ಸಾರಾಂಶ
ಕನ್ನಡಪ್ರಭ ವಾರ್ತೆ, ದಾವಣಗೆರೆ
ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರೂಪ್ `ಎ` ಮತ್ತು `ಬಿ` ವೃಂದದ 384 ಹುದ್ದೆಗಳಿಗೆ ಆಗಸ್ಟ್ 27 ರಂದು ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ದಾವಣಗೆರೆ ನಗರದ 14 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ಮುನ್ನೆಚ್ಚರಿಕೆ ವಹಿಸುವ ಮೂಲಕ ಎಲ್ಲ ಕೊಠಡಿಗಳಲ್ಲಿ ಸಿಸಿ ಟಿವಿ, ಬಾಡಿ ಕ್ಯಾಮೆರಾಗಳು ಸಕ್ರಿಯವಾಗಿರುವ ನಿಟ್ಟಿನಲ್ಲಿ ಎಲ್ಲ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ ನೀಡಿದರು.ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪರೀಕ್ಷಾ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆ.27ರಂದು ಪೂರ್ವಭಾವಿ ಪರೀಕ್ಷೆಯ ಮೊದಲ ಪ್ರಶ್ನೆಪತ್ರಿಕೆ ಪರೀಕ್ಷೆಯು ಬೆಳಗ್ಗೆ 10 ರಿಂದ 12 ಗಂಟೆವರೆಗೆ ಮತ್ತು ಎರಡನೇ ಪತ್ರಿಕೆಯ ಪರೀಕ್ಷೆ ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆವರೆಗೆ ನಡೆಯಲಿದೆ. ಪರೀಕ್ಷೆ ಆರಂಭಕ್ಕೂ 1 ಗಂಟೆ ಮುಂಚಿತವಾಗಿ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಇರಬೇಕು. ಈ ಎಲ್ಲ ಅಭ್ಯರ್ಥಿಗಳ ಪ್ರವೇಶ ಪತ್ರ, ಮೂಲ ಗುರುತಿನ ಚೀಟಿ ಪರಿಶೀಲನೆ ನಂತರವೇ ಕೇಂದ್ರದೊಳಗೆ ಬಿಡಬೇಕು ಎಂದರು.
ಎಲ್ಲ ಪರೀಕ್ಷಾ ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾ ಮತ್ತು ಬಾಡಿ ಕ್ಯಾಮೆರಾಗಳ ಮೂಲಕ ಪರೀಕ್ಷೆಯ ಎಲ್ಲ ಪ್ರಕ್ರಿಯೆಗಳನ್ನು ಸೆರೆಯಾಗುವಂತೆ ನೋಡಿಕೊಂಡು, ಅಭ್ಯರ್ಥಿಗಳು ಹಾಗೂ ಸಂವೀಕ್ಷಕರ ಚಲನವಲಗಳ ಬಗ್ಗೆ ಹೆಚ್ಚಿನ ನಿಗಾ ವಹಿಸುವ ಕೆಲಸ ಮಾಡಬೇಕಾಗಿದೆ. ಅಭ್ಯರ್ಥಿಗಳನ್ನು ಕಟ್ಟುನಿಟ್ಟಾಗಿ ತಪಾಸಣೆ ಕೈಗೊಂಡು ಯಾವುದೇ ಅಭ್ಯರ್ಥಿಗಳ ಕಿವಿಯಲ್ಲಿ ಎಲೆಕ್ಟ್ರಾನಿಕ್ಸ್ ಡಿವೈಸ್, ಮೈಕ್ರೋಫೋನ್ ಸೇರಿದಂತೆ ಇನ್ನಿತರೆ ಎಲೆಕ್ಟ್ರಾನಿಕ್ಸ್ ವಸ್ತುಗಳು ಇರದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.ಪರೀಕ್ಷಾ ಅವ್ಯವಹಾರ ಮತ್ತು ಕಾನೂನು ಸುವ್ಯವಸ್ಥೆ ತೆಡೆಗಟ್ಟಲು 144 ಸೆಕ್ಷನ್ ಅನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್‌ವರೆಗೆ ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ. ನಿಷೇಧಿತ ವಲಯದಲ್ಲಿ ಜೆರಾಕ್ಸ್ ಹಾಗೂ ಇಂಟರ್‌ನೆಟ್ ಸೆಂಟರ್‌ಗಳನ್ನು ಮುಚ್ಚಲು ಆದೇಶಿಸಲಾಗುತ್ತದೆ. ಸಮಯಕ್ಕೆ ಸರಿಯಾಗಿ ಪರೀಕ್ಷೆ ಆರಂಭವಾಗಬೇಕು ಮತ್ತು ಮುಕ್ತಾಯವಾಗಬೇಕು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲ ಅಧಿಕಾರಿಗಳು ಮುನ್ನಚ್ಚರಿಕೆ ವಹಿಸಲು ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಜಿ.ಕೊಟ್ರೇಶ್, ಬಿಸಿಎಂ ಅಧಿಕಾರಿ ಗಾಯತ್ರಿ ಇನ್ನಿತರೆ ಅಧಿಕಾರಿಗಳು ಉಪಸ್ಥಿರಿದ್ದರು.