ಮಕ್ಕಳು ಕಲೆಯಲ್ಲಿ ಅರಳಿ, ತಮ್ಮ ಪ್ರತಿಭೆಯ ಮೂಲಕ ಕಲಾ ಜಗತ್ತಿನಲ್ಲಿ ಗುರುತಿಸಿಕೊಳ್ಳುವ ಆಶಯದೊಂದಿಗೆ ಮುನ್ನಡೆಯಬೇಕು ಎಂದು ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಗಂಗಾಧರ ಸಂಬಣ್ಣಿ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಮಕ್ಕಳು ಕಲೆಯಲ್ಲಿ ಅರಳಿ, ತಮ್ಮ ಪ್ರತಿಭೆಯ ಮೂಲಕ ಕಲಾ ಜಗತ್ತಿನಲ್ಲಿ ಗುರುತಿಸಿಕೊಳ್ಳುವ ಆಶಯದೊಂದಿಗೆ ಮುನ್ನಡೆಯಬೇಕು ಎಂದು ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಗಂಗಾಧರ ಸಂಬಣ್ಣಿ ಹೇಳಿದರು.

ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸಿದ್ದ ಜಿಲ್ಲಾಮಟ್ಟದ ಕಲಾಪ್ರತಿಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿನ ಸೂಪ್ತ ಪ್ರತಿಭೆಯನ್ನು ಗುರುತಿಸಿ, ಪೋಷಿಸುವುದರೊಂದಿಗೆ ಅವರಿಗೆ ಸೂಕ್ತ ಪ್ರೋತ್ಸಾಹ ಹಾಗೂ ಅವಕಾಶಗಳನ್ನು ಕಲ್ಪಿಸಬೇಕು ಎಂದರು.ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಸಂತ ಹೊನಮೊಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳ ಸೃಜನಾತ್ಮಕ ಕಲೆಗೆ ಪೂರಕಾವಾಗಿ ಇಂತಹ ಕಾರ್ಯಕ್ರಮಗಳು ಪ್ರೇರಣೆ ಒದಗಿಸುತ್ತವೆ ಎಂದು ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ ಮಾತನಾಡಿ, ವಿಜಯಪುರ ಜಿಲ್ಲೆ ಸಾಂಸ್ಕೃತಿಕ ವೈವಿಧ್ಯತೆಯಿಂದ ಕೂಡಿದ್ದು, ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆಯ ಶ್ರೀಮಂತಿಕೆಯನ್ನು ಇಂದಿಗೂ ಜೀವಂತವಾಗಿರಿಸಿಕೊಂಡಿದೆ. ಇಂತಹ ಕಲಾಪ್ರತಿಭೋತ್ಸವಗಳು ಮಕ್ಕಳಲ್ಲಿರುವ ಕಲಾಸಕ್ತಿಯನ್ನು ಬೆಳೆಸುವುದರ ಜತೆಗೆ ಅವರ ಪ್ರತಿಭೆ ಅನಾವರಣಗೊಳಿಸಲು ಉತ್ತಮ ವೇದಿಕೆಯಾಗಿವೆ ಎಂದರು.ಸ್ಪರ್ಧೆಗಳಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ. ವಿದ್ಯಾರ್ಥಿಗಳು ಯಾವುದೇ ಸ್ಪರ್ಧೆಯಿಂದ ಹಿಂದೆ ಸರಿಯದೆ ಆತ್ಮವಿಶ್ವಾಸದಿಂದ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು. ಪ್ರತಿಭಾವಂತರನ್ನು ಗುರುತಿಸಿ ಅವರಿಗೆ ಸೂಕ್ತ ವೇದಿಕೆ ಕಲ್ಪಿಸುವ ಮೂಲಕ ಪ್ರೋತ್ಸಾಹಿಸುವ ಕಾರ್ಯವನ್ನು ಇಲಾಖೆಗಳು ಮಾಡುತ್ತಿವೆ. ಜಿಲ್ಲೆಯಲ್ಲಿ ಸಾಕಷ್ಟು ಪ್ರತಿಭಾವಂತರಿದ್ದು, ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಇದರಿಂದ ಪ್ರತಿಭೆಯನ್ನು ಅನಾವರಣಗೊಳಿಸುವುದರೊಂದಿಗೆ ವಲಯ ಹಾಗೂ ರಾಜ್ಯಮಟ್ಟದಲ್ಲಿಯೂ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.ಕಲಾಪ್ರತಿಭೋತ್ಸವದಲ್ಲಿ ಬಾಲಪ್ರತಿಭೆ-ಕಿಶೋರ ಪ್ರತಿಭೆ ಹಾಗೂ ಯುವಪ್ರತಿಭೆ ಎಂಬ 3 ವಿಭಾಗಗಳಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಶಾಸ್ತ್ರೀಯ ನೃತ್ಯ, ಸುಗಮ ಸಂಗೀತ, ಜನಪದ ಗೀತೆ, ಹಿಂದೂಸ್ಥಾನಿ ಮತ್ತು ಕರ್ನಾಟಕ ವಾದ್ಯ ಸಂಗೀತ, ಹಿಂದೂಸ್ಥಾನಿ ಹಾಗೂ ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ಚಿತ್ರಕಲೆ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಪ್ರದರ್ಶಿಸಿದರು. ಯುವಪ್ರತಿಭೆ ವಿಭಾಗದ ಸಮೂಹ ಸ್ಪರ್ಧೆಯಲ್ಲಿ ಡೊಳ್ಳು ಕುಣಿತ ಕಲಾವಿದರು ನೀಡಿದ ಆಕರ್ಷಕ ಪ್ರದರ್ಶನ ಗಮನ ಸೆಳೆಯಿತು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಜಾನಪದ ಕಲಾವಿದ ರಾಮಚಂದ್ರ ಜೋಶಿ ಹಾಗೂ ಕಲಾಪ್ರತಿಭೋತ್ಸವದಲ್ಲಿ ರಾಜ್ಯಮಟ್ಟದ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಕಾಶೀನಾಥ ಭೋಸ್ಲೆ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ಕಲಾವಿದ ಪಿ.ಎಸ್.ಕಡೆಮನಿ, ಎಲ್.ಬಿ.ಶೇಖ, ಸುರೇಶ ಜೋಶಿ, ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಡಾ.ಎಂ.ಎ.ಪಡಶೆಟ್ಟಿ, ಕರ್ನಾಟಕ ಲಲಿತಕಲಾ ಅಕಾಡೆಮಿ ಸದಸ್ಯೆ ರಾಜೇಶ್ವರಿ ಮೋಪಗಾರ, ಶಹನಾಯ್ ಕಲಾವಿದ ಗಿರಿಮಲ್ಲಪ್ಪ ಭಜಂತ್ರಿ, ಪ್ರಾಧ್ಯಾಪಕ ಸಿ.ಎಸ್.ಪೂಜಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಸಿಬ್ಬಂದಿ, ತೀರ್ಪುಗಾರರು, ಕಲಾವಿದರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.