ಅಸಂಘಟಿತ ವಲಯದ ಕಾರ್ಮಿಕರು, ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳಿಗೆ ವೃದ್ಧಾಪ್ಯದಲ್ಲಿ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಒದಗಿಸಲು ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆ ಹಾಗೂ ಎನ್.ಪಿ.ಎಸ್. ಟ್ರೇಡರ್ಸ್ ಎಂಬ ಪಿಂಚಣಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಇದರ ಲಾಭ ಪಡೆಯಲು ಎಲ್ಲಾ ವರ್ಗದ ಅಸಂಘಟಿತ ಕಾರ್ಮಿಕರು ಈ ಯೋಜನೆಗಳಡಿ ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಕರೆ ನೀಡಿದರು.

ಉಡುಪಿ: ಅಸಂಘಟಿತ ವಲಯದ ಕಾರ್ಮಿಕರು, ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳಿಗೆ ವೃದ್ಧಾಪ್ಯದಲ್ಲಿ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಒದಗಿಸಲು ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆ ಹಾಗೂ ಎನ್.ಪಿ.ಎಸ್. ಟ್ರೇಡರ್ಸ್ ಎಂಬ ಪಿಂಚಣಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಇದರ ಲಾಭ ಪಡೆಯಲು ಎಲ್ಲಾ ವರ್ಗದ ಅಸಂಘಟಿತ ಕಾರ್ಮಿಕರು ಈ ಯೋಜನೆಗಳಡಿ ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಕರೆ ನೀಡಿದರು.

ಅವರು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ರಾಷ್ಟ್ರೀಯ ಪಿಂಚಣಿ ಯೋಜನೆಗಳಡಿ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಲು ವಿಶೇಷ ಅಭಿಯಾನದ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಯೋಜನೆಗಳಡಿ ನೋಂದಾಯಿಸಲು ಜ. 15 ರಿಂದ ಮಾ. 15 ರ ವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ. ವಯಸ್ಸಿಗೆ ಅನುಗುಣವಾಗಿ ಮಾಸಿಕ 55 ರು. ಗಳಿಂದ 200 ರು. ವರೆಗೆ ವಂತಿಕೆ ಪಾವತಿಸಿದ್ದಲ್ಲಿ 60 ವರ್ಷದ ನಂತರ ತಿಂಗಳಿಗೆ 3000 ರು. ಪಿಂಚಣಿ ಸೌಲಭ್ಯ ಪಡೆಯಬಹುದಾಗಿದೆ ಎಂದರು.18 ರಿಂದ 40 ವರ್ಷದೊಳಗಿನ ಅಸಂಘಟಿತ ಕಾರ್ಮಿಕರು ತಮ್ಮ ಆಧಾರ್ ಕಾರ್ಡ್, ಆಧಾರ್‌ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ, ಬ್ಯಾಂಕ್ ಪಾಸ್ ಪುಸ್ತಕದೊಂದಿಗೆ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಣಿಯಾಗಿ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ ಎಂದರು.ಈ ಯೋಜನೆಯಡಿ ಜಿಲ್ಲೆಯಲ್ಲಿ 7275 ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಲು ಗುರಿ ನಿಗದಿಪಡಿಸಲಾಗಿದ್ದು, ನರೇಗಾ ಕಾರ್ಮಿಕರು, ಎಸ್.ಹೆಚ್.ಜಿ ಸದಸ್ಯರು, ಕೃಷಿ ಕಾರ್ಮಿಕರು, ಅಂಗನವಾಡಿ ಕಾರ್ಮಿಕರು, ಮಧ್ಯಾಹ್ನದ ಬಿಸಿ ಊಟದ ಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಬೀದಿ ಬದಿ ವ್ಯಾಪಾರಿಗಳು, ಗೃಹ ಕಾರ್ಮಿಕರು, ಮನೆ ಕೆಲಸದವರು, ಕೃಷಿ ಕಾರ್ಮಿಕರು, ಮೀನುಗಾರರು ಸೇರಿದಂತೆ ಮತ್ತಿತರ ಅಸಂಘಟಿತ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದರು.

ಚಂದಾದಾರರು 10 ವರ್ಷದೊಳಗೆ ಯೋಜನೆಯಿಂದ ನಿರ್ಗಮಿಸಿದ್ದಲ್ಲಿ, ಪಾವತಿಸಿದ ವಂತಿಕೆಯನ್ನು ಮಾತ್ರ ಉಳಿತಾಯ ಖಾತೆಗೆ ಬಡ್ಡಿಯೊಂದಿಗೆ ಹಿಂದಿರುಗಿಸಲಾಗುತ್ತದೆ. 10 ವರ್ಷಕ್ಕಿಂತ ಹೆಚ್ಚು ಅವಧಿಯ ನಂತರ ನಿರ್ಗಮಿಸಿದ್ದಲ್ಲಿ ಅವರು ಪಾವತಿಸಿದ ವಂತಿಕೆಯೊಂದಿಗೆ ಪಿಂಚಣಿ ಖಾತೆಗೆ ಜಮೆಯಾಗಿರುವ ಬಡ್ಡಿ ಅಥವಾ ಉಳಿತಾಯ ಖಾತೆಗೆ ಪಾವತಿಸಲಾಗುವ ಬಡ್ಡಿ ಇವುಗಳಲ್ಲಿ ಯಾವ ಮೊತ್ತವು ಹೆಚ್ಚಿರುತ್ತದೋ ಅದನ್ನು ಪಾವತಿಸಲಾಗುವುದು ಎಂದರು. ಸಭೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್, ಪೌರಾಯುಕ್ತ ಮಹಾಂತೇಶ್ ಹಂಗರಗಿ, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ. ನಾಯಕ್ ಮುಂತಾದವರಿದ್ದರು.