ಸ್ವಚ್ಛತಾ ಅಭಿಯಾನ ಯಶಸ್ವಿಯಾಗಲು ಜನರ ಸಹಭಾಗಿತ್ವ ಅತ್ಯಗತ್ಯವಾಗಿದ್ದು, ವಿವಿಧ ಇಲಾಖೆಗಳು, ಸಂಘ- ಸಂಸ್ಥೆಗಳು, ಶಾಲಾ ವಿದ್ಯಾರ್ಥಿಗಳು ಹಾಗೂ ನಾಗರಿಕರನ್ನು ಒಳಗೊಂಡು ಕಾರ್ಯಕ್ರಮಗಳನ್ನು ನಡೆಸಲು ಸೂಚಿಸಲಾಗಿದೆ.
ಕಾರವಾರ: ಸ್ವಚ್ಛತೆ ಮತ್ತು ನೈರ್ಮಲ್ಯವನ್ನು ಉತ್ತೇಜಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಸೆ. 17ರಿಂದ ಅ. 2ರ ವರೆಗೆ ‘ಸ್ವಚ್ಛತಾ ಹೀ ಸೇವಾ- 2026’ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತಾ ಚಟುವಟಿಕೆಗಳನ್ನು ಚುರುಕುಗೊಳಿಸುವುದರ ಜತೆಗೆ ಸಾರ್ವಜನಿಕರಲ್ಲಿ ಸ್ವಚ್ಛತೆಯ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.ಸ್ವಚ್ಛತಾ ಹೀ ಸೇವಾ ಅಭಿಯಾನದಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಗಳಿಗೆ ಆದ್ಯತೆ ನೀಡಲಾಗುವುದು. ಸಾರ್ವಜನಿಕ ಸ್ಥಳಗಳು, ರಸ್ತೆಗಳು, ಶಾಲಾ ಆವರಣಗಳು ಹಾಗೂ ಜನಸಂಚಾರವಿರುವ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಸ್ವಚ್ಛ ಮತ್ತು ಆರೋಗ್ಯಕರ ಪರಿಸರ ನಿರ್ಮಿಸುವ ಗುರಿ ಹೊಂದಲಾಗಿದೆ.ಸ್ವಚ್ಛತಾ ಅಭಿಯಾನ ಯಶಸ್ವಿಯಾಗಲು ಜನರ ಸಹಭಾಗಿತ್ವ ಅತ್ಯಗತ್ಯವಾಗಿದ್ದು, ವಿವಿಧ ಇಲಾಖೆಗಳು, ಸಂಘ- ಸಂಸ್ಥೆಗಳು, ಶಾಲಾ ವಿದ್ಯಾರ್ಥಿಗಳು ಹಾಗೂ ನಾಗರಿಕರನ್ನು ಒಳಗೊಂಡು ಕಾರ್ಯಕ್ರಮಗಳನ್ನು ನಡೆಸಲು ಸೂಚಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಮನೆ- ಮನೆಗೆ ತ್ಯಾಜ್ಯ ಸಂಗ್ರಹಣೆ, ತ್ಯಾಜ್ಯ ವಿಂಗಡಣೆ ಮತ್ತು ವೈಜ್ಞಾನಿಕ ತ್ಯಾಜ್ಯ ನಿರ್ವಹಣೆ ಕುರಿತು ಜಾಗೃತಿ ಮೂಡಿಸುವ ಕಾರ್ಯಗಳಿಗೆ ಒತ್ತು ನೀಡಲಾಗುತ್ತದೆ.ಅಭಿಯಾನದ ಅಂಗವಾಗಿ ಸ್ವಚ್ಛತಾ ಗುರಿ ಘಟಕಗಳನ್ನು ಗುರುತಿಸಿ, ಸಾರ್ವಜನಿಕ ಸ್ಥಳಗಳು ಹಾಗೂ ಜನಸಂಚಾರವಿರುವ ಪ್ರದೇಶಗಳನ್ನು ಸ್ವಚ್ಛಗೊಳಿಸಲಾಗುವುದು. ಶಾಲಾ ಆವರಣಗಳಲ್ಲಿ ಸ್ವಚ್ಛತಾ ಚಟುವಟಿಕೆಗಳನ್ನು ಆಯೋಜಿಸಿ, ವಿದ್ಯಾರ್ಥಿಗಳಲ್ಲಿ ಸ್ವಚ್ಛತೆಯ ಮಹತ್ವದ ಕುರಿತು ಅರಿವು ಮೂಡಿಸಲು ಕ್ರಮ ಕೈಗೊಳ್ಳಲಾಗುತ್ತದೆ.ಸ್ವಚ್ಛತಾ ಅಭಿಯಾನದಲ್ಲಿ ತ್ಯಾಜ್ಯದಿಂದ ಸಂಪತ್ತು ಸೃಷ್ಟಿಸುವ ಪರಿಕಲ್ಪನೆಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ತ್ಯಾಜ್ಯ ವಿಂಗಡಣೆ, ಮರುಬಳಕೆ ಹಾಗೂ ವೃತ್ತಾಕಾರದ ಆರ್ಥಿಕತೆ ಉತ್ತೇಜಿಸುವ ಚಟುವಟಿಕೆಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ಮನೆ- ಮನೆಗೆ ತ್ಯಾಜ್ಯ ಸಂಗ್ರಹಣೆ, ಒದ್ದೆ ಮತ್ತು ಒಣ ತ್ಯಾಜ್ಯಗಳ ಪ್ರತ್ಯೇಕ ನಿರ್ವಹಣೆ ಹಾಗೂ ಏಕಬಳಕೆ ಪ್ಲಾಸ್ಟಿಕ್ ನಿಯಂತ್ರಣದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವುದು.ಅ. 1ರಂದು ‘ಒಂದು ದಿನ, ಒಂದು ಗಂಟೆ, ಒಟ್ಟಾಗಿ’ ಎಂಬ ಸಾಮೂಹಿಕ ಶ್ರಮದಾನ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಸ್ಥಳೀಯ ಸಂಸ್ಥೆಗಳು ಹಾಗೂ ವಿವಿಧ ಸಂಘ- ಸಂಸ್ಥೆಗಳು ಭಾಗವಹಿಸುವ ಮೂಲಕ ಸ್ವಚ್ಛತಾ ಕಾರ್ಯಕ್ಕೆ ಕೈಜೋಡಿಸಲಿವೆ.ಅ. 2ರಂದು ಸ್ವಚ್ಛ ಭಾರತ ದಿನದ ಅಂಗವಾಗಿ ವಿಶೇಷ ಗ್ರಾಮಸಭೆಗಳನ್ನು ಆಯೋಜಿಸಿ, ಸ್ವಚ್ಛತೆ, ನೈರ್ಮಲ್ಯ ಮತ್ತು ತ್ಯಾಜ್ಯ ನಿರ್ವಹಣೆ ಕುರಿತು ಚರ್ಚೆ ನಡೆಸಲಾಗುವುದು. ಸ್ವಚ್ಛತೆಯನ್ನು ಜನರ ದೈನಂದಿನ ಜೀವನದ ಭಾಗವಾಗಿಸುವ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಪ್ರತಿದಿನ ಸ್ವಚ್ಛತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.