ಸಾರಾಂಶ
ರಾಯಚೂರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಅಂಚೆ ಮತದಾನದ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಮಾತನಾಡಿದರು.
ಕನ್ನಡಪ್ರಭ ವಾರ್ತೆ ರಾಯಚೂರು
ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ಮತದಾರರಿಗೆ ಅಂಚೆ ಮತ ಪತ್ರಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ ಆಯಾ ಇಲಾಖಾವಾರು ಅಂಚೆ ಮತಪತ್ರಕ್ಕಾಗಿ ಮಾಹಿತಿಯನ್ನು ನೀಡುವಂತೆ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಹೇಳಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಅಂಚೆ ಮತದಾನದ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಗತ್ಯ ಸೇವೆಗಳಿಗೊಳಪಡುವ ಅಧಿಕಾರಿಗಳು, ಇಲಾಖಾ ಸಿಬ್ಬಂದಿ, ಸೇರಿದಂತೆ ಇನ್ನಿತರರಿಗೆ ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ವ್ಯವಸ್ಥೆ ಮಾಡಲಾಗಿದ್ದು, ಚುನಾವಣಾ ಕರ್ತವ್ಯಕ್ಕಾಗಿ ನಿಯೋಜನೆಗೊಂಡವರು ಅಂಚೆ ಮತಪತ್ರದ ಮೂಲಕ ಮತದಾನ ಮಾಡಬಹುದಾಗಿದ್ದು, ಇಂತಹ ಮತದಾರರ ಪೂರ್ಣ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ಒದಗಿಸಬೇಕು ಎಂದರು.
ಜಿಲ್ಲಾ ಮಟ್ಟದಲ್ಲಿ ಒಬ್ಬ ನುರಿತ ನೋಡಲ್ ಅಧಿಕಾರಿಗಳನ್ನು ಅಂಚೆ ಮತಪತ್ರ ನಿರ್ವಹಣೆಗಾಗಿ ನೇಮಕ ಮಾಡಬಹುದಾಗಿದ್ದು, ಅಗತ್ಯವಿದ್ದಲ್ಲಿ ಸಹಾಯಕ್ಕಾಗಿ ವಿಧಾನಸಭಾ ಕ್ಷೇತ್ರವಾರು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಬಹುದಾಗಿದೆ. ಈ ಬಗ್ಗೆ ಸೂಕ್ತ ಗಮನಹರಿಸಬೇಕು ಎಂದು ತಿಳಿಸಿದರು.ಅಂಚೆ ಮತಪತ್ರಕ್ಕಾಗಿ ನೇಮಕಗೊಂಡ ನೋಡಲ್ ಅಧಿಕಾರಿಗಳು ನಿಖರವಾದ ದತ್ತಾಂಶಗಳನ್ನು ಸಂಗ್ರಹಿಸಿ ನಿರ್ವಹಣೆ ಮಾಡಬೇಕು. ಅಂಚೆ ಮತಪತ್ರಕ್ಕಾಗಿ ಆಯಾ ಇಲಾಖೆಯಿಂದ ದತ್ತಾಂಶಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬೇಕು ಮತ್ತು ಅಂಚೆ ಮತಪತ್ರಗಳ ಅವಶ್ಯಕತೆ ಇಲ್ಲದೇ ಇದ್ದಲ್ಲಿ ಲಿಖಿತ ರೂಪದಲ್ಲಿ ಸಲ್ಲಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜೆಸ್ಕಾಂ ಕಾರ್ಯ ಮತ್ತು ಪಾಲನಾ ವೃತ್ತದ ಅಧೀಕ್ಷಕ ಅಭಿಯಂತರ ಚಂದ್ರಶೇಖರ ದೇಸಾಯಿ, ಖಜಾನೆ ಇಲಾಖೆಯ ಅಧಿಕಾರಿ ಮಹಿಬೂಬಿ, ಜಿಲ್ಲಾ ಕಾರಾಗೃಹ ಅಧಿಕಾರಿ, ಜಿಲ್ಲಾ ಅಗನಿಶಾಮಕ ಇಲಾಖೆಯ ಅಧಿಕಾರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.