ವಿಶೇಷಚೇತನರಿಗೆ ಉತ್ತಮ ಶಿಕ್ಷಣ ನೀಡಿ: ಶಾಸಕ ತುನ್ನೂರು

| Published : Dec 05 2024, 12:32 AM IST

ಸಾರಾಂಶ

Give better education to the gifted: MLA Tunnuru

-ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ । ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿಕಲಚೇತನರಿಗೆ ಸನ್ಮಾನ

-----

ಕನ್ನಡಪ್ರಭ ವಾರ್ತೆ ಯಾದಗಿರಿ

ದೇಹದಿಂದ ಮಾತ್ರ ವಿಕಲಚೇತನರಾಗಿದ್ದರೂ ಶಿಕ್ಷಣ, ಕ್ರೀಡೆ, ಸಂಗೀತ ಮತ್ತು ಪ್ರತಿಯೊಂದರಲ್ಲಿ ಸಾಧನೆ ಮಾಡಿದ್ದಾರೆ. ವಿಶೇಷಚೇತನರಿಗೆ ಪ್ರೋತ್ಸಾಹ ನೀಡಿ, ಗುಣಮಟ್ಟದ ಶಿಕ್ಷಣ ಒದಗಿಸಬೇಕು. ಸಂಬಂಧಿಸಿದ ಅಧಿಕಾರಿಗಳು ಸರ್ಕಾರದ ಪ್ರತಿಯೊಂದು ಸೌಲಭ್ಯಗಳನ್ನು ತಲುಪಿಸಬೇಕು ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯಿತಿ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಡೆದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿಕಲಚೇತನರು ಕೂಡ ಮನುಷ್ಯರೆ. ಅವರಿಗೂ ಭಾವನೆಗಳಿವೆ. ಜಗತ್ತಿನ ಆಗು-ಹೋಗುಗಳಿಗೆ ಸ್ಪಂದಿಸುವ ಬೌದ್ಧಿಕ ಸಾಮರ್ಥ್ಯವಿದೆ ಎಂದರು. ಅಂಗವಿಕಲರಿಗೂ ಸ್ವಾಭಿಮಾನದಿಂದ ಬದುಕುವ ಹಕ್ಕಿದೆ. ಅವರು ಸಮಾಜದ ಮುಖ್ಯವಾಹಿನಿಗಳಲ್ಲಿ ಗುರುತಿಸಿಕೊಳ್ಳಬಲ್ಲರು. ರಾಜಕೀಯ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಮಾಹಿತಿ ತಂತ್ರಜ್ಞಾನ, ಮನೋರಂಜನೆ ಮುಂತಾದ ಕ್ಷೇತ್ರದಲ್ಲಿ ಗುರುತಿಸಬಲ್ಲರು. ವಿಶೇಷ ಸಾಧನೆ ಮಾಡಬಲ್ಲರು. ಸಮಾಜದಲ್ಲಿ ಅವರ ಮಹತ್ವ ಜನರಿಗೆ ಗೊತ್ತಾಗಬೇಕೆಂಬ ಉದ್ದೇಶದಿಂದಲೇ ವರ್ಷದ ಒಂದು ದಿನವನ್ನು ಅವರಿಗಾಗಿ ಮೀಸಲಿರಿಸಲಾಗಿದೆ ಎಂದರು.

ಜಿಲ್ಲಾಧಿಕಾರಿ ಡಾ. ಸುಶೀಲಾ ಮಾತನಾಡಿ, ವಿಕಲಚೇತನರು ಒಂದು ವಿಶೇಷ ಶಕ್ತಿ ಹೊಂದಿರುತ್ತಾರೆ. ಸಾಮಾನ್ಯ ವ್ಯಕ್ತಿಗಿಂತ ಅವರಲ್ಲಿ ನೆನಪಿನ ಶಕ್ತಿ ಹೆಚ್ಚಾಗಿರುತ್ತದೆ. ಅವರಿಗೆ ಅದು ದೇವರು ಕೊಟ್ಟ ವರ. ಇಂದು ನಾವು ವಿಕಲಾಂಗ ವ್ಯಕ್ತಿಗಳ ಅಂತಾರಾಷ್ಟ್ರೀಯ ದಿನ (ಡಿ.3) 1992 ರಿಂದ ವಿಶ್ವಸಂಸ್ಥೆಯಿಂದ ಉತ್ತೇಜಿಸಲ್ಪಟ್ಟ ಅಂತಾರಾಷ್ಟ್ರೀಯ ಆಚರಣೆಯಾಗಿದೆ. ಇದನ್ನು ವಿಶ್ವ ದಲ್ಲಿ ವಿವಿಧ ಹಂತದ ಯಶಸ್ಸಿನೊಂದಿಗೆ ಆಚರಿಸಲಾಗುತ್ತದೆ ಎಂದರು.

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿಕಲಚೇತನರನ್ನು ಸನ್ಮಾನಿಸಲಾಯಿತು. ಕ್ರೀಡೆಯಲ್ಲಿ ಭಾಗವಹಿಸಿರುವ ಕ್ರೀಡಾಪಟುಗಳಿಗೆ ಪ್ರಥಮ ಹಾಗೂ ದ್ವಿತೀಯ, ತೃತೀಯ ಬಹುಮಾನವನ್ನು ಮಕ್ಕಳಿಗೆ ವಿತರಿಸಲಾಯಿತು.

ಹಿರಿಯ ಸಿವಿಲ್ ನ್ಯಾಯಾಧೀಶರಾದ ಮರಿಯಪ್ಪ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರಣೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೀರಣ್ಣಗೌಡ, ಜಿಲ್ಲಾ ಅಂಗವಿಕಲರ ಕಲ್ಯಾಣಧಿಕಾರಿ ಶರಣಬಸಪ್ಪ ಪಾಟೀಲ್, ಪ್ರಾಂಶುಪಾಲ ಸುಭಾಶ್ಚಂದ್ರ ಕೌಲಗಿ, ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ರಾಜು ಬಾವಿಹಳ್ಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ ಇತರರಿದ್ದರು.

------

ಫೋಟೊ: ಯಾದಗಿರಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿಕಲಚೇತನರನ್ನು ಸನ್ಮಾನಿಸಲಾಯಿತು.

-----

4ವೈಡಿಆರ್8