ಸಾರಾಂಶ
ಬೆಳಗಾವಿ ಜಿಲ್ಲೆ ಹಾಗೂ ನೆರೆಯ ಮಹಾರಾಷ್ಟ್ರ ರಾಜ್ಯದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಅಬ್ಬರ ಮುಂದುವರೆದಿದೆ.
ಕನ್ನಡಪ್ರಭ ವಾರ್ತೆ ಬೆಳಗಾವಿ
ಬೆಳಗಾವಿ ಜಿಲ್ಲೆ ಹಾಗೂ ನೆರೆಯ ಮಹಾರಾಷ್ಟ್ರ ರಾಜ್ಯದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಜಿಲ್ಲೆಯ ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ಒಟ್ಟು 23 ಸೇತುವೆ ಮುಳುಗಡೆಯಾಗಿವೆ. ಸಂಭವನೀಯ ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ. ತುರ್ತು ಪರಿಸ್ಥಿತಿ ನಿಭಾಯಿಸಲು ಎನ್‌ಡಿಆರ್‌ಎಫ್ ತಂಡ ಸಿದ್ಧಗೊಂಡಿದೆ.ಕೃಷ್ಣಾ, ಮಲಪ್ರಭಾ, ಘಟಪ್ರಭಾ, ಮಾರ್ಕಂಡೇಯ, ವೇದಗಂಗಾ, ದೂಧಗಂಗಾ ನದಿಗಳು ಉಕ್ಕಿ ಹರಿಯುತ್ತಿವೆ. ಮಂಗಳವಾರ ಕುಡಚಿ ಸೇತುವೆ ಮುಳುಗಡೆಯಾಗಿದೆ. ಇದರಿಂದಾಗಿ ಮುಳುಗಡೆಯಾದ ಸೇತುವೆಗಳ ಸಂಖ್ಯೆ 23ಕ್ಕೇರಿದೆ. ಜಿಲ್ಲೆಯ ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ನದಿ ಪಾತ್ರದ ಗ್ರಾಮಸ್ಥರಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ. ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗಳೇದ ಅವರು, ಚಿಕ್ಕೋಡಿಯ ಮಲ್ಲಿಕವಾಡ-ದತ್ತವಾಡ ರಸ್ತೆಯಲ್ಲಿರುವ ಸೇತುವೆ ಪರಿಶೀಲನೆ ನಡೆಸಿ ಎನ್‌ಡಿಆರ್‌ಎಫ್ ತಂಡ ಸದಸ್ಯರೊಂದಿಗೆ ಸಂವಾದ ನಡೆಸಿದರು.
ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದೆ. ಮಳೆಯಿಂದಾಗಿ ಜಿಲ್ಲೆಯಲ್ಲಿ 183 ಮನೆಗಳು ಭಾಗಶಃ ಕುಸಿದುಬಿದ್ದಿವೆ. ಮೂರು ಮನೆಗಳು ಸಂಪೂರ್ಣವಾಗಿ ಕುಸಿದುಬದ್ದಿವೆ. 7 ಜಾನುವಾರುಗಳ ಶೆಡ್ ಕುಸಿದುಬಿದ್ದಿವೆ. ಜಿಲ್ಲೆಯಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದು, ನದಿ ತೀರದಲ್ಲಿರುವ ಹೊಲಗದ್ದೆಗಳಿಗೆ ನೀರು ನುಗ್ಗಿದೆ. ಇದರಿಂದಾಗಿ 51 ಹೆಕ್ಟೇರ್ ಕೃಷಿ ಹಾಗೂ 12.14 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಗಳು ಹಾನಿಗೀಡಾಗಿವೆ.ಇಂದು ಶಾಲೆಗಳಿಗೆ ರಜೆ: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ, ಖಾನಾಪುರ, ಬೈಲಹೊಂಗಲ ಮತ್ತು ಕಿತ್ತೂರು ತಾಲ್ಲೂಕಿನ ಅಂಗನವಾಡಿ, ಎಲ್ಲ ಸರಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಜು.24ರಂದು ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನ ಪದವಿ ಪೂರ್ವ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.ಮೊಸಗಳಿಂದ ಎಚ್ಚರವಿರಿ: ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ಜಮೀನುಗಳಿಗೆ ನೀರು ನುಗ್ಗಿದೆ. ಹೀಗಾಗಿ ಮೊಸಳೆಗಳು ಜಮೀನುಗಳತ್ತ ಬರುತ್ತಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ತಿಳಿಸಿದ್ದಾರೆ.