ದೊಡ್ಡಬಳ್ಳಾಪುರ: ಕನ್ನಡ ಸಂಸ್ಕೃತಿ, ಚರಿತ್ರೆ, ಗತ ವೈಭವ ಸಾರುವಂತಹ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ನವೆಂಬರ್ 01 ರಂದು ದೇವನಹಳ್ಳಿ ಟೌನ್ ನ ಸರ್ಕಾರಿ ಪದವಿ ಪೂರ್ವ ಕಾಲೇಜು ಆಟದ ಮೈದಾನದಲ್ಲಿ ಏರ್ಪಡಿಸಲಾಗಿದ್ದು ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಸೂಚಿಸಿದರು
ದೊಡ್ಡಬಳ್ಳಾಪುರ: ಕನ್ನಡ ಸಂಸ್ಕೃತಿ, ಚರಿತ್ರೆ, ಗತ ವೈಭವ ಸಾರುವಂತಹ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ನವೆಂಬರ್ 01 ರಂದು ದೇವನಹಳ್ಳಿ ಟೌನ್ ನ ಸರ್ಕಾರಿ ಪದವಿ ಪೂರ್ವ ಕಾಲೇಜು ಆಟದ ಮೈದಾನದಲ್ಲಿ ಏರ್ಪಡಿಸಲಾಗಿದ್ದು ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ 71ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನವೆಂಬರ್ 1ರಂದು ಜಿಲ್ಲಾಡಳಿತ ಭವನದ ಆವರಣದಲ್ಲಿ ಬೆಳಿಗ್ಗೆ 7:30 ಗಂಟೆಗೆ ಧ್ವಜಾರೋಹಣ, ತಾಯಿ ಭುವನೇಶ್ವರಿ ದೇವಿಗೆ ಪುಷ್ಪ ನಮನ ನೆರವೇರಿಸಲಾಗುವುದು. ನಂತರ ಬೆಳಿಗ್ಗೆ 9 ಗಂಟೆಗೆ ದೇವನಹಳ್ಳಿ ಟೌನ್ ಸರ್ಕಾರಿ ಪದವಿ ಪೂರ್ವ ಕಾಲೇಜು ಆಟದ ಮೈದಾನದಲ್ಲಿ ಜಿಲ್ಲಾಮಟ್ಟದ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ ಜನಪ್ರತಿನಿಧಿಗಳಿಗೆ ತಲುಪಿಸಿ, ವೇದಿಕೆ ಮತ್ತು ಧ್ವಜ ಕಟ್ಟೆ ಅಲಂಕಾರ, ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳಿಗಾಗಿ ಮಕ್ಕಳಿಗೆ ಸೂಕ್ತ ಪೂರ್ವ ತರಬೇತಿ ನೀಡಿ, ಅರ್ಥಪೂರ್ಣವಾದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕ್ರೀಡಾಂಗಣದ ಸ್ವಚ್ಛತೆ, ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಎರಡು ದಿನ ಮುಂಚಿತವಾಗಿ ರಿಹರ್ಸಲ್ ಮಾಡಲಿದ್ದು ಅವರಿಗೆ ಕುಡಿಯುವ ನೀರು, ಉಪಹಾರ ವ್ಯವಸ್ಥೆ ಮಾಡಬೇಕು. ಕಾರ್ಯಕ್ರಮದ ದಿನದಂದು ಎಲ್ಲರಿಗೂ ಕುಡಿಯುವ ನೀರು ಲಘು ಉಪಹಾರ ವ್ಯವಸ್ಥೆ ಮಾಡಬೇಕು. ಕ್ರೀಡಾಂಗಣದಲ್ಲಿ ಆರೋಗ್ಯ ಇಲಾಖೆಯಿಂದ ಅಗತ್ಯ ಸಿಬ್ಬಂದಿಯೊಂದಿಗೆ ಅಂಬ್ಯುಲೆನ್ಸ್, ಅಗ್ನಿಶಾಮಕ ಇಲಾಖೆಯಿಂದ ಅಗ್ನಿಶಾಮಕ ವಾಹನ ಒದಗಿಸಬೇಕು, ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಪ್ಲಾಸ್ಟಿಕ್ ವಸ್ತುಗಳನ್ನು ಬಳಕೆ ಮಾಡಬಾರದು. ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಿ, ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಹೇಳಿದರು.ಸಭೆಯಲ್ಲಿ ಆಹಾರ ಇಲಾಖೆ ಉಪನಿರ್ದೇಶಕ ಪ್ರಕಾಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕಲ್ಪನ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಗೀತಾ, ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
15ಕೆಡಿಬಿಪಿ3- ಬೆಂ.ಗ್ರಾ ಜಿಲ್ಲಾಡಳಿತ ಭವನದಲ್ಲಿ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ ನಡೆಯಿತು.