ಸಾರಾಂಶ
ಕನ್ನಡಪ್ರಭ ವಾರ್ತೆ ಮೈಸೂರುಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 50:50 ಅನುಪಾತದಡಿ ನೀಡಿರುವ ಎಲ್ಲಾ ನಿವೇಶನಗಳ ಜಪ್ತಿಗೆ ಗುರುವಾರ ನಡೆದ ಸಾಮಾನ್ಯ ಸಭೆ ನಿರ್ಧರಿಸಿದೆ. ಇದರಿಂದಾಗಿ ಈ ಯೋಜನೆಯಡಿ ನಿವೇಶನ ಪಡೆದಿದ್ದವರಿಗೆ ಅಘಾತವಾದಂತಾಗಿದೆ.ಮುಡಾ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಎಲ್ಲಾ ಸದಸ್ಯರು ಇದಕ್ಕೆ ಒಪ್ಪಿದ್ದಾರೆ ಎಂದು ಶಾಸಕ ಕೆ. ಹರೀಶ್ಗೌಡ ನಂತರ ಸುದ್ದಿಗಾರರಿಗೆ ಹೇಳಿದರು.ನ್ಯಾ. ದೇಸಾಯಿ ಆಯೋಗದ ವರದಿ ಬಂದ ನಂತರ ವರದಿಯ ಮೇಲೆ ಈ ಕ್ರಮ ತೆಗೆದುಕೊಳ್ಳೊಣ ಎಂದು ಅಧ್ಯಕ್ಷರು ಹೇಳಿದ್ದಾರೆ. ಮುಡಾ ಸ್ವಚ್ಚವಾಗಬೇಕೆಂಬುದು ಎಲ್ಲರ ಅಭಿಪ್ರಾಯ. 2020 ರಿಂದ 50:50 ಅಡಿಯಲ್ಲಿ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಕೆಲವೊಂದು ಪ್ರಕರಣದಲ್ಲಿ ಪರಿಹಾರ ಪಡೆದಿದ್ದರೂ, ಅದಕ್ಕು 50:50 ಅನುಪಾತಡಿ ನಿವೇಶನ ನೀಡಿದ್ದಾರೆ ಎಂದರು.ಈ ಎಲ್ಲಾ ದಾಖಲೆಗಳನ್ನು ಇಟ್ಟುಕೊಂಡು ಸಭೆಯಲ್ಲಿ ನಾನು ಮಾತನಾಡಿದ್ದೇನೆ. ಕಳೆದ ಬಾರಿ ನಡೆದ ಸಭೆಯಲ್ಲೂ ಈ ಬಗ್ಗೆ ಚರ್ಚೆ ಮಾಡಲಾಗಿತ್ತು. ಆದರೆ ಅದರ ದಾಖಲೀಕರಣ ಆಗಿಲ್ಲ. ಹೀಗಾಗಿ ಅದರ ದಾಖಲೀಕರಣ ಮಾಡದ ಅಧಿಕಾರಿಗಳ ಮೇಲೆ ಎಫ್ಐಆರ್ ದಾಖಲು ಮಾಡಿ ಸರ್ಕಾರಕ್ಕೆ ಶಿಸ್ತು ಕ್ರಮಕ್ಕೆ ಪತ್ರ ಬರೆಯಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.ಸಭೆಯಲ್ಲಿ ಶಾಸಕರಾದ ಜಿ.ಟಿ. ದೇವೇಗೌಡ, ದರ್ಶನ್ ಧ್ರುವನಾರಾಯಣ, ಎ.ಬಿ. ರಮೇಶ್ ಬಾಬು ಬಂಡಿಸಿದ್ದೇಗೌಡ, ಟಿ.ಎಸ್. ಶ್ರೀವತ್ಸ, ಎಚ್. ವಿಶ್ವನಾಥ್, ಸಿ.ಎನ್. ಮಂಜೇಗೌಡ, ಕೆ. ವಿವೇಕಾನಂದ, ಆಯುಕ್ತ ರಘುನಂದನ್, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ನಗರ ಪಾಲಿಕೆ ಆಯುಕ್ತ ಆಸಾದ್ ಉರ್ ರೆಹಮಾನ್ ಷರೀಫ್, ನಗರ ಯೋಜಕ ಸದಸ್ಯರು ಇದ್ದರು.ಗೈರಾದವರುಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕರಾದ ತನ್ವೀರ್ ಸೇಠ್, ಡಾ. ಯತೀಂದ್ರ ಸಿದ್ದರಾಮಯ್ಯ, ಡಾ.ಡಿ. ತಿಮ್ಮಯ್ಯ, ಮಧು ಜಿ.ಮಾದೇಗೌಡ, ದಿನೇಶ್ ಗೂಳೀಗೌಡ ಗೈರು ಹಾಜರಾಗಿದ್ದರು.