ಸಾರಾಂಶ
ಹಾನಗಲ್ಲ: ಹಾನಗಲ್ಲಿನಲ್ಲಿ ಸರ್ಕಾರಿ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಪ್ರೌಢಶಾಲೆ ಆರಂಭಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಶಾಸಕ ಶ್ರೀನಿವಾಸ ಮಾನೆ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.ಪಟ್ಟಣದ ತಮ್ಮ ಜನಸಂಪರ್ಕ ಕಚೇರಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಜೊತೆಗೆ ಸಭೆ ನಡೆಸಿದ ಅವರು, ತಾಲೂಕು ಕೇಂದ್ರ ಹಾನಗಲ್‌ನಲ್ಲಿ ಸರ್ಕಾರಿ ಪ್ರೌಢಶಾಲೆ ಆರಂಭಿಸಬೇಕು ಎನ್ನುವ ದಶಕಗಳ ಕೂಗಿಗೆ ಸರ್ಕಾರ ಸ್ಪಂದಿಸಿದೆ. ಅಕ್ಕಿಆಲೂರಿನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಸಹ ಶಿಕ್ಷಣ ಇಲಾಖೆ ಉನ್ನತೀಕರಿಸಿದ್ದು, ಈ ವರ್ಷದಿಂದಲೇ ೮ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಿ ಎಂದು ಸೂಚಿಸಿದರು. ತಾಲೂಕಿನ ಕೆಲವು ಸರ್ಕಾರಿ ಶಾಲೆಗಳಲ್ಲಿ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರ ಮಧ್ಯೆ ಸಮನ್ವಯದ ಕೊರತೆ ಎದ್ದು ಕಾಣುತ್ತಿದೆ. ಈ ಕುರಿತು ಎಸ್‌ಡಿಎಂಸಿ ಸದಸ್ಯರು ಹಾಗೂ ಗ್ರಾಮಸ್ಥರು ದೂರು ನೀಡಿದ್ದು, ಸಮಸ್ಯೆಗಳಿದ್ದ ಶಾಲೆಗಳಿಗೆ ಸ್ವತಃ ಭೇಟಿ ನೀಡಬೇಕು. ಸಮನ್ವಯದ ಕೊರತೆಯಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ತೊಂದರೆ ಉಂಟಾಗಬಾರದು. ಗುಣಮಟ್ಟದ ಶಿಕ್ಷಣದ ಮೇಲೆ ಸಹ ಯಾವ ರೀತಿಯೂ ಪ್ರಭಾವ ಬೀರದಂತೆ ಎಚ್ಚರಿಕೆ ವಹಿಸಿ ಎಂದು ಸೂಚನೆ ನೀಡಿದರು. ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘ ರಚನೆಗೆ ಕಾಳಜಿ ವಹಿಸಬೇಕು. ಶಿಕ್ಷಣದ ಸಾರ್ವತ್ರಿಕರಣದಲ್ಲಿ ಸಮುದಾಯದ ಸಹಭಾಗಿತ್ವ ಪ್ರಮುಖವಾಗಿದ್ದು, ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಗ್ರಾಮಸ್ಥರು, ಹಳೆಯ ವಿದ್ಯಾರ್ಥಿಗಳ ಸಹಕಾರ ಪಡೆದುಕೊಳ್ಳಿ. ಸರ್ಕಾರದಿಂದಲೂ ಮೂಲಭೂತ ಸೌಲಭ್ಯ ಕಲ್ಪಿಸಲು ಗಮನ ಹರಿಸುವ ಭರವಸೆ ನೀಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸುರೇಶ ಹುಗ್ಗಿ, ಬಿಇಒ ವಿ.ವಿ.ಸಾಲಿಮಠ ಇದ್ದರು.ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರಕುವಂತೆ ಶಿಕ್ಷಕರು ಕಾಳಜಿ ವಹಿಸಬೇಕಿದೆ. ಸರ್ಕಾರದ ಅನುದಾನದಡಿ ಸೌಲಭ್ಯ ಕಲ್ಪಿಸಲು ಗಮನ ನೀಡಲಾಗುವುದು. ಸಮುದಾಯದ ಸಹಭಾಗಿತ್ವ ಪಡೆಯುವ ನಿಟ್ಟಿನಲ್ಲಿಯೂ ಸಹ ಕಾಳಜಿ ವಹಿಸಬೇಕಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.