ಸಮಿತಿಗಳಿಗೆ ನೇಮಕಗೊಂಡಿರುವ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುವ ಮೂಲಕ ದಸರಾ ಮಹೋತ್ಸವದ ವೇಳೆ ಯಾವುದೇ ಲೋಪವಿಲ್ಲದೆ ಯಶಸ್ವಿಯಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಮಂಡ್ಯ

ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವವನ್ನು ಈ ಬಾರಿ ವೈವಿಧ್ಯಮಯ ಹಾಗೂ ವಿನೂತನ ಕಾರ್ಯಕ್ರಮಗಳೊಂದಿಗೆ ಜನಪರವಾಗಿ ಆಯೋಜಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷರೂ ಆದ ಶ್ರೀರಂಗಪಟ್ಟಣ ಶಾಸಕ ರಮೇಶ ಬಂಡಿಸಿದ್ದೇಗೌಡ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶ್ರೀರಂಗಪಟ್ಟಣ ದಸರಾ ಅಂಗವಾಗಿ ಜಿಲ್ಲಾಧಿಕಾರಿ ಡಾ.ಕುಮಾರ್ ಸೇರಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆಯಲ್ಲಿ ಶಾಸಕರು ಮಾತನಾಡಿ, ಈ ದಸರಾವನ್ನು ಈ ಬಾರಿ ಅರ್ಥಪೂರ್ಣವಾಗಿ ಆಚರಿಸಿ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಸ್ಥಳೀಯ ಕಲಾವಿದರು, ಯುವ ಪ್ರತಿಭೆಗಳಿಗೆ ಹೆಚ್ಚಿನ ಆದ್ಯತೆ ನೀಡಲು ಸಾಂಸ್ಕೃತಿಕ ಕಾರ್ಯಕ್ರಮಗಳು, ಯುವ ಸಂಭ್ರಮ ಆಚರಣೆ, ಕ್ರೀಡಾ ದಸರಾದಲ್ಲಿ ಗ್ರಾಮೀಣ ಕ್ರೀಡೆಗಳಿಗೆ ಆದ್ಯತೆ, ಶಾಲಾ ಮಕ್ಕಳಿಗಾಗಿ ಸಿನಿಮೋತ್ಸವ, ದಸರಾ ಯಶಸ್ಸು, ಸಿದ್ಧತೆಗಾಗಿ ವಿವಿಧ ಸಮಿತಿಗಳ ರಚನೆ, ಮಹಿಳೆಯರ ಕೌಶಲ್ಯ ಪ್ರದರ್ಶನಕ್ಕೆ ಅವಕಾಶ ಕಲ್ಪಿಸುವುದು ಸೇರಿ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.ಜನಪರ ಉತ್ಸವವಾಗಲಿ:

ದಸರಾವನ್ನು ಕೇವಲ ಉತ್ಸವದ ಆಚರಣೆಗೆ ಸೀಮಿತವಾಗದೆ ಎಲ್ಲ ವರ್ಗದ ಜನರು ಭಾಗವಹಿಸುವಂಥ ಜನಪರ ಮಹೋತ್ಸವವಾಗಬೇಕು. ಸಾರ್ವಜನಿಕರಿಗೆ ಹೊಸ ಅನುಭವ ನೀಡುವ ರೀತಿ ವೈವಿಧ್ಯಮಯ ಹಾಗೂ ವಿನೂತನ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಸೂಚಿಸಿದರು.

ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರು, ಯುವ ಪ್ರತಿಭೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ತಾಲೂಕು ಹಾಗೂ ಜಿಲ್ಲೆಯ ಪ್ರತಿಭಾವಂತ ಕಲಾವಿದರನ್ನು ಗುರುತಿಸಿ ಅವರ ಪ್ರತಿಭೆ ಪ್ರದರ್ಶಿಸಲು ಸೂಕ್ತ ವೇದಿಕೆ ಕಲ್ಪಿಸಬೇಕು. ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಅವಕಾಶ ನೀಡಿದರೆ ದಸರಾ ಮಹೋತ್ಸವಕ್ಕೆ ಮತ್ತಷ್ಟು ಮೆರುಗು ಬರಲಿದೆ ಎಂದು ಹೇಳಿದರು.

ಯುವ ಪ್ರತಿಭೆಗಳಿಗೆ ಪ್ರೋತ್ಸಾಹ:

ಕ್ರೀಡಾ ದಸರಾದಲ್ಲಿ ಗ್ರಾಮೀಣ ಪ್ರದೇಶಗಳ ಜನಪ್ರಿಯ ಸಾಂಪ್ರದಾಯಿಕ ಹಾಗೂ ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚಿನ ಒತ್ತು ನೀಡಬೇಕು. ಗ್ರಾಮೀಣ ಭಾಗದ ಪ್ರತಿಭಾವಂತ ಯುವಕರು ಹಾಗೂ ಕ್ರೀಡಾಪಟುಗಳು ಭಾಗವಹಿಸುವಂತೆ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಸೂಚಿಸಿದರು.

ತಾಲೂಕಿನ ಎಲ್ಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ವೇದಿಕೆ ಕಲ್ಪಿಸಬೇಕು. ವಿವಿಧ ಸಾಂಸ್ಕೃತಿಕ ಹಾಗೂ ಪ್ರತಿಭಾ ಪ್ರದರ್ಶನ ಆಯೋಜಿಸಿ ಯುವಜನರಲ್ಲಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವುದು, ಮಕ್ಕಳಿಗೆ ಉತ್ತಮ ಹಾಗೂ ಸಂದೇಶಾತ್ಮಕ ಚಲನಚಿತ್ರಗಳನ್ನು ವೀಕ್ಷಿಸಲು ಸಿನಿಮೋತ್ಸವ ಆಯೋಜನೆ, ಈ ಬಗ್ಗೆ ಶಾಲಾ ಮಕ್ಕಳಿಗೆ ಚಲನಚಿತ್ರ ಪ್ರದರ್ಶನಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೈಸೂರು ದಸರಾ ಮಾದರಿಯಲ್ಲಿ ಈ ಬಾರಿ ಶ್ರೀರಂಗಪಟ್ಟಣದಲ್ಲಿಯೂ ಯುವ ಸಂಭ್ರಮ ಆಯೋಜಿಸಬೇಕು. ದಸರಾ ಆರಂಭಕ್ಕೂ ಮುನ್ನ ಮೂರು ದಿನಗಳ ಕಾಲ ಯುವ ಸಂಭ್ರಮ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ತಾಲೂಕಿನ ಯುವ ಪ್ರತಿಭೆಗಳಿಗೆ ತಮ್ಮ ಕಲೆ ಹಾಗೂ ಸಾಮರ್ಥ್ಯ ಪ್ರದರ್ಶಿಸಲು ಇದು ಉತ್ತಮ ವೇದಿಕೆಯಾಗಬೇಕು ಎಂದು ಶಾಸಕರು ಹೇಳಿದರು.

ಸಭೆಯಲ್ಲಿ ಡೀಸಿ ಡಾ.ಕುಮಾರ್ ಮಾತನಾಡಿ, ಶ್ರೀರಂಗಪಟ್ಟಣ ದಸರಾ ಯಶಸ್ವಿಗಾಗಿ 12 ಸಮಿತಿಗಳನ್ನು ರಚಿಸಲಾಗಿದೆ. ಪ್ರತಿ ಸಮಿತಿಗೆ ವಹಿಸಿರುವ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ದಸರಾ ಮಹೋತ್ಸವದ ಸಿದ್ಧತೆ ಹಾಗೂ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವೇದಿಕೆ, ಸಾಂಸ್ಕೃತಿಕ, ಮೆರವಣಿಗೆ, ವಸ್ತು ಪ್ರದರ್ಶನ, ಸ್ವಚ್ಛತೆ ಮತ್ತು ನೈರ್ಮಲ್ಯ, ಆಹಾರ ಮೇಳ, ನಗರ ಅಲಂಕಾರ, ಕ್ರೀಡಾ ಮತ್ತು ಯೋಗ ದಸರಾ, ಯುವ ಸಂಭ್ರಮ ಹಾಗೂ ಮಕ್ಕಳ ದಸರಾ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ ಎಂದು ಹೇಳಿದರು.

ಸಮಿತಿಗಳಿಗೆ ನೇಮಕಗೊಂಡಿರುವ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುವ ಮೂಲಕ ದಸರಾ ಮಹೋತ್ಸವದ ವೇಳೆ ಯಾವುದೇ ಲೋಪವಿಲ್ಲದೆ ಯಶಸ್ವಿಯಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಜಿಪಂ ಸಿಇಒ ಕೆ.ಆರ್.ನಂದಿನಿ ಮಾತನಾಡಿ, ಶ್ರೀರಂಗಪಟ್ಟಣ ದಸರಾದಲ್ಲಿ ಮಹಿಳೆಯರ ಪ್ರತಿಭೆ, ಕೌಶಲ್ಯ ಹಾಗೂ ಸಾಧನೆಗಳನ್ನು ಅನಾವರಣಗೊಳಿಸಲು ವೈವಿಧ್ಯಮಯ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ತಿಳಿಸಿದರು.

ದಸರಾಗೆ ಆಗಮಿಸುವ ಸಾರ್ವಜನಿಕರನ್ನು ಆಕರ್ಷಿಸುವ ನಿಟ್ಟಿನಲ್ಲಿ ಗ್ಯಾಲರಿ ಹಾಗೂ ವಿವಿಧ ಉತ್ಪನ್ನಗಳ ಮಳಿಗೆಗಳಿಗೆ ಹೆಚ್ಚಿನ ಒತ್ತು ನೀಡಬೇಕು. ಮಳಿಗೆಗಳಲ್ಲಿ ಸ್ಥಳೀಯ ಕಲೆ, ಕರಕುಶಲ ವಸ್ತುಗಳು ಹಾಗೂ ಮಹಿಳಾ ಸ್ವಸಹಾಯ ಸಂಘಗಳು ತಯಾರಿಸುವ ಉತ್ಪನ್ನಗಳಿಗೆ ಆದ್ಯತೆ ನೀಡುವ ಮೂಲಕ ಸ್ಥಳೀಯ ಪ್ರತಿಭೆ ಹಾಗೂ ಉದ್ಯಮಶೀಲತೆಯನ್ನು ಉತ್ತೇಜಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ಸೇರಿ ಜಿಲ್ಲೆ ಮತ್ತು ಶ್ರೀರಂಗಪಟ್ಟಣ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.