ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಡಾ.ಪ್ರಣವಾನಂದ ಸ್ವಾಮೀಜಿ ಮಾತನಾಡಿದರು.
ಚಿತ್ರದುರ್ಗದಲ್ಲಿ ಡಾ.ಪ್ರಣವಾನಂದ ಸ್ವಾಮೀಜಿ ಹೇಳಿಕೆ । 18 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಈಡಿಗ ಬಿಲ್ಲವ ನಾಮಧಾರಿ ಸಮುದಾಯದ 18 ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಜ.6ರಿಂದ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕರದಾಳ್‍ನ ಶ್ರೀ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದಿಂದ ಪಾದಯಾತ್ರೆ ಪ್ರಾರಂಭಿಸಲಿದ್ದೇವೆ ಎಂದು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕರದಾಳನ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಡಾ.ಪ್ರಣವಾನಂದ ಸ್ವಾಮೀಜಿ ತಿಳಿಸಿದರು.ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ದಿನಕ್ಕೆ 20 ಕಿ.ಮೀ. ನಡೆದು 41 ದಿನಗಳ ನಂತರ ಬೆಂಗಳೂರಿಗೆ ತಲುಪಿ ಫ್ರೀಡಂ ಪಾರ್ಕ್ ನಲ್ಲಿ ಬಹಿರಂಗ ಸಭೆ ನಡೆಸಿ ಬೇಡಿಕೆಗಳ ಈಡೇರಿಕೆಗಾಗಿ ಆಮರಣಾಂತರ ಉಪವಾಸ ಸತ್ಯಾಗ್ರಹ ಪ್ರಾರಂಭಿಸಲಾಗುವುದು. ಈಡಿಗ ಬಿಲ್ಲವ, ನಾಮಧಾರಿ, ಧೀವರ, ತೀಯ ಸೇರಿದಂತೆ 26 ಪಂಗಡಗಳನ್ನು ಹೊಂದಿದ ಸಮಾಜದ ಬೇಡಿಕೆ ಈಡೇರಿಕೆಗಾಗಿ ಜ.6ನೇ ತಾರೀಖಿನಿಂದ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠ ಕರದಾಳದಿಂದ ಬೆಂಗಳೂರುವರೆಗೆ ಐತಿಹಾಸಿಕ 700 ಕಿಮೀ ಪಾದಯಾತ್ರೆ ನಡೆಯಲಿದೆ ಎಂದರು.
ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಕೂಡಲೇ 500 ಕೋಟಿ ರು. ಬಿಡುಗಡೆ ಮಾಡಬೇಕು. ಕುಲ ಕಸುಬು ಕಳೆದುಕೊಂಡ ಕಲ್ಯಾಣ ಕರ್ನಾಟಕ ಭಾಗದ ಸಂತ್ರಸ್ತ ಈಡಿಗರ ಪ್ರತಿ ಕುಟುಂಬಕ್ಕೆ 5 ಎಕರೆ ಜಮೀನು ಮಂಜೂರು ಮಾಡಬೇಕು. ಸಮಾಜವನ್ನು 2ಎ ಯಿಂದ ಎಸ್‌ಟಿ ಮೀಸಲಾತಿಗೆ ಸೇರಿಸುವುದಕ್ಕೆ ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಬ್ರಹ್ಮಶ್ರೀ ನಾರಾಯಣ ಗುರುಗಳ ಪುತ್ಥಳಿಯನ್ನು ಬೆಂಗಳೂರಿನ ವಿಧಾನಸೌಧದ ಎದುರುಗಡೆ ಸ್ಥಾಪಿಸಬೇಕು ಎಂದರು.ರಾಜ್ಯದ ಈಡಿಗ ಸಮಾಜದ ಹಾಗೂ ಹಿಂದುಳಿದ ವರ್ಗದ ಭಕ್ತಿಶ್ರದ್ಧಾ ಕೇಂದ್ರವಾದ ಸಿಗಂಧೂರು ಚೌಡೇಶ್ವರಿ ದೇವಸ್ಥಾನದ ವಿರುದ್ಧ ಹೂಡಿದ ಮೊಕದ್ದಮೆಗಳನ್ನು ಕೂಡಲೇ ಹಿಂತೆಗೆದುಕೊಂಡು ದೇವಸ್ಥಾನಕ್ಕೆ ಸೂಕ್ತ ಭದ್ರತೆ ನೀಡಿ ಕ್ಷೇತ್ರಕ್ಕೆ ಅಗತ್ಯ ಭೂಮಿ ಮಂಜೂರು ಮಾಡಬೇಕು.
ಮದ್ಯ ಮಾರಾಟದಲ್ಲಿ ಸಮಾಜದ ಈಡಿಗ ಸೇರಿದಂತೆ 26 ಪಂಗಡಗಳಿಗೆ ಶೇ.50ರಷ್ಟು ಮೀಸಲಾತಿ ನೀಡಬೇಕು ಕೋಟಿ ಚೆನ್ನಯ್ಯರ ಜನ್ಮಸ್ಥಳ ಮತ್ತು ಐಕ್ಯಸ್ಥಳ ಅಭಿವೃದ್ಧಿಗಾಗಿ ಕೋಟಿ ಚೆನ್ನಯ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ಪ್ರತಿ ಬಜೆಟ್‍ನಲ್ಲಿ ಕನಿಷ್ಟ 100 ಕೋಟಿ ರು. ಮಂಜೂರು ಮಾಡಬೇಕು. ರಾಜ್ಯದ ಎಲ್ಲಾ ವಿಶ್ವವಿದ್ಯಾಲಯದಲ್ಲಿ ನಾರಾಯಣ ಗುರುಗಳ ಅಧ್ಯಯನ ಪೀಠ ಸ್ಥಾಪಿಸುವುದು ಮತ್ತು ರಾಜ್ಯದ ಒಂದು ವಿಶ್ವವಿದ್ಯಾಲಯಕ್ಕೆ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರು ಘೋಷಣೆ ಮಾಡುವುದು. ಅನುಭವ ಮಂಟಪದಲ್ಲಿ ಈಡಿಗ ಜನಾಂಗದ ಶರಣರಾದ ಹೆಂಡದ ಮಾರಯ್ಯನವರ ಜಯಂತಿ ಆಚರಣೆಯನ್ನು ಸರ್ಕಾರ ಘೋಷಣೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.ಶಿವಮೊಗ್ಗ, ಮಂಗಳೂರು, ಕಾರವಾರ, ಉಡುಪಿ ಪ್ರತಿ ಜಿಲ್ಲೆಯಲ್ಲಿ 5 ಎಕರೆ ಜಮೀನು ಮಂಜೂರು ಮಾಡಿ ಐಎಎಸ್, ಐಪಿಎಸ್, ಕೆಎಎಸ್ ತರಬೇತಿ ಕೇಂದ್ರಗಳನ್ನು ಸ್ಥಾಪಿಸುವುದಕ್ಕೆ ಸರ್ಕಾರ ಮುಂದಾಗಬೇಕಿದೆ ಎಂದರು. ಈ ಸಂದರ್ಭದಲ್ಲಿ ಸಮಾಜದ ಮುಖಂಡರು ಹಾಜರಿದ್ದರು.