ಕನ್ನಡಪ್ರಭ ವಾರ್ತೆ ಮದ್ದೂರು

ತಾಲೂಕಿನ ಗೆಜ್ಜಲಗೆರೆ ಗ್ರಾಪಂ ಅನ್ನು ನಗರಸಭೆ ವ್ಯಾಪ್ತಿಗೆ ಸೇರ್ಪಡೆ ಬಗ್ಗೆ ಮುಂದಿನ ದಿನಗಳಲ್ಲಿ ನ್ಯಾಯಾಲಯ ನೀಡುವ ತೀರ್ಪಿಗೆ ಬದ್ಧವಾಗಿರುವುದಾಗಿ ಶಾಸಕ ಕೆ.ಎಂ.ಉದಯ್ ಭರವಸೆ ನೀಡಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಸಂಜೆ ಗೆಜ್ಜಲಗೆರೆ ಗ್ರಾಪಂ ಹೋರಾಟ ಸಮಿತಿ ಮುಖಂಡರೊಂದಿಗೆ ಸಭೆ ನಡೆಸಿದ ಶಾಸಕರು, ಗ್ರಾಪಂ ಅನ್ನು ನಗರಸಭೆ ವ್ಯಾಪ್ತಿಗೆ ಸೇರ್ಪಡೆ ಮಾಡುವುದಕ್ಕೆ ಗ್ರಾಪಂ ಚುನಾಯಿತ ಪ್ರತಿನಿಧಿಗಳೇ ಸಭೆ ನಡೆಸಿ ನಿರ್ಣಯ ಕೈಗೊಂಡು ಅನುಮೋದನೆ ನೀಡಿದ್ದಾರೆ. ಇದರ ಅನುಗುಣವಾಗಿ ಸೇರ್ಪಡೆ ಮಾಡಲಾಗಿದೆ ಎಂದು ಹೋರಾಟಗಾರರಿಗೆ ಮನವರಿಕೆ ಮಾಡಿಕೊಟ್ಟರು.

ವಿವಾದ ಹೈಕೋರ್ಟ್ ನಲ್ಲಿ ಪ್ರಕರಣ ದಾಖಲಾಗಿ ವಿಚಾರಣೆ ಹಂತದಲ್ಲಿದೆ. ಗ್ರಾಪಂ ನಗರಸಭೆಗೆ ಸೇರ್ಪಡೆಯಾದರು ಅಥವಾ ಗ್ರಾಮ ಪಂಚಾಯ್ತಿಯಾಗಿ ಉಳಿದರು ಸಹ ಗ್ರಾಮವನ್ನು ಅಭಿವೃದ್ಧಿ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು. ಈ ವಿಚಾರದಲ್ಲಿ ನಾನು ಸರ್ಕಾರದ ಮಟ್ಟದಲ್ಲಿ ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ತಮ್ಮಗಳ ಸಮ್ಮುಖದಲ್ಲಿ ಸಭೆ ನಡೆಸಿ ಸಾಧಕ ಬಾಧಕಗಳ ಕುರಿತು ಚರ್ಚೆ ನಡೆಸಲಾಗುವುದು. ಗ್ರಾಮಸ್ಥರು ಯಾವುದೇ ರೀತಿ ಆತಂಕಕ್ಕೆ ಒಳಗಾಗದೆ ಚಳವಳಿಯನ್ನು ಶಾಂತ ರೀತಿಯಲ್ಲಿ ನಡೆಸಿಕೊಂಡು ಹೋಗುವಂತೆ ಮನವಿ ಮಾಡಿದರು.

ಸಭೆಯಲ್ಲಿ ಮಾತನಾಡಿದ ರೈತಪರ ಹೋರಾಟಗಾರ್ತಿ ಸುನಂದಜಯರಾಂ, ಗೆಜ್ಜಲಗೆರೆ ಗ್ರಾಮವನ್ನು ಮದ್ದೂರು ನಗರಸಭೆ ವ್ಯಾಪ್ತಿಗೆ ಸೇರ್ಪಡೆ ಮಾಡಿರುವುದನ್ನು ವಿರೋಧಿಸಿ ನಾವುಗಳು ಕಳೆದ 146 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದೇವೆ. ಆದರೂ ಸಹ ಸರ್ಕಾರ ಅಥವಾ ತಮ್ಮಿಂದ ಸ್ಪಷ್ಟ ಉತ್ತರ ಸಿಗದ ಕಾರಣ ಹೋರಾಟ ನಡೆಸುವುದು ಅನಿವಾರ್ಯವಾಗಿದೆ. ಈ ಬಗ್ಗೆ ನಮಗೆ ಉತ್ತರ ಸಿಗುವವರೆಗೆ ಚಳವಳಿಯನ್ನು ಶಾಂತ ರೀತಿಯಲ್ಲಿ ನಡೆಸಿಕೊಂಡು ಹೋಗುತ್ತೇವೆ ತಿಳಿಸಿದರು.


ಸಭೆಯಲ್ಲಿ ಹೋರಾಟ ಸಮಿತಿಯ ಮುಖಂಡರಾದ ಜಿ.ಎ.ಶಂಕರ್, ಲಿಂಗಪ್ಪಾಜಿ, ಜಿ.ಟಿ.ಚಂದ್ರಶೇಖರ್, ಲೋಕೇಶ್, ವಿನೋದ್ ಬಾಬು, ಡಿವೈಎಸ್ಪಿ ಯಶವಂತ್ ಕುಮಾರ್ ಇದ್ದರು.