ವಿದ್ಯಾರ್ಥಿಗಳು ಪುಸ್ತಕದ ಜ್ಞಾನದ ಜೊತೆಗೆ ಪ್ರಾಯೋಗಿಕವಾಗಿ ಕಲಿತಾಗ ಅದು ಹೆಚ್ಚು ಪರಿಣಾಮಕಾರಿಯಾಗುತ್ತದೆ. ಶಾಲಾ-ಕಾಲೇಜು ಹಂತದಲ್ಲಿಯೇ ವಿಧೇಯಕ ಮಂಡನೆ, ಸಭಾತ್ಯಾಗ, ಶೂನ್ಯ ವೇಳೆಯಲ್ಲಿ ಪ್ರತಿಭಟನೆ ಹಾಗೂ ಚುಕ್ಕೆ ಗುರುತಿನ ಪ್ರಶ್ನೆಗಳ ಮಂಡನೆ ಸೇರಿದಂತೆ ಸಂಸದೀಯ ಕಾರ್ಯಕಲಾಪಗಳ ಕುರಿತು ಹೆಚ್ಚಿನ ಜ್ಞಾನ ಬೆಳೆಸಿಕೊಳ್ಳಬೇಕು ಎಂದು ಶಾಸಕ ಅಶೋಕ ಮನಗೂಳಿ ಸಲಹೆ ನೀಡಿದರು.
ಕನ್ನಡಪ್ರಭ ವಾರ್ತೆ ಸಿಂದಗಿ
ವಿದ್ಯಾರ್ಥಿಗಳು ಪುಸ್ತಕದ ಜ್ಞಾನದ ಜೊತೆಗೆ ಪ್ರಾಯೋಗಿಕವಾಗಿ ಕಲಿತಾಗ ಅದು ಹೆಚ್ಚು ಪರಿಣಾಮಕಾರಿಯಾಗುತ್ತದೆ. ಶಾಲಾ-ಕಾಲೇಜು ಹಂತದಲ್ಲಿಯೇ ವಿಧೇಯಕ ಮಂಡನೆ, ಸಭಾತ್ಯಾಗ, ಶೂನ್ಯ ವೇಳೆಯಲ್ಲಿ ಪ್ರತಿಭಟನೆ ಹಾಗೂ ಚುಕ್ಕೆ ಗುರುತಿನ ಪ್ರಶ್ನೆಗಳ ಮಂಡನೆ ಸೇರಿದಂತೆ ಸಂಸದೀಯ ಕಾರ್ಯಕಲಾಪಗಳ ಕುರಿತು ಹೆಚ್ಚಿನ ಜ್ಞಾನ ಬೆಳೆಸಿಕೊಳ್ಳಬೇಕು ಎಂದು ಶಾಸಕ ಅಶೋಕ ಮನಗೂಳಿ ಸಲಹೆ ನೀಡಿದರು.ನಗರದ ಮಾಂಗಲ್ಯ ಭವನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತಿ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡ ಯುವ ಸಂಸತ್ತು ಅಧಿವೇಶನದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಆದೇಶದ ಮೇರೆಗೆ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯ ಪರಿಕಲ್ಪನೆ ಹಾಗೂ ಶಾಸಕಾಂಗದ ಕಾರ್ಯವೈಖರಿಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಯುವ ಸಂಸತ್ತು ಕಾರ್ಯಕ್ರಮ ಆಯೋಜಿಸಲಾಗಿದೆ. ವಿದ್ಯಾರ್ಥಿಗಳು ನಡೆಸಿಕೊಟ್ಟ ಈ ಅಣಕು ಅಧಿವೇಶನ ಇಡೀ ರಾಜ್ಯಕ್ಕೆ ಮಾದರಿಯಾಗುವಂತಿದೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಉತ್ತಮ ಸಂಸದೀಯ ಪಟುಗಳಾಗಿ ಹೊರಹೊಮ್ಮಬೇಕು. ಜನಸೇವೆಯೇ ನಮ್ಮ ಮುಖ್ಯ ಗುರಿಯಾಗಿದ್ದು, ಜನಪ್ರತಿನಿಧಿಗಳು ಯಾವುದೇ ಸ್ವಾರ್ಥವಿಲ್ಲದೆ ನಿಸ್ವಾರ್ಥವಾಗಿ ಜನರ ಸೇವೆ ಮಾಡಬೇಕು ಎಂದರು. ಈ ವೇಳೆ ತಹಸೀಲ್ದಾರ್ ಕರೇಪ್ಪ ಬೆಳ್ಳಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಅರಿವು ಮೂಡಿಸುವ ಉದ್ದೇಶದಿಂದ ಯುವ ಸಂಸತ್ತು ಆಯೋಜಿಸಲಾಗಿದೆ. ತಾಲೂಕು ಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಿದ 36 ವಿದ್ಯಾರ್ಥಿಗಳನ್ನು ಜಿಲ್ಲಾಮಟ್ಟಕ್ಕೆ ಆಯ್ಕೆ ಮಾಡಲಾಗುವುದು ಎಂದರು.ಅಧಿವೇಶನದಲ್ಲಿ ಪ್ರೌಢಶಾಲೆ, ಪದವಿ-ಪೂರ್ವ ಹಾಗೂ ಪದವಿ ಹಂತದ 224 ವಿದ್ಯಾರ್ಥಿಗಳು ಭಾಗವಹಿಸಿ, ಸಭಾಧ್ಯಕ್ಷರು, ಸಚಿವರು, ವಿರೋಧ ಪಕ್ಷದ ನಾಯಕರು ಹಾಗೂ ಸದಸ್ಯರ ಪಾತ್ರಗಳನ್ನು ನಿರ್ವಹಿಸುವ ಮೂಲಕ ಸಂಸದೀಯ ಕಾರ್ಯಕಲಾಪಗಳನ್ನು ಪ್ರಾಯೋಗಿಕವಾಗಿ ಪ್ರದರ್ಶಿಸಿದರು. ಎಲ್ಲ ವಿದ್ಯಾರ್ಥಿಗಳಿಗೂ ತಮ್ಮ ಅಭಿಪ್ರಾಯಗಳನ್ನು ಮಂಡಿಸಲು ಸೂಕ್ತ ಅವಕಾಶ ಕಲ್ಪಿಸಲಾಯಿತು.ನಿರುದ್ಯೋಗ ಸಮಸ್ಯೆ, ನಗರಾಭಿವೃದ್ಧಿ, ಶಿಕ್ಷಣ ವ್ಯವಸ್ಥೆ, ಗ್ರಾಮೀಣ ಕುಡಿಯುವ ನೀರಿನ ಪೂರೈಕೆ, ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಿತಿಗತಿ, ಜಲಜೀವನ ಮಿಷನ್ ಯೋಜನೆ, ಕಾಲುವೆಗಳಿಗೆ ನೀರು ಪೂರೈಕೆ, ಬರಗಾಲ ನಿರ್ವಹಣೆ, ಸೈಬರ್ ಅಪರಾಧ ಹಾಗೂ ರೈತರ ಸಮಸ್ಯೆಗಳು ಸೇರಿದಂತೆ ಹಲವು ಪ್ರಚಲಿತ ವಿಷಯಗಳ ಕುರಿತು ವಿದ್ಯಾರ್ಥಿಗಳು ನಡೆಸಿದ ಚರ್ಚೆಗಳು ಗಮನ ಸೆಳೆದವು. ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು.ಇದೇ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಎಸ್.ಬಿ.ಪಾಟೀಲ ಗುಂದಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ತಾಪಂ ಇಒ ಅನಿಲ ಹಳ್ಳಿ, ಬಿಇಒ ಟಿ.ಎಸ್.ಆಲಗೂರ, ಎ.ಆರ್.ಹೆಗ್ಗನದೊಡ್ಡಿ, ಬಿ.ಎಂ.ಮಾಸ್ತಿ, ನೌಕರರ ಸಂಘದ ಅಧ್ಯಕ್ಷ ಅಶೋಕ ತೆಲ್ಲೂರ, ಎಸ್.ಎಸ್.ಹಳಿಮನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಬಾಗೇಶ ಹೂಗಾರ ಪ್ರಾರ್ಥಿಸಿದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಭವಾನಿ ಪಾಟೀಲ ಸ್ವಾಗತಿಸಿದರು. ಆರ್.ಎಸ್.ಗಾಯಕವಾಡ ನಿರೂಪಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.ಆಲಗೂರ ನಿರೂಪಿಸಿದರು.