ಹಳ್ಳಿ ಅಭಿವೃದ್ಧಿ ಮಾಡಿದರೆ ಗಾಂಧೀಜಿ ಕನಸು ನನಸು

| Published : Jul 12 2024, 01:33 AM IST

ಸಾರಾಂಶ

ಗ್ರಾಮೀಣ ಪ್ರದೇಶಗಳನ್ನು ನಗರ ಪ್ರದೇಶಗಳಿಗೆ ಸರಿಸಮಾನವಾಗಿ ಅಭಿವೃದ್ಧಿಪಡಿಸಿದಾಗ ಮಾತ್ರ ಗಾಂಧೀಜಿ ಗ್ರಾಮ ಸ್ವರಾಜ್ಯದ ಕನಸು ನನಸಾಗುತ್ತದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಹೇಳಿದರು.

ಕನ್ನಡಪ್ರಭ ವಾರ್ತೆ ತುಮಕೂರುಗ್ರಾಮೀಣ ಪ್ರದೇಶಗಳನ್ನು ನಗರ ಪ್ರದೇಶಗಳಿಗೆ ಸರಿಸಮಾನವಾಗಿ ಅಭಿವೃದ್ಧಿಪಡಿಸಿದಾಗ ಮಾತ್ರ ಗಾಂಧೀಜಿ ಗ್ರಾಮ ಸ್ವರಾಜ್ಯದ ಕನಸು ನನಸಾಗುತ್ತದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಹೇಳಿದರು.ನಗರದ ಹೊರವಲಯದ ಹೆಗ್ಗೆರೆ ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ, ಪಿಡಿಒ, ಕಾರ್ಯದರ್ಶಿಗಳಿಗಾಗಿ ಜಿಪಂ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಸಂವಿಧಾನದ ಆಶಯದಂತೆ ಸ್ಥಳೀಯ ಆಡಳಿತವನ್ನು ಬಲಗೊಳಿಸಲು ಗ್ರಾಪಂ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಅಧಿಕಾರ ವಿಕೇಂದ್ರೀಕರಣಕ್ಕಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೃಜನೆಯಾದ ಗ್ರಾಪಂಗಳಿಂದ ಗ್ರಾಮೀಣ ಪ್ರದೇಶಗಳು ಅಭಿವೃದ್ಧಿಯನ್ನು ಕಾಣುತ್ತಿವೆ ಎಂದರು. ಮಾಜಿ ಪ್ರಧಾನಿ ದಿ.ಜವಾಹರಲಾಲ್ ನೆಹರು ರಾಜಾಸ್ಥಾನದ ನಾಗೌರ್ ಗ್ರಾಮದಲ್ಲಿ ಅಧಿಕಾರ ವಿಕೇಂದ್ರೀಕರಣದ ಉದ್ದೇಶದಿಂದ 1959 ರಲ್ಲಿ ಮೊದಲ ಗ್ರಾಪಂಯನ್ನು ಪ್ರಾರಂಭಿಸಿದ್ದರು. ಭಾರತದಲ್ಲಿರುವ ಗ್ರಾಪಂ ವ್ಯವಸ್ಥೆ ವಿಶ್ವದಲ್ಲಿ ಬೇರೆಲ್ಲೂ ಕಾಣ ಸಿಗುವುದಿಲ್ಲ. ಡಾ. ಬಿ.ಆರ್. ಅಂಬೇಡ್ಕರ್ ಸಂವಿಧಾನದಲ್ಲಿ ಗ್ರಾಮೀಣ ಅಭಿವೃದ್ಧಿಗಾಗಿ ವಿಶೇಷವಾಗಿ ನಮೂನೆ ಮಾಡಿದ್ದು, ದೇಶದ ಎಲ್ಲಾ ಸಮುದಾಯದ ಜನರನ್ನು ಆಡಳಿತದ ವ್ಯವಸ್ಥೆಯಲ್ಲಿ ಪಾಲುದಾರರನ್ನಾಗಿಸುವುದೇ ಸಂವಿಧಾನದ ಆಶಯವಾಗಿದೆ ಎಂದರು. ಗ್ರಾಪಂ ವ್ಯಾಪ್ತಿಗೆ 28 ಇಲಾಖೆ ಒಳಪಡುವುದರಿಂದ ಗ್ರಾಪಂ ಅಧಿಕಾರ ವ್ಯಾಪ್ತಿ ಕೂಡ ವಿಸ್ತರಣೆಯಾಗಿ ಗ್ರಾಮೀಣ ಭಾಗದ ಜನರಿಗೆ ವಿವಿಧ ಸೌಲಭ್ಯಗಳನ್ನು ತಲುಪಿಸಲು ಅನುಕೂಲವಾಗಿದೆ. ಗ್ರಾಪಂ ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಯಡಿ ಮಹಿಳೆಯರಿಗೂ ಮೀಸಲಾತಿ ಕಲ್ಪಿಸಿ ಸಮಾನ ಅವಕಾಶ ನೀಡಲಾಗಿದೆ ತಿಳಿಸಿದರು.ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕಾರ್ಯ ಮಾಡುತ್ತಿದ್ದು, ನರೇಗಾ ಯೋಜನೆಯಡಿ ಗುರಿ ಮೀರಿ ಸಾಧನೆ ಮಾಡಲಾಗಿದೆ. ಪ್ರಸ್ತುತ ವರ್ಷದಲ್ಲಿ 63 ಲಕ್ಷ ಮಾನವ ದಿನಗಳನ್ನು ಸೃಜಿಸುವ ಮೂಲಕ ರಾಜ್ಯದಲ್ಲಿಯೇ ನರೇಗಾ ಪ್ರಗತಿಯಲ್ಲಿ ಜಿಲ್ಲೆಯು ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದರು.ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸಿ ಗ್ರಾಮ ನೈರ್ಮಲ್ಯಕ್ಕೆ ಹೆಚ್ಚು ಆದ್ಯತೆ ನೀಡಬೇಕು. 2600 ಕೋಟಿ ರು. ವೆಚ್ಚದಲ್ಲಿ ಕೈಗೊಂಡಿರುವ ಜಲ್ ಜೀವನ್ ಮಿಷನ್ ಯೋಜನೆಯಲ್ಲಿ ಗುಣಮಟ್ಟವನ್ನು ಕಾಯ್ದುಕೊಂಡು ಮನೆ-ಮನೆಗೂ ಕುಡಿಯುವ ನೀರನ್ನು ಒದಗಿಸುವ ಕಾರ್ಯ ಶೀಘ್ರ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಮಾತನಾಡಿ, ಗ್ರಾಮ ಆಡಳಿತದ ಅಧಿಕಾರ ವಿಕೇಂದ್ರೀಕರಣ ಪ್ರತ್ಯಾಯೋಜನೆ ವ್ಯವಸ್ಥೆಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯಗಳಲ್ಲಿ ಕರ್ನಾಟಕವೂ ಕೂಡ ಒಂದಾಗಿದ್ದು, ರಾಜ್ಯ ಸರ್ಕಾರ ಅನೇಕ ಯೋಜನೆಗಳ ಮೂಲಕ ಸ್ಥಳೀಯ ಆಡಳಿತವನ್ನು ಬಲಗೊಳಿಸುತ್ತಿದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರವನ್ನೊರತು ಪಡಿಸಿದರೆ ಗ್ರಾಪಂಗಳಿಗೆ ಮಾತ್ರ ತೆರಿಗೆ ವಿಧಿಸುವ ವಿಶೇಷ ಅಧಿಕಾರವಿದೆ ಎಂದು ತಿಳಿಸಿದರು.ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಪರ ಕಾರ್ಯದರ್ಶಿ ಉಮಾ ಮಹಾದೇವನ್ ಮಾತನಾಡಿ, ಪಂಚಾಯತಿಗಳಲ್ಲಿ ವಿಶೇಷವಾಗಿ ಮಹಿಳಾ ಸಬಲೀರಣಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದು, ಘನತ್ಯಾಜ್ಯ ವಿಲೇವಾರಿ ಘಟಕ, ಸ್ವಚ್ಛ ವಾಹಿನಿ, ಕೂಸಿನ ಮನೆ ಸೇರಿದಂತೆ ವಿವಿಧ ಯೋಜನೆಗಳಲ್ಲಿ ಮಹಿಳೆಯರಿಗಾಗಿ ಉದ್ಯೋಗ ಸೃಷ್ಠಿ ಮಾಡಲಾಗುತ್ತಿದೆ ಎಂದರು.ಜಿಪಂ ಸಿಇಒ ಜಿ.ಪ್ರಭು, ಶಾಸಕರಾದ ಸುರೇಶ ಗೌಡ, ಟಿ,ಬಿ ಜಯಚಂದ್ರ ವೆಂಕಟೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಎಸ್ಪಿ ಕೆ.ವಿ. ಅಶೋಕ್ ಉಪಸ್ಥಿತರಿದ್ದರು.