ಕನ್ನಡಪ್ರಭ ವಾರ್ತೆ ಬಾದಾಮಿ
ಗ್ರಾಮೀಣ ವಿದ್ಯಾರ್ಥಿಗಳು ನಗರಕ್ಕೆ ಬಂದು ಶಾಲೆ ಕಲಿಯಲು ಅನುಕೂಲವಾಗುವಂತೆ ಬಸ್ ಪಾಸ್ ನೀಡುತ್ತಿದ್ದು, ಇದರ ಸದುಪಯೋಗ ಪಡೆಯುವಂತೆ ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.ಪಟ್ಟಣದ ಬಸ್ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ವಿತರಣೆಗೆ ಚಾಲನೆ ನೀಡಿ ಮಾತನಾಡಿದರು. ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ನಿರ್ಮಾಣದ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಜನಪರ ಯೋಜನೆಗಳ ಪ್ರಯೋಜನವನ್ನು ವಿದ್ಯಾರ್ಥಿಗಳನ್ನು ತಲುಪಬೇಕು. ಈ ಯೋಜನೆ ಗ್ರಾಮೀಣ ಪ್ರದೇಶದ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರಿಸಲು ದೊಡ್ಡ ನೆರವಾಗಲಿದೆ ಎಂದರು.ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಿರುವುದು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ನಿರ್ಧಾರ. ಉಚಿತ ಬಸ್ ಪಾಸ್‌ನಿಂದ ಬಡ ಹಾಗೂ ಗ್ರಾಮೀಣ ವಿದ್ಯಾರ್ಥಿಗಳು ಪ್ರತಿದಿನ ಯಾವುದೇ ಆರ್ಥಿಕ ಹೊರೆಯಿಲ್ಲದೆ ಶಾಲೆ ಹಾಗೂ ಕಾಲೇಜುಗಳಿಗೆ ಪ್ರಯಾಣಿಸಬಹುದಾಗಿದೆ. ಇದರಿಂದ ಶಿಕ್ಷಣದಿಂದ ಯಾರೂ ವಂಚಿತರಾಗದೆ ತಮ್ಮ ಕನಸುಗಳನ್ನು ನನಸು ಮಾಡಿಕೊಳ್ಳಲು ಅವಕಾಶ ಸಿಗುತ್ತದೆ. ಈ ಯೋಜನೆಯನ್ನು ಬಳಸಿಕೊಂಡು ಉತ್ತಮ ಶಿಕ್ಷಣ ಪಡೆದು ವೈದ್ಯರು, ಇಂಜಿನಿಯರ್‌ಗಳು, ಐಎಎಸ್, ಐಪಿಎಸ್ ಅಧಿಕಾರಿಗಳು, ವಿಜ್ಞಾನಿಗಳು, ಶಿಕ್ಷಕರು ಹಾಗೂ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸುವಂತೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಶಿವುಕುಮಾರ ಹಿರೇಮಠ, ಸರ್ಕಾರದ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಎಂ.ಎಂ.ಬೂದಿಹಾಳ, ಘಟಕ ವ್ಯವಸ್ಥಾಪಕ ಅಶೋಕ ಕೋರಿ ಹಾಗೂ ಸದಸ್ಯರು, ಕೆಡಿಪಿ ನಾಮನಿರ್ದೇಶಿತ ಸದಸ್ಯರು, ಮುಖಂಡರು, ಶಾಲಾ-ಕಾಲೇಜುಗಳ ಪ್ರಾಂಶುಪಾಲರು, ಶಿಕ್ಷಕರು, ಸಾರಿಗೆ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ವಿದ್ಯಾರ್ಥಿಗಳು ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾದರು.