ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಪರೀಕ್ಷೆ ಹಿನ್ನೆಲೆ ಜಿಲ್ಲಾಧಿಕಾರಿ ಸಂಗಪ್ಪ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಶನಿವಾರ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಕರ್ನಾಟಕ ಲೋಕಸೇವಾ ಆಯೋಗದ ನ.15ರಂದು ನಡೆಸಲಿರುವ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಪರೀಕ್ಷೆ ಹಿನ್ನೆಲೆ ಜಿಲ್ಲಾಧಿಕಾರಿ ಸಂಗಪ್ಪ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಪರೀಕ್ಷಾ ಕೇಂದ್ರಗಳಿಗೆ ಶನಿವಾರ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.

ಪರೀಕ್ಷೆ ಸುಸೂತ್ರ, ಪಾರದರ್ಶಕವಾಗಿ ಹಾಗೂ ಲೋಪದೋಷಗಳಿಲ್ಲದೆ ನಡೆಯುವಂತೆ ಜಿಲ್ಲಾಡಳಿತದಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಪರೀಕ್ಷಾ ಸಿದ್ಧತೆಗಳ ಪರಿಶೀಲನೆಗಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಗರದ ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯ, ಸಕ್ರಿ ಕಾಲೇಜು, ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಸ್.ಬಿ. ಪಾಟೀಲ ಸಂಯುಕ್ತ ಪದವಿ ಪೂರ್ವ ಕಾಲೇಜು, ಅಂಜುಮನ್ ಕಾಲೇಜು ಹಾಗೂ ವಿದ್ಯಾಗಿರಿಯ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಸ್ಥಾಪಿಸಲಾಗಿರುವ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದರು.

ಭೇಟಿ ಸಂದರ್ಭದಲ್ಲಿ ಪರೀಕ್ಷಾ ಕೊಠಡಿಗಳ ವ್ಯವಸ್ಥೆ, ಅಭ್ಯರ್ಥಿಗಳ ಪ್ರವೇಶಕ್ಕೆ ಕೈಗೊಂಡಿರುವ ಕ್ರಮಗಳು, ಆಸನ ವ್ಯವಸ್ಥೆ, ಮೂಲಸೌಕರ್ಯ, ಭದ್ರತಾ ವ್ಯವಸ್ಥೆ ಸೇರಿ ಪರೀಕ್ಷೆಗೆ ಸಂಬಂಧಿಸಿದ ವಿವಿಧ ಸಿದ್ಧತೆ ಪರಿಶೀಲಿಸಿದರು. ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ವ್ಯವಸ್ಥೆಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸುವುದು, ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಹಾಗೂ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ವ್ಯವಸ್ಥೆ ಕಲ್ಪಿಸುವ ಕುರಿತು ಅಧಿಕಾರಿಗಳಿಗೆ ಸೂಚಿಸಲಾಯಿತು.

ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆ ಹಿನ್ನೆಲೆ ಜಿಲ್ಲೆಯಲ್ಲಿ ಒಟ್ಟು 16 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, 7,362 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯ ವೇಳೆ ಕೆಪಿಎಸ್ಸಿ ಮಾರ್ಗಸೂಚಿ ಹಾಗೂ ನಿಗದಿತ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದರು.

ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಪ್ರೀಸ್ಕಿಂಗ್, ವಸ್ತ್ರ ಸಂಹಿತೆ ಕಾರ್ಯವನ್ನು ಮಾರ್ಗಸೂಚಿಯನ್ವಯ ತಪಾಸಣೆ ಕೈಗೊಳ್ಳಲು ತಿಳಿಸಿದ ಅವರು, ಅಭ್ಯರ್ಥಿಗಳು ನಿಗದಿತ ಸಮಯಕ್ಕೆ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ, ಪ್ರವೇಶ ಪತ್ರದಲ್ಲಿ ನಮೂದಿಸಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದರು.