ಸಾರಾಂಶ
ಮಂಗಳೂರು: ಪ್ರತಿ ವರ್ಷದಂತೆ ಈ ಬಾರಿಯೂ ಸ್ವರ್ಣಗೌರಿ ಹಾಗೂ ವರಸಿದ್ಧಿ ವಿನಾಯಕ ಚತುರ್ಥಿ ಹಬ್ಬ ಸಮೀಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಸೂಚನೆಯಂತೆ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ರಾಸಾಯನಿಕ ಬಣ್ಣ ಲೇಪಿತ ಗೌರಿ ಮತ್ತು ಗಣೇಶ ವಿಗ್ರಹಗಳನ್ನು ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ.ಪ್ಲಾಸ್ಟರ್ ಆಫ್ ಪ್ಯಾರಿಸ್ ವಿಗ್ರಹಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ವ್ಯಕ್ತಿ/ ಸಂಸ್ಥೆಗಳಿಗೆ ವ್ಯಾಪಾರ ಲೈಸನ್ಸ್ ನೀಡದಿರಲು ಮತ್ತು ಲೈಸನ್ಸ್ ಪಡೆಯದೆ ಅನಧಿಕೃತವಾಗಿ ತಯಾರಿ/ ಮಾರಾಟ ಮಾಡುವ ವ್ಯಕ್ತಿ/ ಸಂಸ್ಥೆಗಳ ಮೇಲೆ ಕಾನೂನು ಕ್ರಮವನ್ನು ತಕ್ಷಣ ಜರುಗಿಸಲಾಗುವುದು.
ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ಬಣ್ಣ ಲೇಪಿತ ವಿಗ್ರಹಗಳನ್ನು ಯಾವುದೇ ನದಿ/ ಕಾಲುವೆ/ ಬಾವಿಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದರೆ ಭಾರತೀಯ ನ್ಯಾಯ ಸಂಹಿತೆ ನಿಯಮಾನುಸಾರ ಸೂಕ್ತ ಕ್ರಮ ಜರುಗಿಸಲಾಗುವುದು.ಗಣೇಶ ಹಬ್ಬದ ಸಂದರ್ಭ ರಾಸಾಯನಿಕ ಬಣ್ಣಗಳಿಂದ ಮಾಡಿದ ಮೂರ್ತಿಗಳ ಬದಲಾಗಿ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿದ ನಂತರ ಸಾಮೂಹಿಕವಾಗಿ ಗುರುತಿಸಿರುವ ಸ್ಥಳಗಳಲ್ಲೇ ಕಡ್ಡಾಯವಾಗಿ ವಿಸರ್ಜಿಸಬೇಕು.
ಮಣ್ಣಿನ ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭ ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ ಇತ್ಯಾದಿ ಪ್ರತ್ಯೇಕಿಸಿ ವಿಲೇವಾರಿ ಮಾಡಲು ಕ್ರಮ ವಹಿಸಬೇಕು. ವಿಲೇವಾರಿಗೆ ಪ್ರತ್ಯೇಕ ವಾಹನದ ವ್ಯವಸ್ಥೆ ಮಾಡಲು ಕ್ರಮ ವಹಿಸಬೇಕು.ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು ಪ್ರತಿ ಸಮಿತಿಯವರು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಯಿಂದ ನಿಬಂಧನೆಗೊಳಪಟ್ಟ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸಬೇಕು. ಈ ಅನುಮತಿ ಪತ್ರಗಳಲ್ಲಿ ಲೈಸನ್ಸ್ ನೀಡುವ ಸಂದರ್ಭ ಪ್ಲಾಸ್ಟಿಕ್ ಪ್ಲೆಕ್ಸ್ ಮತ್ತಿತರ ವಸ್ತುಗಳ ಬಳಕೆ ನಿಷೇಧಿಸಬೇಕು ಹಾಗೂ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆಯ ತನಕ ಧ್ವನಿವರ್ಧಕಗಳ ಬಳಕೆ ನಿಷೇಧಿಸಬೇಕು.
ನಿರ್ದಿಷ್ಟ ಪ್ರದೇಶದಲ್ಲಿ ಸ್ಥಾಪಿಸಲಾಗುವ ಸಾರ್ವಜನಿಕ ಗಣಪತಿಗಳನ್ನು ವಿಲೇವಾರಿ ಮಾಡಲು ನಿರ್ದಿಷ್ಟ ಜಲಮೂಲಗಳನ್ನು ನಿಗದಿಪಡಿಸಬೇಕು.ಎಲ್ಲ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪಿ.ಒ.ಪಿ ಮತ್ತು ಬಣ್ಣದ ವಿಗ್ರಹಗಳನ್ನು ತನಿಖೆ ಮಾಡಿ ಸುಪರ್ದಿಗೆ ತೆಗೆದುಕೊಳ್ಳಲು ಕ್ರಮ ವಹಿಸಬೇಕು. ಈ ಅಧಿಸೂಚನೆಯನ್ನು ಪರಿಸರ ಮತ್ತು ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪರಿಸರ ದೃಷ್ಟಿಯಿಂದ ಆದೇಶಿಸಲಾಗಿದ್ದು, 2025ನೇ ವರ್ಷದ ಗಣೇಶ ಚರ್ತುಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಸಹಕರಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.