ಕಾರ್ಯಕ್ರಮದಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಪ್ರತಿಜ್ಞಾ ವಿಧಿಯನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಿ.ಕೆ. ದಾಕ್ಷಾಯಿಣಿ ಬೋಧಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಮಕ್ಕಳ ಹಕ್ಕುಗಳ ರಕ್ಷಣೆ, ಕಾನೂನಿನ ಅರಿವು ಹಾಗೂ ಸಾಮಾಜಿಕ ಜವಾಬ್ದಾರಿಯ ಕುರಿತು ವಿದ್ಯಾರ್ಥಿಗಳು ತಿಳಿದುಕೊಳ್ಳುವುದು ಅತ್ಯಂತ ಅಗತ್ಯವಾಗಿದೆ. ಕಾನೂನು ಅರಿವು ಪಡೆದು ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳುವುದರ ಜೊತೆಗೆ ಇತರರಿಗೂ ನೆರವಾಗುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಕೊಡುಗೆ ನೀಡಬೇಕು ಎಂದು ನ್ಯಾಯಾಧೀಶೆ ಹೇಮಾವತಿ ಕರೆ ನೀಡಿದರು.

ನಗರದ ಸಂತ ಜೋಸೇಫರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಕ್ಕಳ ರಕ್ಷಣಾ ಘಟಕ, ಮಕ್ಕಳ ಕಲ್ಯಾಣ ಸಮಿತಿ, ಪ್ರಚೋದನ ಸಾಮಾಜಿಕ ಸೇವಾ ಕೇಂದ್ರ, ಪೊಲೀಸ್ ಇಲಾಖೆ ಹಾಗೂ ಶಾಲೆಯ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಸುರಕ್ಷಿತ ಬಾಲ್ಯ ಅಭಿಯಾನ, ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣೆ ಅಧಿನಿಯಮ-೨೦೧೨ರ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಜಿಲ್ಲಾ ನ್ಯಾಯಾಧೀಶರು ಮಾತನಾಡಿದರು.

ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ಹಾಗೂ ಕಾನೂನುಬಾಹಿರ ಕೃತ್ಯಗಳನ್ನು ತಡೆಗಟ್ಟುವಲ್ಲಿ ಕಾನೂನಿನ ಪಾತ್ರ ಮಹತ್ವದ್ದಾಗಿದೆ. ಪ್ರತಿಯೊಬ್ಬರಿಗೂ ಸ್ವತಂತ್ರವಾಗಿ ಬದುಕುವ ಹಕ್ಕಿದೆ. ಆದರೆ ಆ ಸ್ವಾತಂತ್ರ್ಯವು ಕಾನೂನಿನ ಮಿತಿಯೊಳಗಿರಬೇಕು. ಯಾರಾದರೂ ಕಾನೂನು ಉಲ್ಲಂಘಿಸಿ ಮತ್ತೊಬ್ಬರ ಹಕ್ಕುಗಳಿಗೆ ಧಕ್ಕೆ ಉಂಟುಮಾಡಿದಾಗ, ಸಂತ್ರಸ್ತರಿಗೆ ನ್ಯಾಯ ಮತ್ತು ರಕ್ಷಣೆ ಒದಗಿಸುವುದು ಕಾನೂನು ವ್ಯವಸ್ಥೆಯ ಕರ್ತವ್ಯವಾಗಿದೆ. ಇಂತಹ ಸಂದರ್ಭಗಳಲ್ಲಿ ಕಾನೂನಿನ ನೆರವು ಪಡೆಯುವುದು ಹೇಗೆ ಎಂಬುದನ್ನು ಮಕ್ಕಳು ತಿಳಿದುಕೊಳ್ಳಬೇಕು ಎಂದು ಹೇಳಿದರು.

ಮಕ್ಕಳ ಸುತ್ತಮುತ್ತಲಿನ ಪರಿಸರದಲ್ಲಿ ಅಥವಾ ಮನೆಯಲ್ಲಿ ಯಾವುದೇ ರೀತಿಯ ದೌರ್ಜನ್ಯ ನಡೆದರೆ ಅದನ್ನು ಮುಚ್ಚಿಡದೆ, ವಿಶ್ವಾಸಾರ್ಹ ಪೋಷಕರು, ಶಿಕ್ಷಕರು ಅಥವಾ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಬೇಕು. ತಮ್ಮ ಹಕ್ಕುಗಳ ಬಗ್ಗೆ ಅರಿವು ಹೊಂದಿರುವ ಮಕ್ಕಳು ಇತರರಿಗೂ ಸರಿಯಾದ ಮಾರ್ಗದರ್ಶನ ನೀಡುವ ಮೂಲಕ ಕಾನೂನಿನ ರಕ್ಷಣೆಗೆ ಸಹಕರಿಸಬಹುದು ಎಂದು ತಿಳಿಸಿದರು. ವಿದ್ಯಾರ್ಥಿಗಳು ಶಿಕ್ಷಣವನ್ನು ಕೇವಲ ಉದ್ಯೋಗ ಪಡೆಯುವ ಸಾಧನವೆಂದು ಪರಿಗಣಿಸಬಾರದು. ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಲು, ಸಮಾಜವನ್ನು ಅರ್ಥಮಾಡಿಕೊಳ್ಳಲು ಹಾಗೂ ಜವಾಬ್ದಾರಿಯುತ ನಾಗರಿಕರಾಗಲು ಶಿಕ್ಷಣ ಸಹಕಾರಿಯಾಗಬೇಕು. ವಿದ್ಯಾರ್ಥಿ ಜೀವನದಲ್ಲಿಯೇ ಉತ್ತಮ ನಡವಳಿಕೆ, ಶಿಸ್ತು, ಸನ್ನಡತೆ ಮತ್ತು ಸಾಮಾಜಿಕ ಕಾಳಜಿಯನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಂವಿಧಾನ ಮತ್ತು ಕಾನೂನುಗಳ ಕುರಿತು ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು. ತಮ್ಮ ಹಕ್ಕುಗಳ ಜೊತೆಗೆ ಕರ್ತವ್ಯಗಳ ಬಗ್ಗೆಯೂ ತಿಳಿದುಕೊಳ್ಳಬೇಕು. ಸರ್ಕಾರ ಒದಗಿಸುವ ಶಿಕ್ಷಣದ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ವಿದ್ಯಾವಂತರಾಗಿ ರೂಪುಗೊಳ್ಳಬೇಕು. ಈ ಮೂಲಕ ಸಮಾಜ ಮತ್ತು ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡುವ ಪ್ರಜೆಗಳಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಸುರಕ್ಷಿತ ಬಾಲ್ಯ ಅಭಿಯಾನದಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಕಾನೂನು ಅರಿವು ಮೂಡಿಸುವುದರ ಜೊತೆಗೆ ಅವರ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಲು ನೆರವಾಗುತ್ತವೆ. ಇಂತಹ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮಕ್ಕಳ ಹಕ್ಕುಗಳು ಮತ್ತು ಸುರಕ್ಷತೆಯ ಕುರಿತು ಸಮಾಜದಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಪ್ರತಿಜ್ಞಾ ವಿಧಿಯನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಿ.ಕೆ. ದಾಕ್ಷಾಯಿಣಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಲರಾಮ್ ಕೆ.ಎನ್., ಉಪ ಪೊಲೀಸ್ ಅಧೀಕ್ಷಕ ಹಾಗೂ ವಿಶೇಷ ಬಾಲ ಪೊಲೀಸ್ ಘಟಕದ ಅಧಿಕಾರಿ ಗಂಗಾಧರಪ್ಪ ಆರ್.ವಿ., ಪ್ರಚೋದನ ಸಾಮಾಜಿಕ ಸೇವಾ ಸಂಸ್ಥೆಯ ನಿರ್ದೇಶಕ ಪೌಲೋಸ್ ಸಿ.ಸಿ., ಸಂತ ಜೋಸೇಫ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಫಾದರ್ ಲಿಯೋ ಪೆರೇರಾ, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ವಿವಿಧ ಇಲಾಖೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಅವೇಶ್ ಪಾಷಾ ಸ್ವಾಗತಿಸಿದರು. ಜೀವನ್ ಕಾರ್ಯಕ್ರಮ ನಿರೂಪಿಸಿದರು.