2025-2026ನೇ ಸಾಲಿನ ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ತಾಲೂಕಿಗೆ ಉತ್ತಮ ಫಲಿತಾಂಶ ತರಬೇಕು ಎಂದು ಪ್ರೌಢಶಾಲಾ ಶಿಕ್ಷಕರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ತಿಳಿಸಿದರು.

ಹಿರಿಯೂರು: 2025-2026ನೇ ಸಾಲಿನ ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ತಾಲೂಕಿಗೆ ಉತ್ತಮ ಫಲಿತಾಂಶ ತರಬೇಕು ಎಂದು ಪ್ರೌಢಶಾಲಾ ಶಿಕ್ಷಕರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ತಿಳಿಸಿದರು.

ನಗರದ ರೋಟರಿ ಭವನದಲ್ಲಿ ಆಯೋಜಿಸಿದ್ದ ಪ್ರೌಢಶಾಲಾ ಮುಖ್ಯ ಶಿಕ್ಷಕರ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಶಿಕ್ಷಣಕ್ಕಾಗಿ ಸರ್ಕಾರ ಸಾವಿರಾರು ಕೋಟಿ ರುಪಾಯಿ ಖರ್ಚು ಮಾಡುತ್ತಿದೆ. ಸರ್ಕಾರಿ ಶಾಲೆಯಲ್ಲಿ ಬಡ ಮಕ್ಕಳೇ ಹೆಚ್ಚಾಗಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಪ್ರೌಢಶಾಲಾ ಶಿಕ್ಷಕರು ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಬಗ್ಗೆ ಹೆಚ್ಚಿನ ಗಮನಹರಿಸಿ ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಮುಖ್ಯ ಶಿಕ್ಷಕರಿಗೆ ಸಚಿವರು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆಕಾಶ್ ಮಾತನಾಡಿ, ಕಳೆದ ಸಾಲಿನಲ್ಲಿ ಕಡಿಮೆ ಫಲಿತಾಂಶ ಪಡೆದ 100 ಶಾಲೆಗಳನ್ನು ಗುರುತಿಸಲಾಗಿದೆ. ಶಾಲೆಗಳಲ್ಲಿ ಉತ್ತಮ ಫಲಿತಾಂಶ ಬರದಿದ್ದರೆ ಸೂಕ್ತ ಶಿಸ್ತು ಕ್ರಮ ಜರುಗಿಸಲಾಗುವುದು. ತಾಲೂಕಿನಲ್ಲಿ ಶಿಕ್ಷಕರ ಕೊರತೆ ಇರುವ ಅನುದಾನಿತ ಶಿಕ್ಷಣ ಸಂಸ್ಥೆಗಳ ಕಡಿಮೆ ಕಾರ್ಯಭಾರ ಇರುವ ಶಾಲೆಯಿಂದ ಶಿಕ್ಷಕರನ್ನು ನಿಯೋಜಿಸಿ ಬೋಧನೆ ಕೈಗೊಳ್ಳಲಾಗುತ್ತಿದೆ. ಜನವರಿಯಿಂದಲೇ ತಾಲೂಕಿನಲ್ಲಿ ವಿಶೇಷ ತರಗತಿಗಳನ್ನು ಆರಂಭಿಸಿ ಮಕ್ಕಳ ಉತ್ತಮ ಫಲಿತಾಂಶಕ್ಕಾಗಿ ಶಿಕ್ಷಕರು ಶ್ರಮಿಸಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಂ.ತಿಪ್ಪೇಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ, ತಾಲೂಕಿನಲ್ಲಿ 80 ಪ್ರೌಢಶಾಲೆಗಳಿದ್ದು ಶಿಕ್ಷಣ ಇಲಾಖೆಯ ಮೇಲಾಧಿಕಾರಿಗಳ ಆದೇಶದಂತೆ ತಾಲೂಕು ಕ್ರಿಯಾಯೋಜನೆಯಂತೆ ತಾಲೂಕಿನ ಎಲ್ಲಾ ಪ್ರೌಢ ಶಾಲೆಗಳಲ್ಲಿ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಹೆಚ್ಚಿನ ಶ್ರಮವಹಿಸಿ ಕಲಿಸಲಾಗುತ್ತಿದೆ. ನಾಲ್ಕು ಮಾದರಿ ಪ್ರಶ್ನೆ ಪತ್ರಿಕೆಗಳನ್ನು ತಯಾರಿಸಿ ಮಕ್ಕಳಿಗೆ ಅಭ್ಯಾಸ ಮಾಡಿಸುವ ಮೂಲಕ ಯಾವುದೇ ಮಗು ಅನುತ್ತೀರ್ಣವಾಗದಂತೆ ಕ್ರಮವಹಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯ್ತಿ ಇಒ ಡಾ.ಪ್ರಮೋದ್, ಡಯಟ್ ಹಿರಿಯ ಉಪನ್ಯಾಸಕ ಪ್ರಸಾದ್, ತಾಲೂಕು ಅಕ್ಷರ ದಾಸೋಹ ನಿರ್ದೇಶಕ ಮಹೇಶ್ವರ ರೆಡ್ಡಿ, ನೋಡೆಲ್ ಅಧಿಕಾರಿ ನಾಗರಾಜು, ಶಿಕ್ಷಣ ಸಂಯೋಜಕ ಪುಟ್ಟಸ್ವಾಮಿ, ರಂಗಸ್ವಾಮಿ ಸೇರಿದಂತೆ ಪ್ರೌಢಶಾಲಾ ಶಿಕ್ಷಕರುಗಳು ಹಾಜರಿದ್ದರು.