಗೋಷ್ಠಿಗೆ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಸ್.ಅರ್ಚನಾ ಮಾತನಾಡಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗ್ರಾಮೀಣ ಭಾಗದ ಮಹಿಳೆಯರ ಆರ್ಥಿಕ, ಶೈಕ್ಷಣಿಕ, ಕೃಷಿ, ಆರೋಗ್ಯ, ಸಾಮಾಜಿಕ ಸಬಲೀಕರಣ ಜತೆಯಲ್ಲಿ ಧಾರ್ಮಿಕ ತಳಹದಿಯಲ್ಲೂ ಕಾರ್ಯನಿರ್ವಹಿಸುತ್ತಿರುವ ದೇಶದ ಏಕೈಕ ಸಾಮಾಜಿಕ ಸೇವಾ ಸಂಸ್ಥೆಯಾಗಿದೆ. ಗ್ರಾಮೀಣ ಮಹಿಳೆಯರು ಆರ್ಥಿಕ ಸದೃಢತೆ ಹೊಂದಿದರೆ ಸ್ವಾವಲಂಬನೆಗೆ ದಾರಿಯಾಗುತ್ತದೆ. ಅದಕ್ಕೆ ಮೂಲ ಮಾರ್ಗ ನಾನಾ ತರಬೇತಿಗಳನ್ನು ಪಡೆದು ಆ ಮೂಲಕ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು, ಆತ್ಮಸ್ಥೆರ್ಯದೊಂದಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಸದೃಢರಾದರೆ ಸಮಾಜದಲ್ಲಿ ಸುಖಿ ಜೀವನ ನಡೆಸಬಹುದು ಎಂದು ತಿಳಿಸಿದರು.
ವಿಶೇಷ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ದಮ್ಮನಿಂಗಲ ಸರ್ಕಾರಿ ಪ್ರೌಢಶಾಲೆಯ ಶಾಲೆಯ ದೈಹಿಕ ಶಿಕ್ಷಕಿ ಗಾಯತ್ರಿ ನಾಗರಾಜ್, ಸಂಸ್ಕೃತಿ ಹಾಗೂ ಸಂಸ್ಕಾರದ ಬಗ್ಗೆ ಸವಿವರವಾಗಿ ಉಪನ್ಯಾಸ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿಸಿ ಟ್ರಸ್ಟ್ ಶ್ರವಣಬೆಳಗೊಳದ ಕ್ಷೇತ್ರ ಯೋಜನಾಧಿಕಾರಿ ಸದಾಶಿವ ಕುಲಾಲ್, ಮೇಲ್ವಿಚಾರಕರಾದ ಸಂದೇಶ್ ಗೌಡ, ಪರಮೇಶ್ ರಮೇಶ್ , ಸುಜಿತ್ ಸುಶೀಲಾ, ಆಂತರಿಕ ಲೆಕ್ಕಪರಿಶೋಧಕರಾದ ಕವಿತಾ, ಕೃಷಿ ಮೇಲ್ವಿಚಾರಕರಾದ ಮಹದೇವ ಪ್ರಸಾದ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಸ್ವಾತಿನಾಗೇಶ್, ಶಿವಲೀಲಾ ಸೇರಿದಂತೆ ಸ್ವಸಹಾಯ ಸಂಘಗಳ ಸದಸ್ಯರು ಭಾಗವಹಿಸಿದ್ದರು.