ಸಾರಾಂಶ
ಕನ್ನಡಪ್ರಭವಾರ್ತೆ ಚಿತ್ರದುರ್ಗ
ಆಗಸ್ಟ್ 27 ರಂದು ಕೆಪಿಎಸ್ ಸಿ ವತಿಯಿಂದ ನಡೆಯಲಿರುವ ಗೆಜೆಟೆಡ್ ಪ್ರೊಪೆಷನರ್ಸ್ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಸೂಚಿಸಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯಾವುದೇ ಲೋಪದೋಷಗಳು ಬಾರದಂತೆ ಪರೀಕ್ಷೆ ಕಾರ್ಯ ನಿರ್ವಹಿಸಬೇಕು. ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯವಾಗಬಾರದು. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ ಸೌಲಭ್ಯ ಕಲ್ಪಿಸುವುದರ ಜತೆಗೆ ಪರೀಕ್ಷಾ ಕೊಠಡಿಗಳಲ್ಲಿ ಅಭ್ಯರ್ಥಿಗಳಿಗೆ ಸೂಕ್ತ ಆಸನ, ಗಾಳಿ ಬೆಳಕಿನ ವ್ಯವಸ್ಥೆ ಇರಬೇಕು. ಮಳೆಗಾಲವಾದ್ದರಿಂದ ಕೊಠಡಿಗಳಲ್ಲಿ ಮಳೆ ನೀರಿನಿಂದ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.ಕರ್ನಾಟಕ ಲೋಕಸೇವಾ ಆಯೋಗದಿಂದಲೇ ಈ ಬಾರಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಹಾಗೂ ಮೊಬೈಲ್ ಜಾಮರ್ ಅಳವಡಿಸಲಾಗುವುದು. ಪ್ರತಿ ಕೊಠಡಿಯ ಸಿಸಿ ಟಿವಿ ದೃಶ್ಯಗಳನ್ನು ವೀಕ್ಷಣೆ ಮಾಡಲಾಗುತ್ತದೆ. ಇದರೊಂದಿಗೆ ಕೊಠಡಿ ಮೇಲ್ವಿಚಾರಕರಿಗೂ ಬಾಡಿ ಕ್ಯಾಮರ ಹಾಕಿಕೊಳ್ಳುವುದನ್ನು ಕಡ್ಡಾಯವಾಗಿಸಿದೆ. ಹಲವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಎಲೆಕ್ಟ್ರಾನಿಕ್ ಗ್ಯಾಜೆಟ್‍ಗಳನ್ನು ಉಪಯೋಗಿಸಿ ಅಭ್ಯರ್ಥಿಗಳು ಅಕ್ರಮ ಎಸಗಲು ಪ್ರಯತ್ನಿಸಿರುವ ಬಗ್ಗೆ ವರದಿಗಳಿವೆ. ಆದ್ದರಿಂದ ಸೂಕ್ಷ್ಮವಾಗಿ ಪರೀಕ್ಷಾ ವ್ಯವಸ್ಥೆಯ ಪರಿಶೀಲನೆ ನಡೆಯಬೇಕು ಎಂದರು.
ಲೋಕಸೇವಾ ಆಯೋಗ ನೀಡಿರುವ ಪರೀಕ್ಷಾ ಕೈಪಿಡಿಯ ಅನುಸಾರ ಪರೀಕ್ಷಾ ಕಾರ್ಯದಲ್ಲಿ ಮಾಡಬೇಕಾದ ಕಾರ್ಯಗಳ ಬಗ್ಗೆ ಕೊಠಡಿ ಮೇಲ್ವಿಚಾರಕರಿಗೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.ಜಿಪಂ ಸಿಇಓ ಎಸ್.ಜೆ.ಸೋಮಶೇಖರ್ ಮಾತನಾಡಿ, ಪರೀಕ್ಷೆಗೆ ಅಕ್ಕಪಕ್ಕದ ಜಿಲ್ಲೆಗಳಿಂದ ಅಭ್ಯರ್ಥಿಗಳು ಆಗಮಿಸುತ್ತಾರೆ. ಅಭ್ಯರ್ಥಿಗಳಿಗೆ ಗೊಂದಲವಾಗದಂತೆ ಪರೀಕ್ಷಾ ಕೇಂದ್ರಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಾಹಿತಿ ಹಾಗೂ ಸೂಚನಾ ಫಲಕಗಳನ್ನು ಅಳವಡಿಸಬೇಕು. ಅಭ್ಯರ್ಥಿಗಳ ನೊಂದಣಿ ಸಂಖ್ಯೆ, ಕೊಠಡಿ ಸಂಖ್ಯೆಗಳ ಬಗ್ಗೆ ನಿಖರ ಮಾಹಿತಿ ಒದಗಿಸಬೇಕು. ಪರೀಕ್ಷೆ ಆರಂಭದಿಂದ ಹಿಡಿದು ಮುಕ್ತಾಯದವರೆಗೆ ಅಭ್ಯರ್ಥಿಗಳಿಗೆ ಸಮಯದ ಮಾಹಿತಿ ನೀಡಲು ಬೆಲ್ ಬಾರಿಸಬೇಕು ಎಂದು ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಿಗೆ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಮಾತನಾಡಿ, ಬಸ್ ಹಾಗೂ ರೈಲ್ವೇ ನಿಲ್ದಾಣಗಳಲ್ಲಿ ಪರೀಕ್ಷಾ ಕೇಂದ್ರಗಳ ಮಾಹಿತಿ ಪ್ರದರ್ಶಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.24 ಪರೀಕ್ಷಾ ಕೇಂದ್ರಲ್ಲಿ ಪರೀಕ್ಷೆ ಬರೆಯಲಿರುವ 8098 ಅಭ್ಯರ್ಥಿಗಳು
ಆ.27 ರಂದು ಬೆ.10 ರಿಂದ ಮ.12 ರವರೆಗೆ ಪತ್ರಿಕೆ-01 ಹಾಗೂ ಮ.02 ರಿಂದ ಸಂಜೆ 04 ರವರೆಗೆ ಪತ್ರಿಕೆ-02 ರ ಪರೀಕ್ಷೆ ನಡೆಯಲಿದೆ. ನಗರದಲ್ಲಿ 24 ಪರೀಕ್ಷಾ ಕೇಂದ್ರಗಳು ಇದ್ದು, ಒಟ್ಟು 8098 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ 155 ಅಂಗವಿಕಲ ಅಭ್ಯರ್ಥಿಗಳು ಇದ್ದಾರೆ. 10 ಅಂಧ ವಿದ್ಯಾರ್ಥಿಗಳಿಗೆ ಸ್ಕ್ರೈಬ್ ಸೌಲಭ್ಯ ಒದಗಿಸಲಾಗಿದೆ. ಈಗಾಗಲೇ ಕರ್ನಾಟಕ ಲೋಕಸೇವಾ ಆಯೋಗದಿಂದ ಪರೀಕ್ಷಾ ಮಾಹಿತಿ ಕೈಪಿಡಿ ಬಂದಿದೆ. ಇದರ ಅನುಸಾರ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಹಾಗೂ ಕೊಠಡಿ ಮೇಲ್ವಿಚಾರಕರಿಗೆ ತರಬೇತಿ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ ಸಭೆಯಲ್ಲಿ ಮಾಹಿತಿ ನೀಡಿದರು. ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್‍ಕುಮಾರ್ ಬಂಡಾರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರ ಮುಖ್ಯಸ್ಥರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.