ಕನ್ನಡಪ್ರಭ ವಾರ್ತೆ ಬೆಳಗಾವಿಬಸವಣ್ಣನವರ ತತ್ವಗಳು, ವಚನ ಸಾಹಿತ್ಯ ಹಾಗೂ ವೀರಶೈವ-ಲಿಂಗಾಯತ ಧರ್ಮದ ಮೂಲ ಆಶಯಗಳಿಗೆ ಧಕ್ಕೆ ತರುವ ರೀತಿಯಲ್ಲಿ ರವಿ ಹಂಜ್ ಅವರು ರಚಿಸಿರುವ ‘ಬಸವ ಮಂಟಪ’ ಎಂಬ ವಿವಾದಿತ ಕೃತಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಬೆಳಗಾವಿ ಜಿಲ್ಲಾ ಘಟಕ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಬಸವಣ್ಣನವರ ತತ್ವಗಳು, ವಚನ ಸಾಹಿತ್ಯ ಹಾಗೂ ವೀರಶೈವ-ಲಿಂಗಾಯತ ಧರ್ಮದ ಮೂಲ ಆಶಯಗಳಿಗೆ ಧಕ್ಕೆ ತರುವ ರೀತಿಯಲ್ಲಿ ರವಿ ಹಂಜ್ ಅವರು ರಚಿಸಿರುವ ‘ಬಸವ ಮಂಟಪ’ ಎಂಬ ವಿವಾದಿತ ಕೃತಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಬೆಳಗಾವಿ ಜಿಲ್ಲಾ ಘಟಕ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಕೃತಿಯನ್ನು ಮುಟ್ಟುಗೋಲು ಹಾಕಿಕೊಂಡು, ಅದರ ಮಾರಾಟ ಹಾಗೂ ಪ್ರಚಾರವನ್ನು ತಕ್ಷಣ ಸ್ಥಗಿತಗೊಳಿಸುವಂತೆ ಸರ್ಕಾರವನ್ನು ಆಗ್ರಹಿಸಿದೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಮಹಾಸಭೆಯ ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ಅವರು, ಬಸವಣ್ಣನವರ ತತ್ವಗಳು ಸಮಾನತೆ, ಕಾಯಕ, ದಾಸೋಹ ಹಾಗೂ ಮಾನವೀಯ ಮೌಲ್ಯಗಳನ್ನು ಸಾರುತ್ತವೆ. ಇಂತಹ ಪವಿತ್ರ ಪರಂಪರೆಯನ್ನು ಅಪಾರ್ಥಗೊಳಿಸುವ ಹಾಗೂ ಭಕ್ತ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡುವ ಬರಹಗಳನ್ನು ಸಮಾಜ ಸಹಿಸುವುದಿಲ್ಲ. ಕೃತಿಯ ಮೂಲಕ ಸಮಾಜದಲ್ಲಿ ಗೊಂದಲ ಮತ್ತು ವಿಭಜನೆ ಸೃಷ್ಟಿಸುವ ಪ್ರಯತ್ನ ಖಂಡನೀಯವಾಗಿದೆ ಎಂದು ತಿಳಿಸಿದ್ದಾರೆ.

ವಿವಾದಿತ ಕೃತಿಯನ್ನು ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು. ಅದರ ಮಾರಾಟ, ಪ್ರಚಾರ ಹಾಗೂ ಪ್ರಸಾರವನ್ನು ಸ್ಥಗಿತಗೊಳಿಸಬೇಕು. ಕೃತಿಯ ಕುರಿತು ಸಮಗ್ರ ಪರಿಶೀಲನೆ ನಡೆಸಿ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

ವಾಕ್ ಸ್ವಾತಂತ್ರ್ಯದ ಹೆಸರಿನಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದಕ್ಕೆ ಅವಕಾಶ ನೀಡಬಾರದು. ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಸೂಕ್ತ ನ್ಯಾಯ ಒದಗಿಸಬೇಕು. ಇಲ್ಲವಾದಲ್ಲಿ ಮಹಾಸಭೆಯು ಪ್ರಜಾಪ್ರಭುತ್ವದ ಮಾರ್ಗದಲ್ಲಿ ಹೋರಾಟ ನಡೆಸಲಿದೆ ಎಂದು ರತ್ನಪ್ರಭಾ ಬೆಲ್ಲದ ಎಚ್ಚರಿಸಿದ್ದಾರೆ.