ಹುಬ್ಬಳ್ಳಿ:

ಮುಂಬರುವ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಿಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು. ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಬಲಪಡಿಸುವ ಜತೆಗೆ ಜನರೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಹರೀಶ್ ದ್ವಿವೇದಿ ಪಕ್ಷದ ಮುಖಂಡರಿಗೆ ಸೂಚಿಸಿದರು.

ಅವರು ಇಲ್ಲಿನ ಅರವಿಂದ ನಗರದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ವಿಭಾಗ ಮಟ್ಟದ ಸಂಘಟನಾತ್ಮಕ ಸಭೆಯಲ್ಲಿ ಪಕ್ಷದ ಮುಖಂಡರಿಗೆ ಸೂಚಿಸಿದ ಅವರು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಗ್ರಾಮಾಂತರ ಪ್ರದೇಶಗಳಲ್ಲಿ ವಾರಕ್ಕೆ ಕನಿಷ್ಠ ಎರಡು ಬಾರಿ ಪ್ರವಾಸ ಕೈಗೊಂಡು, ಜನರೊಂದಿಗೆ ಸಂಪರ್ಕ ಬೆಳೆಸಬೇಕು. ಪಕ್ಷದ ಸಂಘಟನೆಯನ್ನು ಬೂತ್ ಮಟ್ಟದಿಂದ ಬಲಪಡಿಸುವ ಮೂಲಕ ಚುನಾವಣೆಗೆ ಸಜ್ಜಾಗಬೇಕು ಎಂದು ನಿರ್ದೇಶನ ನೀಡಿದರು.

ಹುಬ್ಬಳ್ಳಿ-ಧಾರವಾಡ ನಗರ, ಗ್ರಾಮಾಂತರ, ಗದಗ ಹಾಗೂ ಹಾವೇರಿ ಜಿಲ್ಲೆಗಳ ಸಂಘಟನಾತ್ಮಕ ಸ್ಥಿತಿಗತಿ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಪಕ್ಷದ ಕಾರ್ಯಚಟುವಟಿಕೆ, ಸಂಘಟನೆಯ ಬಲವರ್ಧನೆ ಹಾಗೂ ಮುಂಬರುವ ಚುನಾವಣೆಗಳ ಸಿದ್ಧತೆ ಕುರಿತು ಮುಖಂಡರಿಂದ ಮಾಹಿತಿ ಪಡೆಯಲಾಯಿತು.

ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ರಾಜ್ಯಸಭಾ ಸದಸ್ಯ ಹಾಗೂ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಎಂ. ನಾಗರಾಜ, ಮಾಜಿ ಸಚಿವರಾದ ಮುರುಗೇಶ ನಿರಾಣಿ, ಸಿ.ಸಿ. ಪಾಟೀಲ, ಶಂಕರ ಪಾಟೀಲ ಮುನೇನಕೊಪ್ಪ, ಶಾಸಕ ಮಹೇಶ ಟೆಂಗಿನಕಾಯಿ, ವಿಪ ಸದಸ್ಯರಾದ ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ, ಲಿಂಗರಾಜ ಪಾಟೀಲ, ಮಹಾನಗರ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಗ್ರಾಮೀಣ ಘಟಕದ ಜಿಲ್ಲಾಧ್ಯಕ್ಷ ನಿಂಗಪ್ಪ ಸುತಗಟ್ಟಿ, ವಿಭಾಗ ಪ್ರಮುಖ ಜಯತೀರ್ಥ ಕಟ್ಟಿ, ಗದಗ ಜಿಲ್ಲಾಧ್ಯಕ್ಷ ರಾಜು ಕುರಡಗಿ, ವಿರೂಪಾಕ್ಷಪ್ಪ ಬಳ್ಳಾರಿ, ಮೇಯರ್‌ ದುರ್ಗಮ್ಮ ಬಿಜವಾಡ, ಮಾಜಿ ಶಾಸಕ ಅಶೋಕ ಕಾಟವೆ, ಮುಖಂಡರಾದ ಅನಿಲ ಮೆಣಸಿನಕಾಯಿ, ಶಿವು ಮೆಣಸಿನಕಾಯಿ ಹಾಗೂ ಈರಣ್ಣ ಜಡಿ ಸೇರಿದಂತೆ ಹಲವರಿದ್ದರು.