ಗೌರಿಶಂಕರ್ ಆಗಮನ ಆನೆ ಬಲ ಬಂದಂತಾಗಿದೆ: ಮುಋಳೀಧರ ಹಾಲಪ್ಪ

| Published : Feb 21 2024, 02:08 AM IST

ಸಾರಾಂಶ

ಮಾಜಿ ಶಾಸಕ ಡಿ.ಸಿ. ಗೌರಿಶಂಕರ್‌ ಅವರು ನಮ್ಮ ಪಕ್ಷಕ್ಕೆ ಬಂದಿರುವುದು ನಮಗೆ ಆನೆ ಬಲ ಬಂದಂತಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ತಿಳಿಸಿದರು.

ಕನ್ನಡಪ್ರಭ ವಾರ್ತೆ ತುಮಕೂರು

ಮಾಜಿ ಶಾಸಕ ಡಿ.ಸಿ. ಗೌರಿಶಂಕರ್‌ ಅವರು ನಮ್ಮ ಪಕ್ಷಕ್ಕೆ ಬಂದಿರುವುದು ನಮಗೆ ಆನೆ ಬಲ ಬಂದಂತಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ತಿಳಿಸಿದರು.

ಜಯನಗರದ ತಮ್ಮ ಸ್ವಗೃಹದಲ್ಲಿ ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ತುಮಕೂರು ಗ್ರಾಮಾಂತರ ಕ್ಷೇತ್ರದ ಬೂತ್ ಮಟ್ಟದ ಸಭೆಯಲ್ಲಿ ಮಾತನಾಡಿದರು.

ತುಮಕೂರು ಗ್ರಾಮಾಂತರ ಸೇರಿದಂತೆ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲೂ ಡಿ.ಸಿ. ಗೌರಿಶಂಕರ್‌ ಅವರು ಜನಪ್ರಿಯತೆಯನ್ನು ಹೊಂದಿದ್ದಾರೆ. ಜೊತೆಗೆ ತುಮಕೂರು ಗ್ರಾಮಾಂತರದ ಕಳೆದ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಷಣ್ಮುಖಪ್ಪ ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್‌ ಗೌಡ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಮುಂತಾದವರು ಪಕ್ಷಕ್ಕಾಗಿ ಹಗಲಿರುಳು ದುಡಿಯುತ್ತಿದ್ದಾರೆ ಎಂದರು.

ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡು ಲೋಕಸಭಾ ಚುನಾವಣಾ ಅಭ್ಯರ್ಥಿಯಾಗಲಿದ್ದಾರೆ ಎಂಬ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಯ ವಿರುದ್ಧ ಪ್ರಚಾರ ಮಾಡಿದಂತವರು. ಈಗ ಕಾಂಗ್ರೆಸ್‌ಗೆ ಬಂದು ಟಿಕೆಟ್ ಕೇಳುತ್ತಾರೆ ಎಂದರೆ ಯಾರು ಒಪ್ಪುತ್ತಾರೆ. ಇದೆಲ್ಲವನ್ನೂ ಪಕ್ಷದ ವರಿಷ್ಠರು, ಮುಖಂಡರು, ಕಾರ್ಯಕರ್ತರು ಗಮನಿಸುತ್ತಾರೆ. ಅವರಿನ್ನೂ ಪಕ್ಷಕ್ಕೆ ಸೇರ್ಪಡೆಗೊಂಡಿಲ್ಲ, ಅದರ ಬಗ್ಗೆ ಅಪ್ರಸ್ತುತ. ಈಗ ನಾನೇ ಪ್ರಭಲ ಆಕಾಂಕ್ಷಿ ಅಂದ ಮೇಲೆ ಅವರ ಬಗ್ಗೆ ನಾನ್ಯಾಕೆ ಮಾತನಾಡಲಿ ಎಂದು ಹೇಳಿದರು.

ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ನಾನೂ ಕೂಡ ಪ್ರಭಲ ಆಕಾಂಕ್ಷಿ ಎಂದ ಅವರು ಜನಸಾಮಾನ್ಯರೊಂದಿಗೆ ಬೆರೆತು ಪಕ್ಷ ಸಂಘಟನೆ ಮಾಡಿದ್ದೇನೆ ಎಂದು ಹೇಳಿದರು.

ಮಾಜಿ ಶಾಸಕ ಡಿ.ಸಿ. ಗೌರಿಶಂಕರ್ ಮಾತನಾಡಿ, ಮುಂದಿನ ಲೋಕಸಭಾ ಚುನಾವಣೆ ಗೆಲುವಿನ ಕಾರ್ಯತಂತ್ರದ ಕುರಿತು ಚರ್ಚೆ ನಡೆಸಿದ್ದೇವೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವುದು ಹೇಗೆ ಎಂಬ ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದೇವೆ. ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬಿಜೆಪಿ ಅಭ್ಯರ್ಥಿಯನ್ನು ಸೋಲಿಸುವುದೇ ನಮ್ಮ ಉದ್ದೇಶ. ಹಾಗಾಗಿ ಗ್ರಾಮಾಂತರ ಮುಖಂಡರೆಲ್ಲಾ ಸೇರಿ ತಂತ್ರಗಾರಿಕೆ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಗಂಗಹನುಮಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ, ಮುಖಂಡ ಷಣ್ಮುಖಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಟಿ. ಶ್ರೀನಿವಾಸ್, ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಕಮಲಗಂಗಹನುಮಯ್ಯ ಹಾಗೂ ಬ್ಲಾಕ್ ಅಧ್ಯಕ್ಷರು, ಇತರ ಮುಖಂಡರು ಹಾಜರಿದ್ದರು.