ಮಹದೇಶ್ವರನ ಸನ್ನಿಧಿಯಲ್ಲಿ ಗಡಿನಾಡು ಕನ್ನಡ ಉತ್ಸವ

| Published : Feb 11 2024, 01:45 AM IST

ಸಾರಾಂಶ

ಕನ್ನಡ ಭಾಷೆ, ಪರಂಪರೆ, ಸಂಸ್ಕೃತಿ ಚಟುವಟಿಕೆಗಳಿಗೆ ನಿರಂತರ ಉತ್ತೇಜನ ನೀಡಲಾಗುತ್ತಿದೆ ಎಂದು ಪಶು ಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ತಿಳಿಸಿದರು

ಕನ್ನಡಪ್ರಭ ವಾರ್ತೆ ಹನೂರು ಕನ್ನಡ ಭಾಷೆ, ಪರಂಪರೆ, ಸಂಸ್ಕೃತಿ ಚಟುವಟಿಕೆಗಳಿಗೆ ನಿರಂತರ ಉತ್ತೇಜನ ನೀಡಲಾಗುತ್ತಿದೆ ಎಂದು ಪಶು ಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ತಿಳಿಸಿದರು. ಮಲೆ ಮಹದೇಶ್ವರ ಬೆಟ್ಟದ ಶ್ರೀ ಮಹದೇಶ್ವರ ಬಯಲು ರಂಗಮಂದಿರಲ್ಲಿಂದು ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ಹಾಗೂ ಜಿಲ್ಲಾ ಶಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆದ ’ಗಡಿನಾಡು ಕನ್ನಡ ಉತ್ಸವ’ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕನ್ನಡ ನಾಡು-ನುಡಿಗೆ ಸದಾ ಪ್ರೋತ್ಸಾಹ ನೀಡಲಾಗುತ್ತಿದೆ. ಗಡಿಯಲ್ಲಿ ಕನ್ನಡ ಬೆಳಸುವ ಕಾರ್ಯಗಳಿಗೆ ಗಡಿನಾಡು ಕನ್ನಡ ಉತ್ಸವದಂತಹ ಕಾರ್ಯಕ್ರಮಗಳು ಪೂರಕವಾಗಿವೆ. ನಮ್ಮ ಜಿಲ್ಲೆಯ ಮಲೆ ಮಹದೇಶ್ವರನ ಸನ್ನಿಧಿಯಲ್ಲಿ ಇಂತಹ ಕಾರ್ಯಕ್ರಮ ಆಯೋಜನೆಯಾಗಿರುವುದು ಸಂತೋಷ ತಂದಿದೆ ಎಂದರು. ರಾಜ್ಯ ಸರ್ಕಾರಿ ನೌಕರರ ಸಂಘವು ಕನ್ನಡ ಉತ್ಸವದಂತಹ ಕಾರ್ಯಗಳಿಗೆ ನೆರವಾಗುತ್ತಿರುವುದು ಶ್ಲಾಘನೀಯವಾಗಿದೆ. ಜಿಲ್ಲೆಯ ಕಾಡಂಚಿನ ಪ್ರದೇಶದ ಇಂಡಿಗನತ್ತ ಶಾಲೆಯನ್ನು ದತ್ತು ಪಡೆದು ಹಲವು ಸಹಾಯಕ ಕೆಲಸಗಳನ್ನು ಮಾಡಿರುವುದು ಮಾದರಿಯಾಗಿದೆ. ಇಂತಹ ಸಮಾಜಮುಖಿ ಕೆಲಸಗಳಿಂದ ಒಳ್ಳೆಯದಾಗಲಿದೆ ಎಂದು ತಿಳಿಸಿದರು.ಶಾಸಕ ಎ.ಆರ್ ಕೃಷ್ಣಮೂರ್ತಿ ಮಾತನಾಡಿ ಚಾಮರಾಜನಗರ ಜಿಲ್ಲೆ ಕಲೆಗಳ ತವರೂರು. ಜನಪದ ಕಲಾವಿದರು ಪ್ರತಿ ಊರಿನಲ್ಲೂ ಇದ್ದಾರೆ. ಮಲೆ ಮಹದೇಶ್ವರ, ಮಂಟೇಸ್ವಾಮಿ, ಸಿದ್ದಾಪ್ಪಾಜಿಯ ಸ್ಮರಣೆ ಹಾಡುಗಳನ್ನು ಹಾಡುವ ಕಲಾವಿದರು ಇಲ್ಲಿದ್ದಾರೆ. ನೆಲ, ಜಲ, ಭಾಷೆ ವಿಚಾರಕ್ಕೆ ದಕ್ಕೆಯಾದಾಗ ಇಡೀ ರಾಜ್ಯದಲ್ಲೆ ನಮ್ಮ ಜಿಲ್ಲೆಯ ಕನ್ನಡಪರ ಸಂಘಟನೆಗಳು ಮೊದಲು ಧ್ವನಿ ಎತ್ತುವ ಮೂಲಕ ಅಭಿಮಾನ ಮೂಡಿಸುತ್ತಿದ್ದಾರೆ ಎಂದರು. ಡೀಸಿ ಶಿಲ್ಪಾನಾಗ್ ಮಾತನಾಡಿ ಚಾಮರಾಜನಗರ ಜಿಲ್ಲೆಯಲ್ಲಿ ಕನ್ನಡ ನಾಡು ನುಡಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಮಾಡಿಕೊಂಡು ಬರುತ್ತಿದ್ದೇವೆ. ಕರ್ನಾಟಕ ಸುವರ್ಣ ಸಂಭ್ರಮ, ಕನ್ನಡ ರಾಜ್ಯೋತ್ಸವದಂತಹ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗಿದೆ. ಗಡಿಭಾಗವಾದ ನಮ್ಮ ಜಿಲ್ಲೆಯಲ್ಲೂ ಗಡಿನಾಡು ಕನ್ನಡ ಉತ್ಸವ ಏರ್ಪಡಿಸಲು ಅವಕಾಶ ಕಲ್ಪಿಸಿರುವುದು ಹೆಮ್ಮೆಯ ವಿಚಾರವಾಗಿದೆ ಎಂದು ತಿಳಿಸಿದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಪ್ರಾಸ್ತಾವಿಕವಾಗಿ ಮಾತನಾಡಿ ನಮ್ಮ ಸಂಘಟನೆ ಸಮಾಜಮುಖಿಯಾಗಿ ಕೆಲಸ ಮಾಡುತ್ತಿದೆ. ಕನ್ನಡ ನಾಡು, ನುಡಿ, ಗಡಿ ವಿಚಾರದಲ್ಲಿಯೂ ಜಾಗೃತಿಗೊಳಿಸುವ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಂಡಿದೆ. ಗಡಿನಾಡು ಕನ್ನಡ ಉತ್ಸವದಂತಹ ಕಾರ್ಯಕ್ರಮಗಳನ್ನು ಏರ್ಪಡಿಸುತ್ತಾ ಬಂದಿದ್ದೇವೆ. ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಇಂಡಿಗನತ್ತ ಶಾಲಾಭಿವೃದ್ಧಿಗೆ ಕೊಡುಗೆ ನೀಡಿದ್ದೇವೆ. ರಾಜ್ಯ ಸರ್ಕಾರಿ ನೌಕರರು ಸ್ಪಂದನಾಶೀಲರಾಗಿದ್ದಾರೆ ಎಂದರು. ಸಾಲೂರು ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಜೀಯವರು ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಸ್ವಾಗತಿಸಿದರು. ಇದೇ ವೇಳೆ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗೋಪಾಲ್ ಜಗದೀಶ್‌ರನ್ನು ಸನ್ಮಾನಿಸಲಾಯಿತು. ಮಲೆ ಮಹದೇಶ್ವರ ಬೆಟ್ಟದ ಗ್ರಾಪಂ ಅಧ್ಯಕ್ಷ ಜಿ. ಅರ್ಚನಾ ಪ್ರಕಾಶ್, ಕನ್ನಡ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ್ ಮತ್ತೀಹಳ್ಳಿ, ತಹಸೀಲ್ದಾರ್ ಮಂಜುಳ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಹಾಗೂ ತಾಲೂಕು ಘಟಕಗಳ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಜಾನಪದ ಕಲಾತಂಡ ಮೆರವಣಿಗೆ:ಕಾರ್ಯಕ್ರಮಕ್ಕೂ ಮೊದಲು ಜಾನಪದ ಕಲಾತಂಡಗಳ ಮೆರವಣಿಗೆ ಹಾಗೂ ಸಾಂಸ್ಕೃತಿಕ ನಡಿಗೆ ಕಾರ್ಯಕ್ರಮ ನಡೆಯಿತು. ಬೆಳಗ್ಗೆಯೇ ಕನ್ನಡ ಜಾಗೃತಿ ಜಾಥಾಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್, ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಚಾಲನೆ ನೀಡಿದರು. ಬಳಿಕ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಅರಣ್ಯದಂಚಿನ ಇಂಡಿಗನತ್ತ ಸರ್ಕಾರಿ ಪ್ರಾಥಮಿಕ ಶಾಲೆಗೆ ತೆರಳಿ ಶಾಲೆಯಲ್ಲಿ ಸ್ಮಾರ್ಟ್‌ಕ್ಲಾಸ್‌ಗೆ ಅಗತ್ಯವಿರುವ ಸಲಕರಣೆಗಳನ್ನು ನೀಡಿದರು. ಶಾಲೆಯ ಪೋಷಣೆಗೆ ಎಲ್ಲಾ ನೆರವು ಕಲ್ಪಿಸುವ ಪ್ರಕ್ರಿಯೆಗೆ ಚಾಲನೆ ನೀಡಿದರು.ಹಲವಾರು ವರ್ಷಗಳಿಂದ ಇಂಡಿಗನತ್ತ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕ ರಾಘವೇಂದ್ರ ಅವರನ್ನು ಸನ್ಮಾನಿಸಲಾಯಿತು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ, ಜಿಲ್ಲಾ ಅಧ್ಯಕ್ಷ ಚಂದ್ರಶೇಖರ್ ಸೇರಿದಂತೆ ರಾಜ್ಯ ಹಾಗೂ ಜಿಲ್ಲಾ ಸಂಘಟನೆಯ ಎಲ್ಲಾ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.