ಸಾರಾಂಶ
ಕೊಪ್ಪಳ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು ಸತ್ಯ, ಶಾಂತಿ, ಅಹಿಂಸೆಯ ಮಾರ್ಗಗಳ ಜತೆಗೆ ಸ್ವಚ್ಛತೆ, ಸರಳತೆಗೂ ಮಹತ್ವ ನೀಡಿದ್ದರು ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.
ಇಲ್ಲಿಯ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಗುರುವಾರ ಆಯೋಜಿಸಲಾಗಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ 156ನೇ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು. ಗಾಂಧೀಜಿ ಎಂದಾಕ್ಷಣ ಸ್ವಾವಲಂಬನೆ, ಸ್ವದೇಶಿ ವಸ್ತುಗಳ ಬಳಕೆಗೆ ಉತ್ತೇಜನ, ಬಡವರ, ಮಹಿಳೆಯರ, ದೀನ-ದಲಿತರ ಉದ್ಧಾರ, ವಿದ್ಯಾರ್ಥಿಗಳ ಕಲಿಕೆ ಮತ್ತು ಸ್ವಚ್ಛತೆಯೇ ಸೇವೆ... ಹೀಗೆ ಹಲವಾರು ಅಂಶಗಳು ನಮ್ಮ ಮುಂದೆ ಬರುತ್ತವೆ. ಗ್ರಾಮೀಣ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಸ್ವಾವಲಂಬನೆಯ ಧ್ಯೇಯ ಉದ್ದೇಶವನ್ನಿಟ್ಟುಕೊಂಡು ಗ್ರಾಮ ಸ್ವರಾಜ್ ಆಗಬೇಕೆಂಬುದು ಗಾಂಧೀಜಿ ಆಶಯವಾಗಿತ್ತು. ಪಂಚಾಯತ್ ರಾಜ್ ಕಾಯ್ದೆ ಬದಲಾವಣೆ ಮಾಡಿ, ಗ್ರಾಮ ಸ್ವರಾಜ್ ಕಾಯ್ದೆಯನ್ನಾಗಿಸಲಾಗಿದೆ. ಗ್ರಾಮ ಸ್ವರಾಜ್ಯ, ಸತ್ಯಾಗ್ರಹ, ಚಳವಳಿಯಂತಹ ಗಾಂಧೀಜಿ ಅವರ ಪರಿಕಲ್ಪನೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು.ಗಾಂಧೀಜಿ ಆಶಯದಂತೆ ಎಲ್ಲರೂ ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವ ಜತೆಗೆ ಸ್ವದೇಶಿ ವಸ್ತುಗಳ ಬಳಕೆಗೆ ಹೆಚ್ಚು ಉತ್ತೇಜನ ನೀಡಬೇಕು. ಲಾಲ್ ಬಹಾದ್ದೂರ ಶಾಸ್ತ್ರೀಜಿ ಈ ದೇಶ ಕಂಡ ಸರಳ ಸಜ್ಜನಿಕೆಯ ಪ್ರಧಾನಿಯಾಗಿದ್ದರು. ಇಂತಹ ಮಾಹಾನ್ ವ್ಯಕ್ತಿಗಳ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಕೊಪ್ಪಳದ ಹಿರಿಯ ಲೇಖಕರು ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯರಾದ ಸಾವಿತ್ರಿ ಮುಜುಮದಾರ ಅವರು ಗಾಂಧೀಜಿ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಗಾಂಧಿ ಜೀವನ ಕುರಿತಾದ ಚಲನಚಿತ್ರ ಪ್ರದರ್ಶನವನ್ನು ಬರುವ ದಿನಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ: ಮಹಾತ್ಮ ಗಾಂಧೀಜಿ ಜಯಂತಿ ನಿಮಿತ್ತ ವಾರ್ತಾ ಇಲಾಖೆಯಿಂದ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ಪ್ರೌಢಶಾಲೆ, ಪದವಿಪೂರ್ವ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಸಮಾರಂಭದಲ್ಲಿ ಪ್ರಮಾಣಪತ್ರ ಮತ್ತು ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು.
ಗಾಂಧಿ ಭಜನೆ: ಕೊಪ್ಪಳ ಜಿಲ್ಲೆಯ ಕಲಾವಿದರಾದ ಭಾಷು ಕಿನ್ನಾಳ ಹಾಗೂ ತಂಡದವರು ಗಾಂಧೀಜಿ ಅವರಿಗೆ ಪ್ರಿಯವಾಗಿದ್ದ ಭಜನೆಗಳನ್ನು ಹಾಡಿದರು. ಕೊಪ್ಪಳ ಜಿಲ್ಲಾ ತರಬೇತಿ ಕೇಂದ್ರದ ಪ್ರಾಚಾರ್ಯ ಕೃಷ್ಣಮೂರ್ತಿ ದೇಸಾಯಿ ಅವರು ಕಾರ್ಯಕ್ರಮ ನಿರೂಪಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಾದ ಜಿ. ಸುರೇಶ ಸ್ವಾಗತಿಸಿದರು.ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮಂಜುನಾಥ ಗೊಂಡಬಾಳ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರು, ಪದವಿ ಪರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಸೋಮಶೇಖರಗೌಡ ಪಾಟೀಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ. ಲಿಂಗರಾಜು, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ. ಪಿ.ಎಂ. ಮಲ್ಲಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎ. ಬಸವರಾಜ ಉಪಸ್ಥಿತರಿದ್ದರು.