ಗದಗ: ಗದಗ ಕೆ.ಎಚ್. ಪಾಟೀಲ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಶನಿವಾರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ ನೀಡಿ, ಆಸ್ಪತ್ರೆಯ ಕಾರ್ಯವೈಖರಿ, ಹೆರಿಗೆ ಮತ್ತು ಬಾಣಂತಿ ವಿಭಾಗದ ಸೌಲಭ್ಯಗಳು, ನರ್ಸಿಂಗ್ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ಹಾಗೂ ಬಿ.ಸಿ.ಎಂ. ಹಾಸ್ಟೆಲ್‌ಗಳ ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಿದರು.
ಆನಂತರ ಮಾತನಾಡಿದ ಅವರು, ಆಸ್ಪತ್ರೆಯ ವೈದ್ಯಕೀಯ ಸೇವೆಗಳನ್ನು ಶ್ಲಾಘಿಸುವ ಜತೆಗೆ ಕೆಲವು ಪ್ರಮುಖ ಕೊರತೆಗಳು ಮತ್ತು ಲೋಪಗಳ ಕುರಿತು ಕಳವಳ ವ್ಯಕ್ತಪಡಿಸಿದರು. ಆಸ್ಪತ್ರೆಯಲ್ಲಿ ಕಳೆದ 3 ವರ್ಷಗಳಲ್ಲಿ ಗರ್ಭಿಣಿಯರು, ತಾಯಂದಿರ ಸಾವಿನ ಪ್ರಮಾಣ ಅತ್ಯಂತ ಕಡಿಮೆಯಿದ್ದು, ತೀವ್ರ ಸಮಸ್ಯೆಯಿಂದ ಬಳಲುವ ಬಾಣಂತಿಯರನ್ನು ರಕ್ಷಿಸಲು ಪ್ರತ್ಯೇಕ ಸ್ಪೆಷಲ್ ಟೀಮ್ ರಚಿಸಿರುವುದನ್ನು ಪ್ರಶಂಸಿದರು.ರಕ್ತದೊತ್ತಡ, ಹೆಮರೇಜ್ ಹಾಗೂ ಫಿಟ್ಸ್‌ನಂತಹ ಸಮಸ್ಯೆಯಿಂದ ತಾಯಂದಿರು ಅಸು ನೀಗುವುದನ್ನು ತಡೆಯಲು ಈ ಆಸ್ಪತ್ರೆ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮ ಅತ್ಯುತ್ತಮವಾಗಿದೆ. ಈ ಮಾದರಿಯನ್ನು ರಾಜ್ಯದ ಎಲ್ಲ ಬೋಧಕ ಆಸ್ಪತ್ರೆಗಳು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲೂ ಜಾರಿಗೆ ತರಲು ಆರೋಗ್ಯ ಇಲಾಖೆಯ ಆಯುಕ್ತರು ಹಾಗೂ ಸರ್ಕಾರ ಗಮನಕ್ಕೆ ತರುವುದಾಗಿ ತಿಳಿಸಿದರು.
ಕ್ಲಿನಿಕಲ್ ತರಬೇತಿಗೆ ತೆರಳುವ ಮುನ್ನ ನರ್ಸಿಂಗ್ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ನೀಡಬೇಕಾದ ಹೆಪಟೈಟಿಸ್ ಲಸಿಕೆಯನ್ನು ನೀಡಿಲ್ಲದಿರುವುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ಸಂಸ್ಥೆಯ ಅಡಿಯಲ್ಲೇ ಬರುವ ನರ್ಸಿಂಗ್ ವಿದ್ಯಾರ್ಥಿಗಳ ಆರೋಗ್ಯದ ಜತೆ ನಿರ್ಲಕ್ಷ್ಯ ವಹಿಸಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ತಕ್ಷಣವೇ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಂಡು, ಎಲ್ಲ ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೂಡಲೇ ಲಸಿಕೆ ಹಾಕಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರು.ಬಿಸಿಎಂ ಹಾಸ್ಟೆಲ್‌ನ ವಿದ್ಯಾರ್ಥಿಗಳಿಗೆ ಮೆನು ಪ್ರಕಾರ ಸರಿಯಾದ ಊಟ ಸಿಗುತ್ತಿಲ್ಲ ಹಾಗೂ ಸ್ನಾನ ಮತ್ತು ಬಟ್ಟೆ ತೊಳಯಲು ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ ಎಂಬ ದೂರುಗಳು ಬಂದಿವೆ. ರಾಯಚೂರಿನ ಲಿಂಗಸೂಗೂರಿನ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ 32 ಮಕ್ಕಳು ಆಹಾರ ವಿಷಪೂರಿತಗೊಂಡು ಆಸ್ಪತ್ರೆಗೆ ದಾಖಲಾದ ಘಟನೆಯನ್ನು ಸ್ಮರಿಸಿದ ಅಧ್ಯಕ್ಷರು, ಅಂತಹ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಿದರು.
ಇತ್ತೀಚಿನ ದಿನಗಳಲ್ಲಿ ಆಸ್ಪತ್ರೆಗಳಲ್ಲಿ ಹೆಣ್ಣು ಮಕ್ಕಳಿಗಿಂತ ಗಂಡು ಮಕ್ಕಳ ಜನನ ಪ್ರಮಾಣವೇ ಹೆಚ್ಚಾಗುತ್ತಿರುವುದು ಮತ್ತು ನೈಸರ್ಗಿಕ ನಿಯಮಕ್ಕೆ ವಿರುದ್ಧವಾಗಿ ಲಿಂಗಾನುಪಾತದಲ್ಲಿ ವ್ಯತ್ಯಾಸ ಕಾಣಿಸುತ್ತಿರುವುದು ಗಂಭೀರ ವಿಷಯ. ಇದು ಕಾನೂನುಬಾಹಿರವಾಗಿ ಒಳಗೊಳಗೇ ಲಿಂಗ ಪತ್ತೆ ಹಾಗೂ ಹೆಣ್ಣು ಭ್ರೂಣ ಹತ್ಯೆ ನಡೆಯುತ್ತಿರುವುದರ ಸೂಚಕವಾಗಿದೆ ಎಂದು ಬೇಸರ ವ್ಯಕ್ತ ಪಡಿಸಿದರು.
ಆಸ್ಪತ್ರೆಯಲ್ಲಿ ಡಿ ಗ್ರೂಪ್ ಮತ್ತು ಹೊರಗುತ್ತಿಗೆ ನೌಕರರಿಗೆ ಸಮವಸ್ತ್ರ, ಸೇವಾ ಭದ್ರತೆ ಹಾಗೂ ಪರಿಷ್ಕೃತ ಕನಿಷ್ಠ ವೇತನ ದೊರೆಯುವಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡುವ ಕುರಿತು ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಸ್ಪಷ್ಟೀಕರಣ ಕೇಳಲಾಗಿದ್ದು, ಎಲ್ಲ ಮಹಿಳೆಯರಿಗೂ ಇದು ಅನ್ವಯವಾಗುವಂತೆ ಸರ್ಕಾರದ ಮಟ್ಟದಲ್ಲಿ ಕ್ರಮ ವಹಿಸಲಾಗುವುದು ಎಂದರು.
ಕೆ.ಎಚ್. ಪಾಟೀಲ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ರಾಧಾ ಮಣ್ಣೂರು, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಡಾ. ನಂದಾ ಹಣಬರಹಟ್ಟಿ, ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಎಂ.ಎಂ. ತುಂಬರಮಟ್ಟಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಅಮಿತ್ ಬಿದರಿ, ಕೆ.ಎಚ್. ಪಾಟೀಲ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವೈದ್ಯಾಧಿಕಾರಿಗಳು ಹಾಜರಿದ್ದರು.